ತಮ್ಮ ಅಕ್ರಮಗಳಿಂದ ಪಾರಾಗಲು ಬಿಜೆಪಿ ಕೇಂದ್ರ ನಾಯಕರ ಜೊತೆ ಚೌಕಾಸಿ ನಡೆಸುತ್ತಿರುವ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಪ್ರಭಾವಿ ಸಚಿವರೊಬ್ಬರು 50-60 ಶಾಸಕರ ಜೊತೆ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಲು ಸಿದ್ಧವಾಗಿದ್ದಾರೆ. 

ಹಾಸನ/ಕೆ.ಆರ್‌.ಪೇಟೆ (ಡಿ.11): ‘ತಮ್ಮ ಅಕ್ರಮಗಳಿಂದ ಪಾರಾಗಲು ಬಿಜೆಪಿ ಕೇಂದ್ರ ನಾಯಕರ ಜೊತೆ ಚೌಕಾಸಿ ನಡೆಸುತ್ತಿರುವ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಪ್ರಭಾವಿ ಸಚಿವರೊಬ್ಬರು 50-60 ಶಾಸಕರ ಜೊತೆ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಲು ಸಿದ್ಧವಾಗಿದ್ದಾರೆ. ಹೀಗಾಗಿ, ಮುಂದಿನ ಲೋಕಸಭಾ ಚುನಾವಣೆ ನಂತರ ಈ ಸರ್ಕಾರ ಪತನಗೊಳ್ಳಲಿದೆ’ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹೊಸ ಬಾಂಬ್‌ ಸಿಡಿಸಿದ್ದಾರೆ.

ಹಾಸನ ಹಾಗೂ ಕೆ.ಆರ್‌.ಪೇಟೆಗಳಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್‌ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ. ಈ ಸರ್ಕಾರ ಯಾವಾಗ ಹೋಗುತ್ತೊ ಗೊತ್ತಿಲ್ಲ. ಸರ್ಕಾರದ ಪ್ರಭಾವಿ ಸಚಿವರೊಬ್ಬರು ಪಕ್ಷ ತೊರೆಯುವ ಬಗ್ಗೆ ನನಗೆ ಮಾಹಿತಿ ಸಿಕ್ಕಿದೆ ಎಂದರು. ಆದರೆ, ‘ಆ ಪ್ರಭಾವಿ ಸಚಿವರು’ ಯಾರು ಎಂಬುದನ್ನು ಅವರು ಸ್ಪಷ್ಟಪಡಿಸಲಿಲ್ಲ. ಸಣ್ಣಪುಟ್ಟವರು 50-60 ಶಾಸಕರನ್ನು ಕರೆದುಕೊಂಡು ಹೋಗಲು ಆಗುತ್ತಾ, ಅವರು ಪ್ರಭಾವಿಗಳೇ ಆಗಿರಬೇಕು ತಾನೆ ಎಂದರು.

ಜೋಡೆತ್ತುಗಳೆಂದು ಹೇಳಿಕೊಳ್ಳುವ ಬಿಎಸ್‌ವೈ-ಅಶೋಕ್ ನಡುವೆ ಹೊಂದಾಣಿಕೆ ಇಲ್ಲ: ಶಾಸಕ ಯತ್ನಾಳ್

ಮುಂದಿನ ಲೋಕಸಭಾ ಚುನಾವಣೆ ಕಳೆಯಲಿ. ಆಮೇಲೆ ಕರ್ನಾಟಕದಲ್ಲೂ ಮಹಾರಾಷ್ಟ್ರದಲ್ಲಿ ನಡೆದ ರಾಜಕೀಯ ಬದಲಾವಣೆ ಆಗುತ್ತದೆ. ಆದರೆ, ಅದಕ್ಕೆ ಕಾರಣಕರ್ತರಾಗಿ ಕರ್ನಾಟಕದಲ್ಲಿ ಯಾರು ಹುಟ್ಟಿಕೊಳ್ಳುತ್ತಾರೋ ಗೊತ್ತಿಲ್ಲ ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ವ್ಯಕ್ತಪಡಿಸಿರುವ ಅಸಮಾಧಾನ ಕುರಿತು ಪ್ರತಿಕ್ರಿಯಿಸಿ, ಹರಿಪ್ರಸಾದ್‌ ಮಾತ್ರವಲ್ಲ, ಕಾಂಗ್ರೆಸ್‌ನಲ್ಲಿ ಇನ್ನೂ ಹಲವರು ಅಸಮಾಧಾನಿತರು ಇದ್ದಾರೆ. ಒಂದೊಂದೇ ಧ್ವನಿ ಹೊರಬರುತ್ತದೆ. ಅಧಿಕಾರದಲ್ಲಿ ಉಳಿದುಕೊಳ್ಳಲು ವ್ಯಾಪಾರಕ್ಕೆ ಹೋಗಿದ್ದಾರೆ. ಅಕ್ರಮಗಳನ್ನು ಸರಿಪಡಿಸಿಕೊಳ್ಳಲು ಹೋಗಿರುವ ಮಾಹಿತಿಯೂ ನನಗಿದೆ ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ಭೇಟಿ ನೀಡಿದ್ದರ ಕುರಿತು ಪ್ರತಿಕ್ರಿಯಿಸಿ, ಈ ದೇಶದಲ್ಲಿ ಇವತ್ತಿನ ರಾಜಕಾರಣ ನೋಡಿದಾಗ ಏನು ಬೇಕಾದರೂ ನಡೆಯಬಹುದು. ಇಲ್ಲಿ ಯಾರಿಗೂ ಪ್ರಾಮಾಣಿಕತೆ, ನಿಷ್ಠೆ ಎನ್ನೋದು ಉಳಿದಿಲ್ಲ. ಅವರವರ ಸ್ವಾರ್ಥಕ್ಕೆ ಏನೇನು ಆಗಬೇಕೋ ಅದನ್ನೇ ಮಾಡಿಕೊಂಡು ಹೋಗುತ್ತಿದ್ದಾರೆ. ಇವತ್ತು ಇಲ್ಲಿ ಇರ್ತಾರೆ, ಅನುಕೂಲ ಆಗಬೇಕಾದರೆ ಇನ್ನೊಂದು ಕಡೆ ಹೋಗುತ್ತಾರೆ. ಇದು ಈಗಿನ ರಾಜಕೀಯದಲ್ಲಿ ನಡೆದುಕೊಂಡು ಬಂದಿದೆ ಎಂದು ವಿಷಾದಿಸಿದರು.

ಪ್ರಧಾನಿ ಮೋದಿಗೆ ಬೈಯದಿದ್ದರೆ ಸಿದ್ದರಾಮಯ್ಯಗೆ ಊಟ ರುಚಿಸಲ್ಲ: ಪ್ರಲ್ಹಾದ್‌ ಜೋಶಿ

ಇಬ್ಬರು ಸಚಿವರಿಂದ ಟಾಂಗ್‌: ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕೃಷಿ ಸಚಿವ ಚಲುವರಾಯಸ್ವಾಮಿ ಹಾಗೂ ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್‌.ಕೆ.ಪಾಟೀಲ್‌, ಕುಮಾರಸ್ವಾಮಿ ಕನಸು ಕಾಣುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.