ರಾಷ್ಟ್ರಪತಿ ಚುನಾವಣೆ ಹಿನ್ನಲೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಬೆಂಗಳೂರಿಗೆ ಆಗಮಿಸಿ ಮತಯಾವಿಸಿದರು. ಇದೇ ವೇಳೆ ಸುಮಲತಾ ಅಂಬರೀಶ್ ಅವರು ಬಿಜೆಪಿ ಸಭೆಯಲ್ಲಿ ಭಾಗವಹಿಸಿ ಅಚ್ಚರಿ ಮೂಡಿಸಿದ್ದಾರೆ.
ಬೆಂಗಳೂರು, (ಜುಲೈ.10): ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‍ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಇಂದು(ಭಾನುವಾರ) ಬೆಂಗಳೂರಿಗೆ ಭೇಟಿ ನೀಡಿದ್ದು, ಬಿಜೆಪಿ ನಾಯಕರುಗಳೊಂದಿಗೆ ಸಭೆ ನಡೆಸಿ ಬೆಂಬಲಿಸುವಂತೆ ಮನವಿ ಮಾಡಿದರು.
ಬಿಜೆಪಿ ಸಭೆ ಬಳಿಕ ದ್ರೌಪದಿ ಮುರ್ಮು ಅವರು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಬೆಂಬಲ ಕೋರಿದರು. ಈ ವೇಳೆ ದೇವೇಗೌಡ ಅವರು ದ್ರೌಪದಿ ಮುರ್ಮು ಅವರಿಗೆ ಬೆಂಬಲ ಘೋಷಿಸಿದರು.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ದೇವೇಗೌಡ, ಎನ್‍ಡಿಎ ಅಭ್ಯರ್ಥಿಗೆ ಜೆಡಿಎಸ್ ಬೆಂಬಲ ನೀಡುತ್ತದೆ ಎಂದು ಸ್ಪಷ್ಟಪಡಿಸಿದರು. ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಿಶನ್ ರೆಡ್ಡಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಭಾಗವಹಿಸಿದ್ದರು. ಜೊತೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಶಾಸಕ ಹೆಚ್.ಡಿ. ರೇವಣ್ಣ ಸಹ ಉಪಸ್ಥಿತರಿದ್ದರು.
ಬೆಂಗಳೂರಿನಲ್ಲಿ NDA ರಾಷ್ಟ್ರಪತಿ ಅಭ್ಯರ್ಥಿ, ದೇವೇಗೌಡ್ರ ಬೆಂಬಲ ಕೋರಿದ ದ್ರೌಪದಿ ಮುರ್ಮು
ದೇವೇಗೌಡ ಭೇಟಿಗೂ ಮುನ್ನ ದ್ರೌಪದಿ ಮುರ್ಮು ಅವರು HAL ವಿಮಾನ ನಿಲ್ದಾಣದಿಂದ ನೇರವಾಗಿ ಶಾಂಗ್ರಿಲಾ ಹೋಟೆಲ್‌ನಲ್ಲಿ ಬಿಜೆಪಿ ಶಾಸಕರು, ಸಂಸದರ ಜತೆ ಸಭೆ ನಡೆಸಿದರು. ಸಭೆಯಲ್ಲಿ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದರು. ಅಲ್ಲದೇ ಇದೇ ವೇಳೆ ಎಲ್ಲರೂ ತಮಗೆ ಮತ ನೀಡುವಂತೆ ಮನವಿ ಮಾಡಿದರು.
ಮುರ್ಮುಗೆ ಸಂಸದೆ ಸುಮಲತಾ ಅಂಬರೀಶ್
ಇನ್ನು ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಎನ್‍ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಬೆಂಬಲವನ್ನು ಸೂಚಿಸಿದ್ದಾರೆ.
ಸಂಸದೆ ಸುಮಲತಾ ಅವರು ಬಿಜೆಪಿ ಸಭೆ ನಡೆಯುತ್ತಿದ್ದ ಹೋಟೆಲ್‍ಗೆ ಆಗಮಿಸಿ, ಸಭೆಯಲ್ಲಿ ಭಾಗವಹಿಸಿದರು. ಈ ವೇಳೆ ಎನ್‍ಡಿಎ ಅಭ್ಯರ್ಥಿಗೆ ಬೆಂಬಲ ಸೂಚಿಸುವುದಾಗಿ ತಿಳಿಸಿದ್ದಾರೆ. ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿ ಸಭೆಯಲ್ಲಿ ಭಾಗಿ ವಿಚಾರವಾಗಿ ಮಾತನಾಡಿ, ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ಸ್ಪಷ್ಟಪಡಿಸಿದರು.
ಮುರ್ಮು ರಾಜಕೀಯ ನಡೆ
ಮುರ್ಮು ಅವರು ಒಡಿಶಾ ರಾಜ್ಯ ಬಿಜೆಪಿ ಪರಿಶಿಷ್ಟ ಪಂಗಡ ಮೋರ್ಚಾದ ಉಪಾಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸಿದ್ದರು. ನಂತರ ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ರಾಯ್ರಂಗಪುರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಬಿಜೆಡಿ-ಬಿಜೆಪಿ ಮೈತ್ರಿ ಸರ್ಕಾರದಲ್ಲಿ ದ್ರೌಪದಿ ಸಚಿವೆಯೂ ಆಗಿದ್ದರು.
2007ರಲ್ಲಿ ಅತ್ಯುತ್ತಮ ಶಾಶಕಿ ಪ್ರಶಸ್ತಿಯೂ ಅವರಿಗೆ ಲಭಿಸಿತ್ತು. 2009ರಿಂದ ಅವರು ಬಿಜೆಪಿಯ ರಾಜ್ಯ ಪರಿಶಿಷ್ಟ ಪಂಗಡ ಮೋರ್ಚಾದ ಅಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸಿದ್ದರು. ಶಿಕ್ಷಣದ ಪೂರೈಸಿದ ಬಳಿಕ ಒಡಿಶಾ ಸರ್ಕಾರದ ನೀರಾವರಿ ಇಲಾಖೆಯಲ್ಲಿ ಕೆಲಸ, ಬಳಿಕ ಶಿಕ್ಷಕಿ ಹುದ್ದೆ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಈ ನಡುವೆ 1997ರಲ್ಲಿ ಅವರು ಒಡಿಶಾದ ರಾಯ್ರಂಗಪುರ ನಗರಾಡಳಿತ ಸಂಸ್ಥೆಯ ಸದಸ್ಯರಾಗಿ ಚುನಾಯಿತರಾದರು. ಅದೇ ವರ್ಷ ನಗರಾಡಳಿತ ಸಂಸ್ಥೆಯ ಉಪಾಧ್ಯಕ್ಷೆಯಾಗಿದ್ದರು.
