Asianet Suvarna News Asianet Suvarna News

ಮುಸ್ಲಿಂ ನಾಯಕರನ್ನ ಮುಗಿಸಿದ್ದೇ ಸಿದ್ದರಾಮಯ್ಯ: ಸಿದ್ದು ವಿರುದ್ಧ HDK ವಾಗ್ದಾಳಿ

*  ರಾಜಕಾರಣದ ಟರ್ಮಿನೇಟರ್‌ ಆಗಿ ಹೊರಹೊಮ್ಮಿದ ಸಿದ್ದರಾಮಯ್ಯ 
*  ಅಲ್ಪಸಂಖ್ಯಾತ ನಾಯಕನನ್ನು 6 ವರ್ಷ ಉಚ್ಚಾಟಿಸಲಾಗಿದೆ. ಇದು ಯಾವ ಸೀಮೆ ನ್ಯಾಯ?
*  ಅಲ್ಪಸಂಖ್ಯಾತ ನಾಯಕರ ʼರಾಜಕೀಯ ನರಮೇಧʼಕ್ಕೆ ಯಾರು ಕಾರಣ? 

HD Kumaraswamy Slams on Siddaramaiah grg
Author
Bengaluru, First Published Oct 16, 2021, 11:03 AM IST

ಬೆಂಗಳೂರು(ಅ.16): ಚಕ್ರ ತಿರುಗುತ್ತಿದೆ, ನಿಮ್ಮ ಅಂತ್ಯಕಾಲವೂ ಆರಂಭವಾಗಿದೆ. ಅಲ್ಪಸಂಖ್ಯಾತ(Minorities) ಬಾಂಧವರಿಗೆ ನಿಮ್ಮ ನಿಜಬಣ್ಣ ಗೊತ್ತಾಗಿದೆ ಸಿದ್ದಹಸ್ತರೇ. ನಿಮಗೆ ಪಾಠ ಕಲಿಸುವ ಜನತಾಪರ್ವ ಈಗಷ್ಟೇ  ಆರಂಭವಾಗಿದೆ. ಕಾದು ನೋಡಿ ಅಂತ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ(Siddaramaiah) ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ(HD Kumaraswamy) ಹರಿಹಾಯ್ದಿದ್ದಾರೆ.

"

 

ಇಂದು(ಶನಿವಾರ) ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಟ್ವಿಟ್ಟರ್‌ನಲ್ಲಿ(Twitter) ಸರಣಿ ಟ್ವೀಟ್‌ ಮಾಡುವ ಮೂಲಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಎಚ್‌ಡಿಕೆ, ಇಕ್ಬಾಲ್ ಸರಡಗಿ(Iqbal Saradagi) ಅವರನ್ನು ಸೋಲಿಸಿದಿರಿ, ಜಾಫರ್‌ ಷರೀಫರ(C.K.Jaffer Sharief) ಮೊಮ್ಮಗನನ್ನು ಮುಗಿಸಿದಿರಿ, ರೋಷನ್ ಬೇಗ್(Roshna Baig) ವಿರುದ್ಧ ರೋಷ ತೀರಿಸಿಕೊಂಡಿರಿ, ತನ್ವೀರ್ ಸೇಠ್(Tanvir Sait) ಮೇಲೆ ಹಗೆ ಸಾಧಿಸಿದಿರಿ, ಇನ್ನೊಬ್ಬರ ಮೇಲಿನ ಸೇಡನ್ನು ಬಡಪಾಯಿ ಸಲೀಂ ಮೇಲೆ ತಿರುಗಿಸಿ ಒಂದೇ ಕಲ್ಲಿನಲ್ಲಿ 2  ಹಕ್ಕಿ ಹೊಡೆದು 'ಕಿರಾತಕ ರಾಜಕಾರಣʼ ಮಾಡಿದಿರಿ ಅಂತ ಟೀಕಿಸಿದ್ದಾರೆ. 

ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಇದೇನಾ ಸಿದ್ದಹಸ್ತರೇ? 

ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಇದೇನಾ ಸಿದ್ದಹಸ್ತರೇ? ತೊಟ್ಟಿಲನ್ನೂ ತೂಗುತ್ತಾ, ಮಗುವನ್ನೂ ಚಿವುಟುತ್ತಾ, ಸಾಧ್ಯವಾದರೆ ಆ ಮಗುವಿನ ಕತ್ತನ್ನೂ ಕುಯ್ಯುತ್ತಾ ನಡೆಸುತ್ತಿರುವ ಇಂಥ ನೀಚ ರಾಜರಾರಣ(Politics) ಮುಸ್ಲಿಂ(Muslim) ಬಾಂಧವರಿಗೆ ಈಗ ಗೊತ್ತಾಗಿಬಿಟ್ಟಿದೆ ಅಂತ ಸಿದ್ದು ವಿರುದ್ಧ ಕುಮಾರಸ್ವಾಮಿ ಕಿಡಿಕಾರಿದ್ದಾರೆ. 

ಡಿಕೆಶಿ ಮೇಲಿನ ಕಮಿಷನ್ ಮಾತು... ಪ್ರತಿಕ್ರಿಯೆ ಕೊಡದೆ ಜಾರಿಕೊಳ್ಳುತ್ತಿರುವ ಸಿದ್ದು!

ಈಗ ಆಡಿಯೋ ನೆಪದಲ್ಲಿ ಸಲೀಂ ಮೊಹಮದ್(Saleem Mohammad) ಬಲಿ ಪಡೆದಾಗಿದೆ. ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಬಿಟ್ಟು ದೊಡ್ಡವರ ರಕ್ಷಣೆ ಮಾಡಲಾಗಿದೆ. ಸಲೀಂ ಹೇಳಿದ್ದೆಲ್ಲವನ್ನೂ ಕೇಳಿಕೊಂಡು ʼರಸಸ್ವಾದʼ ಮಾಡಿ ಪುಕ್ಕಟೆ ಮನರಂಜನೆ ಪಡೆದ ವ್ಯಕ್ತಿಗೆ ರಕ್ಷಣೆ ನೀಡಿ ಓರ್ವ ಅಲ್ಪಸಂಖ್ಯಾತ ನಾಯಕನನ್ನು 6 ವರ್ಷ ಉಚ್ಚಾಟಿಸಲಾಗಿದೆ. ಇದು ಯಾವ ಸೀಮೆ ನ್ಯಾಯ? ಎಂದು ಎಚ್‌ಡಿಕೆ ಪ್ರಶ್ನಿಸಿದ್ದಾರೆ. 

ಮೈಸೂರಿನ(Mysuru) ಹಿರಿಯ ನಾಯಕ ತನ್ವೀರ್ ಸೇಠ್ ಅವರನ್ನು ಅಪಮಾನಕರವಾಗಿ ನಡೆಸಿಕೊಂಡಿದ್ದು ಇದೇ ಸಿದ್ದಹಸ್ತರು. ಅಲ್ಲಿನ ಪಾಲಿಕೆಯಲ್ಲಿ ಜಾತ್ಯತೀತ ಶಕ್ತಿಗಳನ್ನು ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ನಡೆಸಿದ ತನ್ವೀರ್ ಮೇಲೆ ಕೂಗಾಡಿದ ಸಿದ್ದಸೂತ್ರ ಪ್ರವೀಣರು, ಇನ್ನಿಲ್ಲದ ಅಪಮಾನ ಮಾಡಿ ನಿಂದಿಸುತ್ತಾರೆ ಅಂತ ಹೇಳಿದ್ದಾರೆ. 

ಕಳೆದ ಲೋಕಸಭೆ ಚುನಾವಣೆ(Lok Sabha Election) ನಂತರ ತಮಗೆ ಆಗುತ್ತಿರುವ ಅನ್ಯಾಯ ಪ್ರಶ್ನಿಸಿದ ರೋಷನ್ ಬೇಗ್‌ʼಗೆ ಶೋಕಾಸ್ ನೊಟೀಸ್ ನೀಡಿ, ತಮ್ಮನ್ನು ಬಹಿರಂಗವಾಗಿ ಪ್ರಶ್ನಿಸಿದರು ಎಂಬ ಕಾರಣಕ್ಕೆ ಅವರನ್ನು ಬೇಕಾಬಿಟ್ಟಿ ನಡೆಸಿಕೊಂಡು ಅಪಮಾನ ಮಾಡುತ್ತಾರೆ ಸಿದ್ದಹಸ್ತರು. ಕೊನೆಗೆ ರೋಷನ್ ಬೇಗ್ ಕಾಂಗ್ರೆಸ್(Congress) ಪಕ್ಷದಿಂದಲೇ ದೂರವಾಗುತ್ತಾರೆ ಎಂದು ತಿಳಿಸಿದ್ದಾರೆ. 

ಆಗ ಭೈರತಿ ಸುರೇಶ್ ಪರ ಲಾಬಿ ಮಾಡಿದ್ದ ಸಿದ್ಧಕಲೆ ಸೂತ್ರಧಾರರು, ಅವರನ್ನೇ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸಿ ಒಳಸುಳಿ ಸೃಷ್ಟಿಸಿ ಷರೀಫರ ಮೊಮ್ಮಗನನ್ನು ಸೋಲಿಸುತ್ತಾರೆ! 2023ರ ಚುನಾವಣೆಯಲ್ಲಿ ಭೈರತಿ ಸುರೇಶ್ʼಗೇ ಹೆಬ್ಬಾಳದ ಕಾಂಗ್ರೆಸ್ ಟಿಕೆಟ್ ಗ್ಯಾರಂಟಿ. ಹಾಗಾದರೆ ಜಾಫರ್ ಷರೀಫರ ಮೊಮ್ಮಗನ ಕಥೆ ಏನು? ಅಂತ ಸಿದ್ದುಗೆ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. 

ಈ ʼಸಿದ್ದಹಸ್ತರ ಸಿದ್ದಸೂತ್ರʼ ಅಲ್ಲಿಗೇ ನಿಲ್ಲುವುದಿಲ್ಲ. 2016ರಲ್ಲಿ ಹೆಬ್ಬಾಳ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಹಿರಿಯ ನಾಯಕ ಸಿ.ಕೆ.ಜಾಫರ್ ಷರೀಫ್ ಮೊಮ್ಮಗ ರೆಹಮಾನ್ ಷರೀಫ್ ಅವರಿಗೆ ಅಧಿಕೃತ ಟಿಕೆಟ್ ಕೊಡುತ್ತದೆ. 

ಸಿದ್ದರಾಮಯ್ಯ ಭೇಟಿಯಾದ ಕುಮಾರ ಬಂಗಾರಪ್ಪ: ಡಿಕೆಶಿ ಬಗ್ಗೆ ಬಿಜೆಪಿ ಶಾಸಕನ ಸಾಫ್ಟ್‌ ಕಾರ್ನರ್‌..!

2012ರ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಇಕ್ಬಾಲ್ ಅಹಮದ್ ಸರಡಗಿ ಸೋಲುತ್ತಾರೆ. ಪಕ್ಷೇತರ ಅಭ್ಯರ್ಥಿಯಾಗಿದ್ದ ಭೈರತಿ ಸುರೇಶ್ ತಮ್ಮ ಗೆಲುವಿಗೆ ಬೇಕಿದ್ದ 19 ಮತ ಮೀರಿ 23 ಮತ ಪಡೆದು ಗೆಲ್ಲುತ್ತಾರೆ!! ಇಲ್ಲಿ ಸರಡಗಿ ಸೋಲಿಗೆ, ಬೈರತಿ ಸುರೇಶ್ ಗೆಲುವಿಗೆ ಕಾರಣವಾದ ʼಸಿದ್ದಸೂತ್ರʼ ಹಣೆದಿದ್ದು ಯಾರು? ಅಂತ ಪ್ರಶ್ನಿಸಿದ್ದಾರೆ. 

ಅಧಿಕಾರ ಕೊಟ್ಟ ಪಕ್ಷದ ಕತ್ತನ್ನೇ ಕುಯ್ಯುವ ಸಿದ್ದರಾಮಯ್ಯ

ನಂಬಿ ಅಧಿಕಾರ ಕೊಟ್ಟ ಪಕ್ಷದ ಕತ್ತನ್ನೇ ಕುಯ್ಯುವ, ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುವ ʼಸಿದ್ದಹಸ್ತ ಸೂತ್ರಧಾರಿʼಯ ಒಳ ರಾಜಕೀಯಕ್ಕೆ ಬಲಿಯಾಗುತ್ತಿರುವ ಅಲ್ಪಸಂಖ್ಯಾತ ನಾಯಕರ ದೊಡ್ಡ ಪಟ್ಟಿಯೇ ಇದೆ. ಕಾಂಗ್ರೆಸ್ʼನಲ್ಲಿ ನಡೆದಿರುವ ಅಲ್ಪಸಂಖ್ಯಾತ ನಾಯಕರ ʼರಾಜಕೀಯ ನರಮೇಧʼಕ್ಕೆ ಯಾರು ಕಾರಣ ಎಂದು ಜನರಿಗೆ ಗೊತ್ತಾಗಲಿ ಅಂತ ಹೇಳಿದ್ದಾರೆ. 

ತನ್ನೆಲ್ಲ ಸಿದ್ದಕಲೆ, ಸಿದ್ದಸೂತ್ರಗಳೆನ್ನೆಲ್ಲ ಪೋಣಿಸಿ ʼಅಹಿಂದʼ(Ahinda) ಎಂದು ಜನರನ್ನು 'ಅಡ್ಡದಾರಿ' ಹಿಡಿಸಿದ ʼಸಿದ್ದಹಸ್ತ ಶೂರರುʼ ತಮ್ಮ ಸ್ವಪಕ್ಷದಲ್ಲೇ ಮುಸ್ಲಿಂ ನಾಯಕರನ್ನು ಒಬ್ಬೊಬ್ಬರನ್ನಾಗಿಯೇ ಟಾರ್ಗೆಟ್ ಮಾಡುತ್ತಾ ʼಅಲ್ಪಸಂಖ್ಯಾತರ ಅಂತ್ಯ ರಾಜಕಾರಣʼದ ಟರ್ಮಿನೇಟರ್‌ ಆಗಿ ಹೊರಹೊಮ್ಮಿದ್ದಾರೆ ಅಂತ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ. 

ಅಲ್ಪಸಂಖ್ಯಾತರ ಕಲ್ಯಾಣದ ಪೇಟೆಂಟ್ ತೆಗೆದುಕೊಂಡಂತೆ ಪೋಸು ಕೊಡುವ ʼಸಿದ್ದಹಸ್ತʼ ಶೂರನ ನಿಜಬಣ್ಣ ಬಯಲು ಮಾಡುವ ಸಂದರ್ಭ ಬಂದಿದೆ. ಸ್ವಾರ್ಥ, ಸ್ವಜನ ಪಕ್ಷಪಾತ, ತಮ್ಮ ಬೆಂಬಲಿಗರ ರಾಜಕೀಯ ಅಭಿವೃದ್ಧಿಗಾಗಿ ಪಕ್ಷಕ್ಕಾಗಿ ಅಹರ್ನಿಷಿ ದುಡಿದ ಅಲ್ಪಸಂಖ್ಯಾತ ನಾಯಕರನ್ನು ಗುರಿ ಇಟ್ಟು ಮುಗಿಸಲಾಗುತ್ತಿದೆ ಅಂತ ಸಿದ್ದರಾಮಯ್ಯ ವಿರುದ್ಧ ಎಚ್‌ಡಿಕೆ ಹರಿಹಾಯ್ದಿದ್ದಾರೆ. 
 

Follow Us:
Download App:
  • android
  • ios