ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ನಡೆಯುತ್ತಿದ್ದ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಬೆಂಗಳೂರು (ಜು.05): ಕಳೆದ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಪ್ರಮುಖ ಪತ್ರಿಕೆಗಳಲ್ಲಿ ‘ಭ್ರಷ್ಟಾಚಾರ ದರ ಪಟ್ಟಿʼ ಎಂಬ ಹೆಸರಿನಲ್ಲಿ ಜಾಹೀರಾತು ಪ್ರಕಟಿಸಿ ಮಾನನಷ್ಟ ಉಂಟು ಮಾಡಿದ ಆರೋಪದಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ನಡೆಯುತ್ತಿದ್ದ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ವಿಚಾರಣಾ ನ್ಯಾಯಾಲಯದ ವಿಚಾರಣೆ ರದ್ದು ಕೋರಿ ಕೆಪಿಸಿಸಿ ಮತ್ತು ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಪೀಠ ಈ ಆದೇಶ ಮಾಡಿದೆ.
ಕಳೆದ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ 2023ರ ಮೇ 5ರಂದು ಎಲ್ಲ ಪ್ರಮುಖ ಪತ್ರಿಕೆಗಳ ಮುಖಪುಟದಲ್ಲಿ ‘ಭ್ರಷ್ಟಾಚಾರ ದರ ಪಟ್ಟಿ’ ಎಂಬ ಹೆಸರಿನ ಅಡಿ ವಿವಿಧ ಹುದ್ದೆಗಳಿಗೆ ಬಿಜೆಪಿ ಲಂಚ ನಿಗದಿಪಡಿಸಿದೆ ಎಂದು ಆರೋಪಿಸಿ ಜಾಹೀರಾತು ನೀಡಿತ್ತು. ಕೋವಿಡ್ ಸಾಮಗ್ರಿಗಳ ಪೂರೈಕೆ, ಲೋಕೋಪಯೋಗಿ ಗುತ್ತಿಗೆಗಳು, ಮಠಗಳಿಗೆ ಅನುದಾನ, ಶಾಲೆಗಳಿಗೆ ಮೊಟ್ಟೆ ಪೂರೈಕೆ, ರಸ್ತೆ ಕಾಮಗಾರಿಗಳಲ್ಲಿ ಶೇ.25-30 ಕಮಿಷನ್ ಪಡೆಯಲಾಗುತ್ತಿದೆ. ಜಾಹೀರಾತಿನ ಕೊನೆಯಲ್ಲಿ ನಾಲ್ಕು ವರ್ಷಗಳಲ್ಲಿ ಶೇ.40 ಕಮಿಷನ್ (ಬಿಜೆಪಿ) ಸರ್ಕಾರ 1.5 ಲಕ್ಷ ಕೋಟಿ ರು. ಲೂಟಿ ಮಾಡಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.
ಈ ಬಗ್ಗೆ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಬಿ.ಎಸ್.ಕೇಶವ ಪ್ರಸಾದ್ ವಿಚಾರಣಾ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಿದ್ದರು. ಸುಳ್ಳು ಜಾಹೀರಾತು ನೀಡುವ ಮೂಲಕ ಬಿಜೆಪಿಗೆ ಮಾನಹಾನಿ ಮಾಡುವ ಪ್ರಯತ್ನ ಮಾಡಲಾಗಿದೆ. ಅದಕ್ಕೆ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನೇರ ಕಾರಣ ಎಂದು ಆರೋಪಿಸಿದ್ದರು. ಪ್ರಕರಣವನ್ನು ವಿಚಾರಣಾ ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ. ಪ್ರಕರಣದಲ್ಲಿ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಜಾಮೀನು ಪಡೆದುಕೊಂಡಿದ್ದಾರೆ. ರಾಹುಲ್ ಗಾಂಧಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ. ಇದೀಗ ಕೆಪಿಸಿಸಿ ಮತ್ತು ರಾಹುಲ್ ಗಾಂಧಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
