ಅನುಭವದಿಂದ ಕಾರ್ಯ ದಕ್ಷತೆ ಹೆಚ್ಚಿಸಿಕೊಳ್ಳಿ: ಸಿಎಂ ಸಿದ್ದರಾಮಯ್ಯ ಕರೆ
ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಿ ಅಸಮಾನತೆ ಹಾಗೂ ಪ್ರಾದೇಶಿಕ ಅಸಮತೋಲನ ತೊಡೆದು ಹಾಕಲು ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಹಿಂದಿನ ವರ್ಷಗಳ ಅನುಭವದಿಂದ ಪಾಠ ಕಲಿತು ಕಾರ್ಯಕ್ಷಮತೆ ಹೆಚ್ಚಿಸಿಕೊಳ್ಳಬೇಕು ಎಂದು ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ಬೆಂಗಳೂರು (ಜ.02): ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಿ ಅಸಮಾನತೆ ಹಾಗೂ ಪ್ರಾದೇಶಿಕ ಅಸಮತೋಲನ ತೊಡೆದು ಹಾಕಲು ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಹಿಂದಿನ ವರ್ಷಗಳ ಅನುಭವದಿಂದ ಪಾಠ ಕಲಿತು ಕಾರ್ಯಕ್ಷಮತೆ ಹೆಚ್ಚಿಸಿಕೊಳ್ಳಬೇಕು ಎಂದು ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿರಿಯ ಐಎಎಸ್, ಐಪಿಎಸ್ ಹಾಗೂ ಐಎಫ್‌ಎಸ್ ಅಧಿಕಾರಿಗಳಿಗೆ ಹೊಸವರ್ಷದ ಶುಭಾಶಯ ಕೋರಿ ಮಾತನಾಡಿದರು.
ಆಡಳಿತ ರಂಗದಲ್ಲಿ ಐಎಎಸ್, ಐಪಿಎಸ್, ಐಎಫ್‌ಎಸ್, ಐಆರ್‌ಎಸ್, ಕೆಎಎಸ್ ಅಧಿಕಾರಿಗಳ ಜವಾಬ್ದಾರಿ ಹೆಚ್ಚು. ಎಲ್ಲಾ ವರ್ಗಗಳಿಗೆ ಸಾಮಾಜಿಕ-ಆರ್ಥಿಕ ಸ್ವಾತಂತ್ರ್ಯ ಒದಗಿಸದಿದ್ದರೆ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಬರುವುದಿಲ್ಲ. ಆರ್ಥಿಕತೆ ವೇಗವಾಗಿ ಬೆಳೆದಷ್ಟೂ ಅದು ಎಲ್ಲರಿಗೂ ಹಂಚಿಕೆಯಾಗಬೇಕು. ಇಲ್ಲದಿದ್ದರೆ ಅಸಮಾನತೆ ಹೆಚ್ಚಾಗಿ ಆರ್ಥಿಕತೆ ಎಂಬುದು ಸಾರ್ಥಕತೆ ಇಲ್ಲದಂತಾಗುತ್ತದೆ ಎಂದು ಹೇಳಿದರು. ಈ ನಿಟ್ಟಿನಲ್ಲಿ ಮನಮೋಹನ್‌ಸಿಂಗ್ ಅವರ ಆರ್ಥಿಕ ನೀತಿ ನಮಗೆ ಆದರ್ಶವಾಗಬೇಕು. ಈ ಕಾರಣದಿಂದಲೇ ನಾವು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದೆವು. ಜನರ ಕೈಯಲ್ಲಿ ಹಣ ಇರಬೇಕು, ಜನರಿಗೆ ಕೊಳ್ಳುವ ಶಕ್ತಿ ಹೆಚ್ಚಾಗಬೇಕು. ಹೀಗಾಗಿ ಗ್ಯಾರಂಟಿಗಳು ಇನ್ನಷ್ಟು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವ ಜವಾಬ್ದಾರಿ ನಿಮ್ಮೆಲ್ಲರ ಮೇಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಪ್ರಾದೇಶಿಕ ಅಸಮತೋಲನ ನಿವಾರಿಸಬೇಕು: ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 35 ಸಾವಿರ ಕೋಟಿ ರು. ಖರ್ಚು ಮಾಡಿದ್ದೇವೆ. ಈಗಲಾದರೂ ನಂಜುಂಡಪ್ಪ ಅವರ ವರದಿಯಲ್ಲಿನ ಪ್ರಾದೇಶಿಕ ಅಸಮಾನತೆ ಕಡಿಮೆಯಾಗಿದೆಯಾ ಎನ್ನುವುದನ್ನು ಅಧ್ಯಯನ ನಡೆಸಿ ವರದಿ ನೀಡಲು ಗೋವಿಂದರಾವ್ ಸಮಿತಿ ರಚಿಸಲಾಗಿದೆ. ಏಕೆ ಉತ್ತರ ಕರ್ನಾಟಕದ ಅಸಮಾನತೆ ಕಡಿಮೆ ಆಗಿಲ್ಲ ಎಂಬುದನ್ನು ನೀವು ಗಂಭೀರವಾಗಿ ಪರಿಗಣಿಸಿ ಅಸಮತೋಲನ ತೊಡೆದು ಹಾಕಲು ಶ್ರಮಿಸಬೇಕು ಎಂದು ಅಧಿಕಾರಿಗಳಿಗೆ ಕರೆ ನೀಡಿದರು.
ಸಿಎಂ ಸಿದ್ದರಾಮಯ್ಯಗೆ ಪ್ರಿಯಾಂಕ್ ಖರ್ಗೆ ರಾಜೀನಾಮೆ ಪಡೆವ ಶಕ್ತಿಯಿಲ್ಲ: ಜನಾರ್ದನ ರೆಡ್ಡಿ
ಆರ್ಥಿಕ ಶಿಸ್ತು ಕಾಪಾಡಬೇಕಿದೆ: ಕಳೆದ ಸರ್ಕಾರ ಸುಮಾರು 39 ಸಾವಿರ ಕೋಟಿ ಗುತ್ತಿಗೆ ಬಿಲ್ ಬಾಕಿ ಉಳಿಸಿ ಹೋಗಿದ್ದರು. ಜತೆಗೆ ಕೇಂದ್ರ ಸರ್ಕಾರದಿಂದಲೂ ನಮಗೆ ಅನ್ಯಾಯ ಮುಂದುವರೆದಿದೆ. ಇದರ ನಡುವೆಯೂ ಹಣ ಸಂಗ್ರಹಿಸುವ ಇಲಾಖೆ ಮತ್ತು ಹಣ ಖರ್ಚು ಮಾಡುವ ಇಲಾಖೆಗಳೆರಡೂ ಸಮತೂಕದಿಂದ ಕರ್ತವ್ಯ ನಿರ್ವಹಿಸಿ ಆರ್ಥಿಕ ಶಿಸ್ತು ಕಾಪಾಡಬೇಕಿದೆ ಎಂದು ಸಲಹೆ ನೀಡಿದರು. ಸಚಿವರಾದ ಜಮೀರ್ ಅಹಮದ್ ಖಾನ್, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಸೇರಿ ಹಲವರು ಹಾಜರಿದ್ದರು.