ಬೆಂಗಳೂರು (ಜ.21):  ಕಳೆದ ವಿಧಾನಸಭೆ ಸಾರ್ವತ್ರಿಕ ಚುನಾವಣೆ ವೇಳೆ ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಸಾವಿರಾರು ನಕಲಿ ಮತದಾರರ ಗುರುತಿನ ಚೀಟಿ ಪತ್ತೆಯಾದ ಪ್ರಕರಣದ ಕುರಿತು ಜಾಲಹಳ್ಳಿ ಠಾಣಾ ಪೊಲೀಸರು ನಡೆಸಿರುವ ತನಿಖೆಯಲ್ಲಿ ಕೆಲ ಲೋಪಗಳು ಇವೆ ಎಂದು ಸರ್ಕಾರ ಹೈಕೋರ್ಟ್‌ಗೆ ವರದಿ ಸಲ್ಲಿಸಿದೆ.

ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಎನ್‌. ಆನಂದ್‌ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕ ಅವರ ನೇತೃತ್ವದ ವಿಭಾಗೀಯ ಪೀಠಕ್ಕೆ ಈ ವರದಿ ಸಲ್ಲಿಕೆಯಾಗಿದೆ.

ಹೈಕೋರ್ಟ್‌ ನಿರ್ದೇಶನದ ಮೇರೆಗೆ ನಗರ ಪೂರ್ವ ವಿಭಾಗದ ಹೆಚ್ಚುವರಿ ಆಯುಕ್ತ ಎಸ್‌.ಮುರುಗನ್‌, ಜಾಲಹಳ್ಳಿ ಠಾಣಾ ಪೊಲೀಸರು ಪ್ರಕರಣ ಕುರಿತು ನಡೆಸಿರುವ ತನಿಖೆಯನ್ನು ಪರಾಮರ್ಶಿಸಿ ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ತಮ್ಮ ವರದಿ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಬಿಟ್ಟು ಬಂದ ಮುನಿರತ್ನಗೆ ಮಂತ್ರಿ ಸ್ಥಾನ ಕೈತಪ್ಪಿದ್ದೇಕೆ? ಕೊನೆಗೂ ಕಾರಣ ಸಿಕ್ತು...!

ಪ್ರಕರಣ ಕುರಿತು ಜಾಲಹಳ್ಳಿ ಠಾಣೆ ಪೊಲೀಸರು ನಡೆಸಿರುವ ತನಿಖೆಯಲ್ಲಿ ಕೆಲ ಲೋಪಗಳಿವೆ. ಇದೇ ವೇಳೆ ಮುನಿರತ್ನ ವಿರುದ್ಧ ಆರೋಪ ಮಾಡುತ್ತಿರುವ ಅರ್ಜಿದಾರರು ತನಿಖೆಗೆ ಸೂಕ್ತ ಸಹಕಾರ ನೀಡುತ್ತಿಲ್ಲ. ಅರ್ಜಿದಾರರು ಹಾಗೂ ಮುನಿರತ್ನ ನಡುವೆ ವೈಮನಸ್ಯವಿದೆ ಎಂಬ ಅಂಶಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ವರದಿಯನ್ನು ಪರಿಗಣಿಸಿದ ನ್ಯಾಯಪೀಠ, ಜಾಲಹಳ್ಳಿ ಪೊಲೀಸರು ತನಿಖೆಯನ್ನು ಮುಂದುವರಿಸಬಹುದು. ತನಿಖೆ ವೇಳೆ ಅರ್ಜಿದಾರರು ಎತ್ತಿರುವ ಆಕ್ಷೇಪಣೆಗಳನ್ನು ಪರಿಗಣಿಸಬೇಕು. ಅರ್ಜಿದಾರರು ಪೊಲೀಸರ ತನಿಖೆಗೆ ಸಹರಿಸಬೇಕೆಂದು ಸೂಚಿಸಿ ಅರ್ಜಿ ಇತ್ಯರ್ಥಪಡಿಸಿತು. ಜತೆಗೆ, ಪ್ರಕರಣ ಕುರಿತು ಜಾಲಹಳ್ಳಿ ಠಾಣೆಯಲ್ಲಿ ದಾಖಲಾದ ಎರಡು ಎಫ್‌ಐಆರ್‌ಗಳ ತನಿಖೆ ಪ್ರಗತಿಯಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ತಿಳಿಸಿತು.

'ಸಿಡಿ ಇದ್ದರೆ ಹೊರಕ್ಕೆ ಬಿಡಲಿ' ಸಚಿವ ಸ್ಥಾನ ತಪ್ಪಿದರೂ ಮುನಿ ಸವಾಲು! ...

9 ಸಾವಿರ ವೋಟರ್‌ ಐಡಿ ಪತ್ತೆ:  2018ರ ವಿಧಾನಸಭೆ ಚುನಾವಣೆಯಲ್ಲಿ ಮುನಿರತ್ನ ಸ್ಪರ್ಧಿಸಿದ್ದ ಆರ್‌.ಆರ್‌.ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜಾಲಹಳ್ಳಿಯ ಅಪಾರ್ಟ್‌ಮೆಂಟ್‌ ಒಂದರಲ್ಲಿ ಮುನಿರತ್ನ ಸ್ಪರ್ಧಿಸಿದ್ದ ಪಕ್ಷದ ಕರಪತ್ರಗಳ ಜತೆಗೆ 9 ಸಾವಿರಾರಕ್ಕೂ ಅಧಿಕ ಮತದಾರರ ಗುರುತಿನ ಚೀಟಿಗಳು ಪತ್ತೆಯಾಗಿದ್ದವು. ಅವುಗಳಲ್ಲಿ ನಕಲಿ ವೋಟರ್‌ ಐಡಿಗಳೂ ಸೇರಿದ್ದವು. ಮತದಾರರ ಗುರುತಿನ ಚೀಟಿ ಸಂಗ್ರಹಿಸುವ ಮೂಲಕ ಮುನಿರತ್ನ ಚುನಾವಣಾ ಅಕ್ರಮವೆಸಗಿದ್ದಾರೆ. ಪ್ರಕರಣದ ತನಿಖೆಯನ್ನು ಜಾಲಹಳ್ಳಿ ಪೊಲೀಸರು ಸೂಕ್ತ ರೀತಿಯಲ್ಲಿ ನಡೆಸುತ್ತಿಲ್ಲ. ಆದ್ದರಿಂದ, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಅರ್ಜಿದಾರರು ಕೋರಿದ್ದರು.