ಲೋಕಸಭಾ ಚುನಾವಣೆಗೂ ಮುನ್ನ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಕೇಂದ್ರ ಸಚಿವ ಅಮಿತ್‌ ಶಾ ನಡವಿನ ಬಿಜೆಪಿ- ಜೆಡಿಎಸ್‌ ಮೈತ್ರಿ ಮಾತುಕತೆ ಯಶಸ್ವಿಯಾಗಿದೆ. ಆದರೆ, ಮಂಡ್ಯ ಕ್ಷೇತ್ರದ ಹಂಚಿಕೆ ಕಗ್ಗಂಟಾಗಿದೆ.

ಬೆಂಗಳೂರು (ಸೆ.07): ಲೋಕಸಭಾ ಚುನಾವಣೆ 2024ಕ್ಕೂ ಮುನ್ನ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೊಂದಿಗೆ ಜೆಡಿಎಸ್‌-ಬಿಜೆಪಿ ಮೈತ್ರಿ ಬಗ್ಗೆ ಚರ್ಚೆ ಮಾಡಿ ಒಪ್ಪಂದ ಮಾಡಿಕೊಂಡಿದ್ದಾರೆ. ಈ ಮೈತ್ರಿ ಯಶಸ್ವಿಯೂ ಆಗಿದ್ದು, ಕ್ಷೇತ್ರಗಳ ಹಂಚಿಕೆಯ ಒಪ್ಪಂದವನ್ನೂ ಮಾಡಿಕೊಳ್ಳಲಾಗಿದೆ.

ಈ ಮೂಲಕ ಕರ್ನಾಟಕ ರಾಜ್ಯದ ರಾಜಕಾರಣದಲ್ಲಿ ಲೋಕಸಭಾ ಚುನಾವಣೆಗೂ ಮುನ್ನ ಹೊಸದೊಂದು ತಿರುವು ಕಂಡುಬರುತ್ತಿದೆ. ಇನ್ನು ಮೈತ್ರಿ ಕುರಿತಂತೆ ದೆಹಲಿಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸೆ.4ರಂದು ಸಂಜೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಮನೆಯಲ್ಲಿಯೇ ಬಿಜೆಪಿ-ಜೆಡಿಎಸ್‌ ಮೈತ್ರಿ ಬಗ್ಗೆ ಚರ್ಚೆ ಮಾಡಿದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್‌ ನಡ್ಡಾ ಕೂಡ ಹಾಜರಿದ್ದರು. ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿ ಮಾತನಾಡಿದ ದೇವೇಗೌಡರು ಮೈತ್ರಿ ಒಪ್ಪಂದದ ಬಗ್ಗೆ ಖಚಿತ ಮಾಡಿಕೊಂಡರು.

ಬಿಜೆಪಿ-ಜೆಡಿಎಸ್‌ ಮೈತ್ರಿ ಬಗ್ಗೆ ದೇವೇಗೌಡರು ಸ್ಪಷ್ಟಪಡಿಸಲಿ: ಸಚಿವ ಚಲುವರಾಯಸ್ವಾಮಿ

ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮೈತ್ರಿಗೆ ಒಪ್ಪಿಗೆ ಸೂಚಿಸಿದ ಬೆನ್ನಲ್ಲಿಯೇ ಲೋಕಸಭಾ ಚುನಾವಣೆ 2024ರಲ್ಲಿ ಕ್ಷೇತ್ರ ಹಂಚಿಕೆ ಬಗ್ಗೆಯೂ ಚರ್ಚೆ ಮಾಡಿದ್ದಾರೆ. ಈ ವೇಳೆ ದೇವೇಗೌಡರು, ಹಾಸನ, ಮಂಡ್ಯ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡಬೇಕು ಎಂದು ಹೇಳಿದ್ದಾರೆ. ಆದರೆ, ಈ ಬಗ್ಗೆ ಪುನಃ ನರೇಂದ್ರ ಮೋದಿ ಅವರೊಂದಿಗೆ ಚರ್ಚೆ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸದ್ಯಕ್ಕೆ ನಾಲ್ಕು ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡುವುದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಆದರೆ, ಮಂಡ್ಯ ಲೋಕಸಭಾ ಕ್ಷೇತ್ರದ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚೆ ಮಾಡಿ ಅಂತಿಮ ತೀರ್ಮಾನ ಮಾಡೋಣ ಎಂದು ತಿಳಿಸಿದ್ದಾರೆ.

ಜೆಡಿಎಸ್‌- ಬಿಜೆಪಿ ಮೈತ್ರಿ ಸಭೆ ಯಶಸ್ವಿಯಾದ ಬೆನ್ನಲ್ಲಿಯೇ ಈ ವಿಚಾರವನ್ನು ಎಲ್ಲಿಯೂ ಹಂಚಿಕೊಳ್ಳದೇ ಮಾಜಿ ಪ್ರಧಾನಿ ದೇವೇಗೌಡರು ಗೌಪ್ಯತೆಯನ್ನು ಕಾಪಾಡಿಕೊಂಡಿದ್ದಾರೆ. ಜೊತೆಗೆ, ಸೆ.10ರಂದು ಅರಮನೆ ಮೈದಾನದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜೆಡಿಎಸ್‌ ನಾಯಕರ ಸಭೆಯನ್ನು ಕರೆದು, ಈ ವಿಚಾರವನ್ನು ಪ್ರಸ್ತಾಪ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಇನ್ನು ಜೆಡಿಎಸ್‌ ನಾಯಕ ಸಭೆಯಲ್ಲಿ ಬಿಜೆಪಿ- ಜೆಡಿಎಸ್‌ ಮೈತ್ರಿಯ ಬಗ್ಗೆ ಪ್ರಸ್ತಾಪ ಮಾಡಿ ಅಭಿಪ್ರಾಯವನ್ನು ಪಡೆಯುತ್ತಾರೆ.

Party Rounds: ಬಿಜೆಪಿ-ಜೆಡಿಎಸ್ ಮೈತ್ರಿಗೆ ಉಭಯ ಪಕ್ಷದಲ್ಲೂ ವಿರೋಧ

ನಂತರ, ಕ್ಷೇತ್ರಗಳಲ್ಲಿ ಯಾವ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು ಎಂಬ ಬಗ್ಗೆಯೂ ಚರ್ಚೆ ಮಾಡಲಾಗುತ್ತದೆ ಎಂಬ ಸುಳಿವು ಸಿಕ್ಕಿದೆ.
ಬಿಜೆಪಿ- ಜೆಡಿಎಸ್‌ ಮೈತ್ರಿ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಸುದ್ದಿ ಬಿತ್ತರ ಮಾಡಿತ್ತು. ಆದರೆ, ರಾಜ್ಯ ಬಿಜೆಪಿ ನಾಯಕರು ಹಾಗೂ ಜೆಡಿಎಸ್‌ ನಾಯಕರು ಈ ಬಗ್ಗೆ ಅಲ್ಲಗಳೆದಿದ್ದರು. ಆದ್ದರಿಂದ ಕೆಲವು ದಿನಗಳವರೆಗೆ ಮೈತ್ರಿಗೆ ಅಲ್ಪವಿರಾಮ ಬಿದ್ದಿತ್ತು. ಈಗ ಮತ್ತೆ ದೊಡ್ಡಗೌಡರು ಮೈತ್ರಿ ಮಾತುಕತೆಗೆ ಚಾಲನೆ ನೀಡಿದ್ದು, ಯಶಸ್ವಿಯೂ ಆಗಿದೆ.