ಕಸ್ತೂರಿ ರಂಗನ್ ವರದಿಯನ್ನು ಸರ್ಕಾರ ತಿರಸ್ಕರಿಸಿದೆ, ಜನರಲ್ಲಿ ಆತಂಕ ಬೇಡ: ಸಂಸದ ಕೋಟ ಶ್ರೀನಿವಾಸ ಪೂಜಾರಿ
ಕಸ್ತೂರಿ ರಂಗನ್ ನೇತೃತ್ವದ ಕಾರ್ಯತಂಡದ ಕರಡು ಅಧಿಸೂಚನೆ ವರದಿಯನ್ನು ರಾಜ್ಯ ಸರ್ಕಾರ ಸಂಪೂರ್ಣವಾಗಿ ತಿರಸ್ಕರಿಸಿದ್ದು, ವರದಿ ಜಾರಿ ಬಗ್ಗೆ ಜನರಲ್ಲಿ ಆತಂಕ ಬೇಡ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಮಣಿಪಾಲ (ನ.17): ಕಸ್ತೂರಿ ರಂಗನ್ ನೇತೃತ್ವದ ಕಾರ್ಯತಂಡದ ಕರಡು ಅಧಿಸೂಚನೆ ವರದಿಯನ್ನು ರಾಜ್ಯ ಸರ್ಕಾರ ಸಂಪೂರ್ಣವಾಗಿ ತಿರಸ್ಕರಿಸಿದ್ದು, ವರದಿ ಜಾರಿ ಬಗ್ಗೆ ಜನರಲ್ಲಿ ಆತಂಕ ಬೇಡ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಇಲ್ಲಿನ ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ಪರಸರ ಸೂಕ್ಷ್ಮ ಪ್ರದೇಶ ಮತ್ತು ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೇಂದ್ರ ಸರ್ಕಾರ ಕಸ್ತೂರಿ ರಂಗನ್ ವರದಿಯನ್ನು ಆಧಾರಿಸಿ, ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪ್ರದೇಶವೆಂದು ಘೋಷಿಸಲು ಈಗಾಗಲೇ 6 ಬಾರಿ ಅಧಿಸೂಚನೆಯನ್ನು ಹೊರಡಿಸಿದ್ದರೂ ಈವರೆಗೂ ಜಾರಿಗೆ ಬಂದಿಲ್ಲ.
ಮುಂದಿನ ದಿನಗಳಲ್ಲಿ ಜಾರಿಯಾದರೆ ಜನರಿಗೆ ಸಮಸ್ಯೆಯಾಗುತ್ತದೆ. ಸ್ಥಳೀಯ ಜನರ ಆಕ್ಷೇಪಣೆ, ಅವರಿಗಾಗುವ ಅನನುಕೂಲಗಳನ್ನು ಮೇಲಾಧಿಕಾರಿಗಳಿಗೆ ತಿಳಿಸುವ ಕಾರ್ಯ ಅಧಿಕಾರಿಗಳು ಮಾಡಬೇಕು ಎಂದರು. ಪ್ರಸ್ತುತ ಜಾರಿಯಲ್ಲಿರುವ ಪರಿಸರ ಸೂಕ್ಷ್ಮ ವಲಯ ನಿಯಮದಿಂದ ಕಾಡಂಚಿನ ಸುರಕ್ಷಿತ ಅರಣ್ಯ ಪ್ರದೇಶ ಹಾಗೂ ವನ್ಯಜೀವಿ ಅಭಯಾರಣ್ಯ ಪ್ರದೇಶ ವ್ಯಾಪ್ತಿಯಿಂದ ಒಂದು ಕಿ.ಮೀ. ವ್ಯಾಪ್ತಿಯ ಬಫರ್ ಝೋನ್‌ಗಳಲ್ಲಿ ಜನರು ಯಾವುದೇ ರೀತಿಯ ಮೂಲಸೌಕರ್ಯಗಳನ್ನು ಕಲ್ಪಿಸಿಕೊಳ್ಳಲು ಈ ವಲಯ ಮೇಲ್ವಿಚಾರಣಾ ಸಮಿತಿಯ ಪೂರ್ವಾನುಮತಿ ಪಡೆಯುವುದು ಕಡ್ಡಾಯ.
ಇದರಿಂದ ಜನರ ದೈನಂದಿನ ಜೀವನಗಳ ಆಗು-ಹೋಗುಗಳಿಗೆ ತೊಂದರೆ ಉಂಟಾಗುತ್ತಿದೆ. ಈ ಅನುಮತಿಗಳನ್ನು ಸ್ಥಳೀಯವಾಗಿ ನೀಡುವ ಕೆಲವೊಂದು ತಿದ್ದುಪಡಿಗಳು ಆಗಬೇಕಿದೆ ಎಂದು ಹೇಳಿದರು. ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಮಾತನಾಡಿ, ಸರ್ಕಾರಗಳು ಜಾರಿಗೆ ತರುವ ನೀತಿ ನಿಯಮಗಳು ಹಾಗೂ ಕಾನೂನುಗಳನ್ನು ಅನುಷ್ಠಾನಗೊಳಿಸುವ ಜವಾಬ್ದಾರಿ ಅಧಿಕಾರಿಗಳ ಮೇಲೆ ಇರುತ್ತದೆ. ಸದ್ಯದ ಪರಿಸ್ಥಿತಿಯಲ್ಲಿ ಪರಿಸರಕ್ಕೆ ಹಾನಿಯಾಗದೇ ಅರ್ಜಿಗಳನ್ನು ಪರಿಶೀಲಿಸಿ, ಅನುಮತಿಯನ್ನು ನೀಡುತ್ತಿದೆ ಎಂದರು. ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಪರಿಸರ ಸೂಕ್ಷ್ಮ ವಲಯ ಬಫರ್ ಝೋನ್ ಯಾವ ಗ್ರಾಮ, ಯಾವ ಸರ್ವೇ ನಂಬರ್ ಒಳಗೊಂಡಿವೆ ಎಂಬುದರ ಬಗ್ಗೆ ನಿಖರ ಮಾಹಿತಿಯನ್ನು ಜನರಿಗೆ ತಿಳಿಸಬೇಕು ಎಂದರು.
ಜಸ್ಟೀಸ್ ಡಿಕುನ್ಹಾ ವರದಿಯಲ್ಲಿ ಕೋವಿಡ್ ಅಕ್ರಮ ಸ್ಪಷ್ಟ ಉಲ್ಲೇಖ: ಸಚಿವ ದಿನೇಶ್ ಗುಂಡೂರಾವ್
ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಮಾತನಾಡಿ, ಕಾಡಂಚಿನ ಜನರಿಗೆ ಸಮಸ್ಯೆಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ಅಥವಾ ವರದಿ ಜಾರಿ ಮಾಡಲು ಸೂಚಿಸಿರುವ ಸರ್ವೋಚ್ಚ ನ್ಯಾಯಾಲಯದ ಗಮನಕ್ಕೆ ತರಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿರುತ್ತದೆ. ಈ ಕಾರ್ಯವನ್ನು ತಪ್ಪದೇ ಮಾಡಬೇಕು ಎಂದರು. ಸಭೆಯಲ್ಲಿ ಜಿಪಂ ಸಿಇಓ ಪ್ರತೀಕ್ ಬಾಯಲ್, ಎಡಿಸಿ ಮಮತಾದೇವಿ ಜಿ.ಎಸ್., ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್ ಬಾಬು ಎಂ., ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಸೀಲ್ದಾರ್‌ಗಳು, ತಾ.ಪಂ. ಇ.ಓ ಗಳು, ಅಧಿಸೂಚಿತ ಗ್ರಾಪಂಗಳ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.