ಜೆಡಿಎಸ್‌ನ ಮತ್ತೊಂದು ವಿಕೆಟ್ ಪತನ: ಮಾಜಿ ಎಂಎಲ್‌ಸಿ ಶ್ರೀನಾಥ್ ಕಾಂಗ್ರೆಸ್‌ಗೆ?
ಮಾಜಿ ಸಂಸದ ಎಚ್.ಜಿ. ರಾಮುಲು ಅವರ ಪುತ್ರ ಹಾಗೂ ವಿಧಾನಪರಿಷತ್ ಮಾಜಿ ಸದಸ್ಯ ಎಚ್.ಆರ್. ಶ್ರೀನಾಥ ಅವರು ಜೆಡಿಎಸ್‌ನ ‘ಹೊರೆ’ ಇಳಿಸಿ ‘ಕೈ’ ಹಿಡಿಯಲು ಸಜ್ಜಾಗಿದ್ದಾರೆ.
ಗಂಗಾವತಿ (ಜೂ.14): ಮಾಜಿ ಸಂಸದ ಎಚ್.ಜಿ. ರಾಮುಲು ಅವರ ಪುತ್ರ ಹಾಗೂ ವಿಧಾನಪರಿಷತ್ ಮಾಜಿ ಸದಸ್ಯ ಎಚ್.ಆರ್. ಶ್ರೀನಾಥ ಅವರು ಜೆಡಿಎಸ್‌ನ ‘ಹೊರೆ’ ಇಳಿಸಿ ‘ಕೈ’ ಹಿಡಿಯಲು ಸಜ್ಜಾಗಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಪಕ್ಷ ಸೇರುವ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ಹೇಳಿವೆ.
2006ರಲ್ಲಿ ಸ್ಥಳೀಯ ಸಂಸ್ಥೆಗಳಿಂದ ಕಾಂಗ್ರೆಸ್ ಪಕ್ಷದಿಂದ ಎಚ್.ಆರ್. ಶ್ರೀನಾಥ ವಿಧಾನಪರಿಷತ್‌ಗೆ ಆಯ್ಕೆಯಾಗಿದ್ದರು. ನಂತರ 2013ರಲ್ಲಿ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ನಂತರ ಕಾಂಗ್ರೆಸ್ ನಿರ್ಲಕ್ಷ್ಯ ವಹಿಸಿದೆ ಎಂಬ ಕಾರಣಕ್ಕೆ ಜೆಡಿಎಸ್‌ನತ್ತ ಸಾಗಿದ್ದರು. ಅಲ್ಲದೇ ಜೆಡಿಎಸ್‌ನ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕವಾಗಿದ್ದರು. ಇದೀಗ ವಿಧಾನಸಭಾ ಚುನಾವಣೆ ಇನ್ನೊಂದು ವರ್ಷ ಇರುವಾಗಲೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ.
ಜೆಡಿಎಸ್ ತೊರೆದು ಬಿಜೆಪಿ ಸೇರಿದ ಜನತಾ ಪರಿವಾರದ ಪ್ರಭಾವಿ ನಾಯಕ
ಡಿ.ಕೆ. ಶಿವಕುಮಾರ ಗ್ರೀನ್ ಸಿಗ್ನಲ್: ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರನ್ನು ವಿಧಾನಪರಿಷತ್ ಮಾಜಿ ಸದಸ್ಯ ಎಚ್.ಆರ್. ಶ್ರೀನಾಥ ಅವರು ಭೇಟಿಯಾಗಿ ಪಕ್ಷ ಸೇರ್ಪಡೆ ಬಗ್ಗೆ ಚರ್ಚಿಸಿದ್ದಾರೆ. ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ ನೇತೃತ್ವದಲ್ಲಿ ಡಿಕೆಶಿಯವರ ನಿವಾಸಕ್ಕೆ ತೆರಳಿ ಕಾಂಗ್ರೆಸ್ ಸೇರ್ಪಡೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಗಂಗಾವತಿ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಕಲ್ಪಿಸುವಂತೆ ಕೋರಿದ್ದಾರೆಂದು ತಿಳಿದುಬಂದಿದೆ. ಕಳೆದ ಎರಡು ತಿಂಗಳ ಹಿಂದೆ ಬಿ.ಕೆ. ಹರಿಪ್ರಸಾದ ಅವರು ಮಾಜಿ ಸಂಸದ ಎಚ್.ಜಿ. ರಾಮುಲು ನಿವಾಸಕ್ಕೆ ಆಗಮಿಸಿ ಕಾಂಗ್ರೆಸ್ ಪಕ್ಷ ಸಂಘಟನೆ ಮತ್ತು ಹಳಬರನ್ನು ಪಕ್ಷಕ್ಕೆ ಕರೆತರುವ ಬಗ್ಗೆ ಸಮಾಲೋಚನೆ ನಡೆಸಿದ್ದರು.
ಕಾಂಗ್ರೆಸ್‌ನಲ್ಲಿ ಪೈಪೋಟಿ: ಕಾಂಗ್ರೆಸ್ ಪಕ್ಷದ ಸದಸ್ಯತ್ವ ಅಭಿಯಾನದಲ್ಲಿ ಮುಂಚೂಣಿಯಲ್ಲಿದ್ದ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರು ಗಂಗಾವತಿ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಮುಸ್ಲಿಂ ಸಮುದಾಯದ ಅಧಿಕ ಮತದಾರರು ಕ್ಷೇತ್ರದಲ್ಲಿ ಇದ್ದಾರೆ. ಇನ್ನು ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ, ಮಾಜಿ ಸಂಸದ ಶಿವರಾಮಗೌಡ, ಇದೀಗ ಎಚ್.ಆರ್. ಶ್ರೀನಾಥ ಅವರೂ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.
ಶ್ರೀರಾಮುಲುಗೆ ಟಕ್ಕರ್ ಕೊಟ್ಟ ನಾಗೇಂದ್ರ, ಜಿದ್ದಾಜಿದ್ದಿಗೆ ಕಾರಣವಾಯ್ತು ಬಳ್ಳಾರಿ ಗ್ರಾಮಾಂತರ
ಶೀಘ್ರದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದು, ಜೆಡಿಎಸ್‌ಗೆ ಗುಡ್ ಬೈ ಹೇಳುತ್ತಿದ್ದೇನೆ. ಗಂಗಾವತಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ದಿಂದ ಸ್ಪರ್ಧಿಸುವ ಅವಕಾಶ ದೊರೆಯಲಿದೆ. ಈ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರನ್ನು ಭೇಟಿಯಾಗಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಹ ಭೇಟಿಯಾಗಲಿದ್ದೇನೆ.
-ಎಚ್.ಆರ್. ಶ್ರೀನಾಥ, ವಿಧಾನಪರಿಷತ್ ಮಾಜಿ ಸದಸ್ಯ