ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರಿಗೆ ಅನ್ಯಾಯ ಆಗಿದ್ದರೆ ಸಂಬಂಧಪಟ್ಟ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ। ಎಚ್‌.ಸಿ.ಮಹದೇವಪ್ಪ ಹೇಳಿದ್ದಾರೆ.

ಬೆಂಗಳೂರು (ಜು.16): ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರಿಗೆ ಅನ್ಯಾಯ ಆಗಿದ್ದರೆ ಸಂಬಂಧಪಟ್ಟ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ। ಎಚ್‌.ಸಿ.ಮಹದೇವಪ್ಪ ಹೇಳಿದ್ದಾರೆ. ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರಿಗೆ ಅನ್ಯಾಯ ಆಗಿದ್ದರೆ ವಿಜಿಲೆನ್ಸ್‌ ವಿಂಗ್‌ ಇದ್ದು, ಸಮಸ್ಯೆಗಳ ಬಗ್ಗೆ ಪರಿಶೀಲಿಸಲಿದೆ. ಈ ಬಗ್ಗೆ ನನ್ನ ಗಮನಕ್ಕೂ ಬಂದಿದ್ದು, ಮುಖ್ಯಮಂತ್ರಿಗೆ ಹೇಳಿದ್ದೇನೆ.

ಈ ಸಂಬಂಧ ಎಐಸಿಸಿ ಅಧ್ಯಕ್ಷರು ಮುಖ್ಯಮಂತ್ರಿಗೆ ಪತ್ರ ಬರೆದಿರುವ ವಿಚಾರ ನನಗೆ ಗೊತ್ತಿಲ್ಲ ಎಂದರು. ಸಿಗಂದೂರು ಸೇತುವೆ ಉದ್ಘಾಟನೆ ಆಹ್ವಾನ ವಿವಾದದ ಬಗ್ಗೆ ಪ್ರತಿಕ್ರಿಯಿಸಿ, ಶತಮಾನಗಳಿಂದ ಜನರು ಲಾಂಚ್‌ನಲ್ಲಿ ಹೋಗುತ್ತಿದ್ದರು. ಸೇತುವೆ ಆಗಿರುವುದು ಖುಷಿ ವಿಚಾರ. ನಾವು ಗಣತಂತ್ರ ವ್ಯವಸ್ಥೆಯಲ್ಲಿದ್ದೇವೆ. ನಾನೇ ಮಾಡಿದ್ದು ಎನ್ನುವ ಕ್ರೆಡಿಟ್‌ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ. ಸೇತುವೆಗೆ ಡಿಪಿಆರ್‌ ಮಾಡಿದ್ದು ರಾಜ್ಯ ಸರ್ಕಾರ. ಒಬ್ಬರನ್ನು ಬಿಟ್ಟು ಇನ್ನೊಬ್ಬರು ಮಾಡುವುದು ತಪ್ಪು ಎಂದರು.

ಚರ್ಚೆ ಅಗತ್ಯವಿಲ್ಲ: ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟಪಡಿಸಿದೆ, ರಾಜ್ಯ ಉಸ್ತುವಾರಿ ಸಹ ಮಾಧ್ಯಮಗಳ ಎದುರೇ ಹೇಳಿದ್ದರು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸ್ಪಷ್ಟ ಸಂದೇಶ ನೀಡಿದ್ದು, ಇನ್ನು ಯಾವುದೇ ಚರ್ಚೆ ಅಗತ್ಯವಿಲ್ಲ ಎಂದು ಸಚಿವ ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಬದಲಾವಣೆ ವಿಚಾರ ಪಕ್ಷದಲ್ಲಿ ಚರ್ಚೆಯಲ್ಲಿರಲಿಲ್ಲ. ಮಾಧ್ಯಮಗಳು ಸೃಷ್ಟಿಸಿರುವ ವದಂತಿಗೆ ಹೈಕಮಾಂಡ್‌ ಹಾಗೂ ರಾಜ್ಯ ಉಸ್ತುವಾರಿಗಳು ಸ್ಪಷ್ಟನೆ ನೀಡಿದ್ದರು.

ಇದೀಗ ಮುಖ್ಯಮಂತ್ರಿಗಳೇ ಸ್ಪಷ್ಟಪಡಿಸಿರುವುದರಿಂದ ಇನ್ನು ಮುಂದೆ ಯಾವುದೇ ಚರ್ಚೆ ಅಗತ್ಯವಿಲ್ಲ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಹೇಳಿದರು. ಜನರು ಐದು ವರ್ಷ ಆಡಳಿತ ನಡೆಸಲು ನಮಗೆ ಅಧಿಕಾರ ನೀಡಿದ್ದಾರೆ. ಇದಕ್ಕೆ ವಿರುದ್ಧವಾಗಿ ಬಿಜೆಪಿಯವರೇ ಹೈಕಮಾಂಡ್‌ನಂತೆ ಮುಖ್ಯಮಂತ್ರಿ ಬದಲಾವಣೆ ಎಂದು ಮಾತನಾಡುತ್ತಾರೆ. ಆಪರೇಷನ್‌ ಕಮಲದ ರುಚಿ ನೋಡಿರುವ ಪರಿಣಾಮವದು. ಮುಖ್ಯಮಂತ್ರಿಗಳು ಈಗಾಗಲೇ ಸ್ಪಷ್ಟಪಡಿಸಿದ್ದು ಈಗ ಮತ್ತೊಮ್ಮೆ ಸಂದೇಶ ನೀಡಿದ್ದಾರೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆಯಿಲ್ಲ ಎಂದರು.