Breaking: ಬಿಜೆಪಿಯ ಮಾಜಿ ಶಾಸಕ ರಘುಪತಿ ಭಟ್ ಉಚ್ಛಾಟನೆ
ಪದವೀಧರ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ.
ಬೆಂಗಳೂರು (ಮೇ.25): ಬಿಜೆಪಿಯಿಂದ ಮಾಜಿ ಶಾಸಕ ರಘುಪತಿಭಟ್ ಅವರನ್ನು ಉಚ್ಛಾಟನೆ ಮಾಡಲಾಗಿದೆ. ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಪದವೀಧರ ಕ್ಷೇತ್ರದಿಂದ ಸ್ಪರ್ಧೆ ಹಿನ್ನಲೆಯಲ್ಲಿ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ. ಈ ಸಂಗತಿ ಪಕ್ಷಕ್ಕೆ ಮುಜುಗರ ತಂದಿದೆ. ಈ ಬಗ್ಗೆ ಸ್ಪಷ್ಟನೆ ಕೊಡುವಂತೆ ಶಿಸ್ತು ಸಮಿತಿಯಿಂದ ನೋಟೀಸ್ ನೀಡಲಾಗಿತ್ತು. ಇದೀಗ ಶಿಸ್ತು ಸಮಿತಿಯಿಂದ ರಘಪತಿಭಟ್ ಉಚ್ಚಾಟನೆ ಮಾಡಿ ಅದೇಶ ಹೊರಡಿಸಲಾಗಿದೆ. ವಿಧಾನಪರಿಷತ್ ಚುನಾವಣೆಗೆ ನೈರುತ್ಯ ಪದವೀಧರರ ಕ್ಷೇತ್ರದಿಂದ ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಕಾರಣಕ್ಕೆ ಪಕ್ಷದಿಂದ ನಿಮ್ಮನ್ನು ಉಚ್ಛಾಟನೆ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜು ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತಿ ವಿಧಾನಪರಿಷತ್ ಚುನಾವಣೆಗೆ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ವಾಗಿ ಸ್ಪರ್ಧೆ ಮಾಡುವ ಮೂಲಕ ಪಕ್ಷಕ್ಕೆ ಮುಜುಗರ ತಂದಿರುತ್ತೀರಿ. ಇದು ಪಕ್ಷದ ಶಿಸ್ತಿನ ಉಲ್ಲಂಘನೆ. ಆದ್ದರಿಂದ ನಿಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.