Asianet Suvarna News Asianet Suvarna News

ಸರ್ಕಾರಿ ಶಾಲೆಗಳಿಗಿನ್ನು ಉಚಿತ ವಿದ್ಯುತ್‌, ನೀರು: ಸಿದ್ದರಾಮಯ್ಯ ಘೋಷಣೆ

ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್‌, ಕುಡಿಯುವ ನೀರು ಸರಬರಾಜು ಮಾಡಲಾಗುವುದು ಎಂದು ಘೋಷಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮತ್ತೊಂದೆಡೆ ಕನ್ನಡದ ಅಸ್ಮಿತೆಗೆ ಒತ್ತು ನೀಡಲು ಕೇಂದ್ರ ಸರ್ಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡದಲ್ಲೇ ಬರೆಯಲು ಅವಕಾಶ ನೀಡಬೇಕೆಂದು ಕೇಂದ್ರಕ್ಕೆ ಪತ್ರ ಬರೆಯುವುದಾಗಿ ಸ್ಪಷ್ಟಪಡಿಸಿದರು. 
 

Free electricity and water for government schools Says CM Siddaramaiah gvd
Author
First Published Nov 2, 2023, 5:23 AM IST

ಬೆಂಗಳೂರು (ನ.02): ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್‌, ಕುಡಿಯುವ ನೀರು ಸರಬರಾಜು ಮಾಡಲಾಗುವುದು ಎಂದು ಘೋಷಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮತ್ತೊಂದೆಡೆ ಕನ್ನಡದ ಅಸ್ಮಿತೆಗೆ ಒತ್ತು ನೀಡಲು ಕೇಂದ್ರ ಸರ್ಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡದಲ್ಲೇ ಬರೆಯಲು ಅವಕಾಶ ನೀಡಬೇಕೆಂದು ಕೇಂದ್ರಕ್ಕೆ ಪತ್ರ ಬರೆಯುವುದಾಗಿ ಸ್ಪಷ್ಟಪಡಿಸಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಬುಧವಾರ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

‘ಗುಣಮಟ್ಟದ ಶಿಕ್ಷಣ ನೀಡಿ ಉತ್ತಮ ಕಲಿಕಾ ವಾತಾವರಣ ಸೃಷ್ಟಿಸುವುದು ಸರ್ಕಾರದ ಆದ್ಯತೆಯಾಗಿದೆ. ಆದ್ದರಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ವಿದ್ಯುತ್‌, ಕುಡಿಯುವ ನೀರು ಸರಬರಾಜು ಮಾಡಲಾಗುವುದು. ಕೇಂದ್ರ ಸರ್ಕಾರವು ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ಕನ್ನಡದಲ್ಲಿಯೂ ಅವಕಾಶ ನೀಡುವಂತೆ ಹಿಂದೆಯೂ ನಾನು ಒತ್ತಾಯಿಸಿದ್ದೆ. ಅಗತ್ಯ ಬಿದ್ದರೆ ಕೇಂದ್ರ ಸರ್ಕಾರಕ್ಕೆ ಮತ್ತೆ ಪತ್ರ ಬರೆದು ಒತ್ತಾಯಿಸುತ್ತೇನೆ’ ಎಂದು ಸ್ಪಷ್ಟಪಡಿಸಿದರು.

ಕೇಂದ್ರ ಸಚಿವ ಶೆಖಾವತ್‌ ಆತ್ಮವಿಮರ್ಶೆ ಮಾಡಿಕೊಳ್ಳಲಿ: ಸಿದ್ದರಾಮಯ್ಯ

ಹಿಂದಿನ ಸರ್ಕಾರ ಮಾಡಲಿಲ್ಲ: ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ‘ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕನ್ನಡ’ ಹೆಸರಿನಲ್ಲಿ ಇಡೀ ವರ್ಷ ಕನ್ನಡ ಸಾಂಸ್ಕೃತಿಕ ಸಂಭ್ರಮ ಹೆಸರಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಹಿಂದಿನ ಬಿಜೆಪಿ ಸರ್ಕಾರ ಕರ್ನಾಟಕದ 50ನೇ ವರ್ಷಕ್ಕೆ ಈ ರೀತಿ ಕಾರ್ಯಕ್ರಮ ಆಯೋಜಿಸಬೇಕಿತ್ತು. ಆದರೆ ಅವರು ಮಾಡಲಿಲ್ಲ. ಆದ್ದರಿಂದ ಈಗ ನಾವು ಮಾಡುತ್ತಿದ್ದೇವೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ದೇವರಾಜ ಅರಸು ಅವರು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷಗಳಾಗಿವೆ. ಕನ್ನಡದಲ್ಲೇ ವ್ಯವಹರಿಸುವ ಪ್ರತಿಜ್ಞೆಯನ್ನು ಮಾಡುವ ಮೂಲಕ ನಾವೆಲ್ಲ ತಾಯ್ನೆಲದ ಋಣ ತೀರಿಸೋಣ. ಪ್ರತಿಯೊಂದು ಭಾಷೆಗೂ ನಾವು ಗೌರವ ಕೊಡಬೇಕು. ಆದರೆ ನಮ್ಮ ನಾಡಿನಲ್ಲಿ ವ್ಯವಹರಿಸುವಾಗ, ಆಡಳಿತದಲ್ಲಿ ಕನ್ನಡ ಬಳಕೆ ಆಗಬೇಕು. ಇದನ್ನು ಪ್ರತಿಯೊಬ್ಬ ಅಧಿಕಾರಿಯೂ ಚಾಚೂ ತಪ್ಪದೆ ಪಾಲಿಸಬೇಕು. ರಾಜಕಾರಣಿಗಳು ಕನ್ನಡದಲ್ಲೇ ವ್ಯವಹರಿಸಬೇಕು ಎಂದು ಕರೆ ನೀಡಿದರು.

ಕಡ್ಡಾಯಕ್ಕೆ ಕೋರ್ಟ್ ಸಹಕಾರವಿಲ್ಲ: ಶಾಲೆಗಳಲ್ಲಿ ಕನ್ನಡ ಕಡ್ಡಾಯಗೊಳಿಸುವ ನಮ್ಮ ಪ್ರಯತ್ನಗಳಿಗೆ ನ್ಯಾಯಾಲಯ ಸಹಕಾರ ನೀಡುತ್ತಿಲ್ಲ. ಮಕ್ಕಳನ್ನು ಅವರ ಇಷ್ಟದ ಭಾಷೆಯಲ್ಲಿ ಕಲಿಸುವುದು ಪೋಷಕರ ನಿರ್ಧಾರಕ್ಕೆ ಬಿಟ್ಟ ವಿಷಯ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದರೆ, ಮಾತೃಭಾಷೆಯ ಮಾಧ್ಯಮದಲ್ಲೇ ಕಲಿಯುವುದು ಅತ್ಯಂತ ವೈಜ್ಞಾನಿಕ ಎನ್ನುವುದನ್ನು ಗ್ರಹಿಸಬೇಕು. ಕನ್ನಡದಲ್ಲಿ ಕಲಿತರೆ ಉದ್ಯೋಗ ಸಿಗುವುದಿಲ್ಲ ಎಂಬ ತಪ್ಪು ಕಲ್ಪನೆಯಿಂದ ಇಂಗ್ಲಿಷ್ ಕಾನ್ವೆಂಟ್ ವ್ಯಾಮೋಹ ಬೆಳೆಸಿಕೊಳ್ಳಲಾಗಿದೆ. ಇದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಾ.ಕೆ.ಗೋವಿಂದರಾಜು, ರಾಜ್ಯಸಭಾ ಸದಸ್ಯ ಲೆಹರ್‌ ಸಿಂಗ್‌, ಶಾಸಕರಾದ ಆರ್.ವಿ.ದೇಶಪಾಂಡೆ, ಎನ್.ಎ.ಹ್ಯಾರಿಸ್ ಮತ್ತಿತರರು ಉಪಸ್ಥಿತರಿದ್ದರು.

ನಾನೂ ರೈತನ ಮಗ, ಕಷ್ಟ ಏನೆಂದು ನನಗೂ ಗೊತ್ತಿದೆ: ಸಿದ್ದರಾಮಯ್ಯ

ವೇದಿಕೆಯಲ್ಲೇ ಮನವಿಗೆ ಸ್ಪಂದಿಸಿ ಫಟಾಫಟ್‌ ಉಚಿತ ಘೋಷಣೆ!: ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ವಿದ್ಯುತ್‌ ಹಾಗೂ ನೀರನ್ನು ಸರಬರಾಜು ಮಾಡಬೇಕು ಎಂದು ಸಮಾರಂಭದಲ್ಲಿ ಪಾಲ್ಗೊಂಡಿದ್ದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಚೀಟಿಯೊಂದನ್ನು ಕಳುಹಿಸಿಕೊಟ್ಟರು. ತಕ್ಷಣ ಮುಖ್ಯ ಕಾರ್ಯದರ್ಶಿ ವಂದಿತಾ ಶಮಾ ಅವರನ್ನು ಕರೆದ ಸಿದ್ದರಾಮಯ್ಯ, ಇದರ ಬಗ್ಗೆ ಸಮಗ್ರ ಮಾಹಿತಿ ನೀಡುವಂತೆ ಕೋರಿದರು. ಬಳಿಕ ಶರವೇಗದಲ್ಲಿ ಪ್ರಕ್ರಿಯೆಗಳು ನಡೆದು ಮಾಹಿತಿ ಸಂಗ್ರಹವಾಯಿತು. ನಂತರ ಭಾಷಣ ಮಾಡಲು ಬಂದ ಸಿದ್ದರಾಮಯ್ಯ ಅವರು ಈ ಉಚಿತ ಘೋಷಣೆ ಮಾಡಿದರು.

Follow Us:
Download App:
  • android
  • ios