ಶಿಶು, ಬಾಣಂತಿ ಸಾವು: ಸಚಿವ ಸುಧಾಕರ್ ರಾಜೀನಾಮೆಗೆ ಎಚ್‌ಡಿಕೆ ಆಗ್ರಹ
ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿ ಮತ್ತು ಆಕೆಯ ಇಬ್ಬರು ನವಜಾತ ಶಿಶುಗಳ ಸಾವು ವಿಚಾರ ಸಂಬಂಧ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ವಿರುದ್ಧ ಟೀಕಾಪ್ರಹಾರ ಮುಂದುವರಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಚಿವ ಸ್ಥಾನಕ್ಕೆ ಸುಧಾಕರ್ ರಾಜೀನಾಮೆ ನೀಡಬೇಕು.
ಬೆಂಗಳೂರು (ನ.06): ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿ ಮತ್ತು ಆಕೆಯ ಇಬ್ಬರು ನವಜಾತ ಶಿಶುಗಳ ಸಾವು ವಿಚಾರ ಸಂಬಂಧ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ವಿರುದ್ಧ ಟೀಕಾಪ್ರಹಾರ ಮುಂದುವರಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಚಿವ ಸ್ಥಾನಕ್ಕೆ ಸುಧಾಕರ್ ರಾಜೀನಾಮೆ ನೀಡಬೇಕು. ನೈತಿಕತೆ ಇದ್ದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಅಮಾನುಷ ಸಾವುಗಳನ್ನು ಪ್ರಶ್ನಿಸಿದ ನನ್ನ ವಿರುದ್ಧವೇ ಲಘುವಾಗಿ ಟ್ವೀಟ್ ಮಾಡಲಾಗಿದೆ. ಸುಧಾಕರ್ ಅವರೇ, ಸಾವು, ಕ್ರೌರ್ಯವನ್ನೇ ಸಂಭ್ರಮಿಸುವ ಸಾವುಗೇಡಿ ಸರ್ಕಾರದ ಆಡಳಿತದಲ್ಲಿ ಸರ್ಕಾರಿ ಆಸ್ಪತ್ರೆಗಳನ್ನು ಸಾವಿನ ಕೂಪಗಳನ್ನಾಗಿ ಪರಿವರ್ತನೆ ಮಾಡಿದ ಕೀರ್ತಿ ನಿಮ್ಮದು. ತುಮಕೂರು ಆಸ್ಪತ್ರೆ ಮತ್ತು ವೈದ್ಯೆಯ ದರ್ಪದಿಂದ ಆದ ಮೂರು ಅಮಾನುಷ ಸಾವುಗಳ ಬಗ್ಗೆ ಕೊನೆಯ ಪಕ್ಷ ಪಶ್ಚಾತ್ತಾಪ, ಪಾಪಪ್ರಜ್ಞೆ ಬೇಡವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Tumakuru ಅವಳಿ ಶಿಶು ಧಾರುಣ ಸಾವು ಪ್ರಕರಣ: ಸಚಿವರ ರಾಜೀನಾಮೆಗೆ ಎಚ್‌ಡಿಕೆ ಆಗ್ರಹ
ನಾನು ಎತ್ತಿದ ಪ್ರಶ್ನೆ ಏನು? ನೀವು ಕೊಟ್ಟ ಉತ್ತರವೇನು? ಮನುಷ್ಯತ್ವ ಇದೆಯಾ ನಿಮಗೆ? ನಿಮ್ಮ ವೈಫಲ್ಯಗಳನ್ನು ಸಮರ್ಥಿಸಿಕೊಳ್ಳುತ್ತಿದ್ದೀರಿ ಎಂದರೆ, ಆ ಬಾಣಂತಿ, ಆಕೆಯ ಎರಡು ನವಜಾತ ಶಿಶುಗಳ ಸಾವನ್ನು ಸಂಭ್ರಮಿಸುತ್ತಿದ್ದೀರಿ ಎಂದೇ ಅರ್ಥ. ನಿಮ್ಮ ವಿಕೃತ ಮನಸ್ಥಿತಿಗೆ ನನ್ನ ಧಿಕ್ಕಾರ. ತುಮಕೂರು ಆಸ್ಪತ್ರೆಯಲ್ಲಿ ನಡೆದದ್ದೇನು? ಆ ವೈದ್ಯೆ, ಸಿಬ್ಬಂದಿ ಕ್ರೌರ್ಯದ ವರ್ತನೆ, ಆಕೆಯನ್ನು ಆಸ್ಪತ್ರೆಗೆ ಕರೆತಂದ ಮಹಿಳೆಗೆ ಈಗ ಪೊಲೀಸರಿಗೆ ಬೆದರಿಕೆ ಹಾಕಿಸುತ್ತಿರುವ ಬಗ್ಗೆ ನನಗೆ ಮಾಹಿತಿ ಇದೆ. ಅಧಿಕಾರ ಇದೆ ಎಂದು ಏನು ಬೇಕಾದರೂ ಮಾಡಬಹುದಾ? ಇನ್ನು ಆರೇ ತಿಂಗಳು, ನಿಮ್ಮ ಅಧಿಕಾರದ ಅಮಲು ಇಳಿಯುತ್ತದೆ ಎಂದು ಕಿಡಿಕಾರಿದರು.
ಇಂತಹ ದಾರುಣ ಸಾವುಗಳಾದ ಮೇಲಾದರೂ ಹದಗೆಟ್ಟವ್ಯವಸ್ಥೆಯನ್ನು ಸರಿಪಡಿಸುವ ಬದಲು ಅದನ್ನೇ ಸಮರ್ಥಿಸಿಕೊಳ್ಳುವುದು ಎಂದರೆ ವಿಕಾರವಲ್ಲದೇ ಮತ್ತೇನು? ಜಿಲ್ಲಾಸ್ಪತ್ರೆಯಲ್ಲಿಯೇ ಇಂತಹ ದುಸ್ಥಿತಿ ಇದ್ದರೆ ತಾಲೂಕು, ಅದಕ್ಕೂ ಕೆಳಹಂತದ ಆರೋಗ್ಯ ಕೇಂದ್ರಗಳ ಪಾಡೇನು ಎಂದು ಪ್ರಶ್ನಿಸಿರುವ ಅವರು, ಆಸ್ಪತ್ರೆಯಿಂದ ನಿರ್ದಯವಾಗಿ ಹೊರಹಾಕಲ್ಪಟ್ಟಆ ತಾಯಿ, ನಾಲ್ಕು ಗೋಡೆಗಳ ನಡುವೆ ಇಡೀ ರಾತ್ರಿಯೆಲ್ಲಾ ನರಳಿ ಜೀವ ಚೆಲ್ಲಿದ್ದಾರೆ. ಜನಿಸಿದ ಕ್ಷಣದಲ್ಲಿಯೇ ಉಸಿರುಬಿಟ್ಟಆ ಎರಡು ಕಂದಮ್ಮಗಳ ಮರಣ ನಿಮ್ಮ ಅಂತಃಕರಣವನ್ನು ಕಲಕಿಲ್ಲವೇ ಸಚಿವರೇ? ಕರ್ನಾಟಕ ಕಂಡ ಅತ್ಯಂತ ಕರಾಳ ಕ್ರೌರ್ಯವಿದು. ಅದನ್ನು ನಾನು ಪ್ರಶ್ನಿಸಿದ್ದೇ ತಪ್ಪಾ ಎಂದು ಕೇಳಿದ್ದಾರೆ.
ರಾಜ್ಯದ ಸಮಗ್ರ ಅಭಿವೃದ್ಧಿಯೇ ‘ಪಂಚರತ್ನ’ ಗುರಿ: ಎಚ್.ಡಿ.ಕುಮಾರಸ್ವಾಮಿ
ತುಮಕೂರು ಘಟನೆಗೆ ನೈತಿಕ ಹೊಣೆ ಹೊತ್ತು ಸಚಿವರು ರಾಜೀನಾಮೆ ನೀಡಲೇಬೇಕು. ಆ ನೈತಿಕತೆ ಅವರಿಗೆ ಇಲ್ಲದಿದ್ದರೆ, ಅದನ್ನು ಕೊನೆಪಕ್ಷ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಾದರೂ ಪ್ರದರ್ಶಿಸಬೇಕು. ನಿಮ್ಮನ್ನು ಸಂಪುಟದಿಂದ ಕಿತ್ತೊಗೆಯಲೇಬೇಕು. ನಿಮ್ಮ ಪಕ್ಷಕ್ಕೂ, ಸರ್ಕಾರಕ್ಕೂ ಅಂತಹ ನೈತಿಕತೆ ಇದೆಯಾ ಎಂದು ವಾಗ್ದಾಳಿ ನಡೆಸಿದ್ದಾರೆ.