ಸಿಲಿಂಡರ್ ಅಭಾವದ ಬಗ್ಗೆ ರಾಜ್ಯ ಸರ್ಕಾರವನ್ನು ಪ್ರಶ್ನಿಸುವುದು ಸರಿಯಲ್ಲ. ಮುನ್ನೆಚ್ಚರಿಕೆ ವಹಿಸಿ ಸಿದ್ಧತೆ ಮಾಡಿಕೊಳ್ಳದ ಕಾರಣವೇ ಇಂದು ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಚಿವ ಕೆ.ಜೆ.ಜಾರ್ಜ್ ಆಕ್ರೋಶ ವ್ಯಕ್ತಪಡಿಸಿದರು.

ಗದಗ (ಮಾ.17): ದೇಶದಲ್ಲಿ ಉಂಟಾಗಿರುವ ಸಿಲಿಂಡರ್ ಅಭಾವದ ಬಗ್ಗೆ ರಾಜ್ಯ ಸರ್ಕಾರವನ್ನು ಪ್ರಶ್ನಿಸುವುದು ಸರಿಯಲ್ಲ. ಕೇಂದ್ರ ಸರ್ಕಾರ ಮುನ್ನೆಚ್ಚರಿಕೆ ವಹಿಸಿ ಸಿದ್ಧತೆ ಮಾಡಿಕೊಳ್ಳದ ಕಾರಣವೇ ಇಂದು ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿಲಿಂಡರ್ ಕೊರತೆ ವಿಚಾರವಾಗಿ ಈಗಾಗಲೇ ಮುಖ್ಯಮಂತ್ರಿಗಳು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ.

ಈ ಬಿಕ್ಕಟ್ಟನ್ನು ನಿವಾರಿಸಲು ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಬೇಕಿದೆ ಎಂದರು. ಅಧಿವೇಶನದ ಬಳಿಕ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಲಿದೆ ಎಂಬ ಸಂಸದ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ತಿರುಗೇಟು ನೀಡಿದ ಜಾರ್ಜ್, ರಾಜ್ಯ ಸರ್ಕಾರದಲ್ಲಿ ಯಾವುದೇ ಬದಲಾವಣೆ ಅಥವಾ ಗೊಂದಲಗಳಿಲ್ಲ. ಬೊಮ್ಮಾಯಿ ಅವರ ಮಾತಿನಂತೆ ನಾವು ಸರ್ಕಾರ ನಡೆಸಲು ಸಾಧ್ಯವಿಲ್ಲ.

ಅವರು ಈ ಹಿಂದೆ ಮುಖ್ಯಮಂತ್ರಿಯಾಗಿದ್ದವರು. ಬಿಜೆಪಿಯ ಒಳಗಿನ ಪರಿಸ್ಥಿತಿ ಏನಿದೆ ಎಂಬುದು ಅವರಿಗೇ ಚೆನ್ನಾಗಿ ತಿಳಿದಿದೆ. ನಮ್ಮಲ್ಲಿ ಯಾವುದೇ ಅಲ್ಲೋಲ ಕಲ್ಲೋಲವಿಲ್ಲ ಎಂದರು. ಸಚಿವ ಸಂಪುಟ ವಿಸ್ತರಣೆಯ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಇದು ಸಂಪೂರ್ಣವಾಗಿ ಮುಖ್ಯಮಂತ್ರಿಗಳು ಮತ್ತು ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟ ವಿಚಾರ. ಆ ಬಗ್ಗೆ ನಾನು ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ಆಪರೇಷನ್ ಕಮಲ ಬಿಜೆಪಿಯ ಕೆಟ್ಟ ರಾಜಕಾರಣ

ದೇಶದ ರಾಜಕಾರಣದಲ್ಲಿ ಬಿಜೆಪಿ ಆಪರೇಷನ್ ಕಮಲ ಎಂಬ ರಾಜಕೀಯ ಪ್ರಯೋಗದ ಮೂಲಕ ಪ್ರಜಾಪ್ರಭುತ್ವವನ್ನು ಹಳಿ ತಪ್ಪಿಸುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತೀವ್ರ ವಾಗ್ದಾಳಿ ನಡೆಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರಗಳನ್ನು ಬೀಳಿಸುವುದು, ಅಡ್ಡ ಮತದಾನಕ್ಕೆ ಪ್ರೇರೇಪಿಸುವುದು ಮತ್ತು ಶಾಸಕರಿಗೆ ಆಮಿಷವೊಡ್ಡುವ ಮೂಲಕ ಅಧಿಕಾರ ಹಿಡಿಯುವುದು ಬಿಜೆಪಿಯ ಏಕೈಕ ಗುರಿಯಾಗಿದೆ.

ರಾಜ್ಯಸಭಾ ಚುನಾವಣೆಯಲ್ಲಿಯೂ ಇದೇ ಮಾರ್ಗ ಅನುಸರಿಸಿದ್ದಾರೆ. ಇತ್ತೀಚೆಗೆ ಬಿಡದಿಯಲ್ಲಿ ನಮ್ಮ ಶಾಸಕರಿಗೆ ಹಣದ ಆಮಿಷವೊಡ್ಡಿದ ಪ್ರಕರಣವೇ ಇದಕ್ಕೆ ಸಾಕ್ಷಿ. ಈಗಾಗಲೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಇದು ಬಿಜೆಪಿಯ ಅನೈತಿಕ ಪದ್ಧತಿಗೆ ಮತ್ತೊಂದು ಉದಾಹರಣೆ ಎಂದರು.