ಜೆಡಿಎಸ್‌ ಪಂಚರತ್ನ ರಥಯಾತ್ರೆ ಇಂದಿನಿಂದ ಮತ್ತೆ ಪ್ರಾರಂಭ

ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕುರುಡುಮಲೈನಿಂದ ಪುನಾರಂಭ

JDS Pancharatna Yatra Will Be Resume on November 18th in Karnataka grg

ಬೆಂಗಳೂರು(ನ.18): ಮಳೆಯಿಂದ ರದ್ದಾಗಿದ್ದ ಜೆಡಿಎಸ್‌ನ ಪಂಚರತ್ನ ರಥಯಾತ್ರೆ ಇಂದಿನಿಂದ(ಶುಕ್ರವಾರ) ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕುರುಡುಮಲೈನಿಂದ ಪುನಾರಂಭವಾಗಲಿದೆ. ನ.1ರಂದು ಕುರುಡುಮಲೈ ಗಣಪತಿ ದೇವಾಲಯದಿಂದ ರಥಯಾತ್ರೆ ಪ್ರಾರಂಭವಾಗಿತ್ತಾದರೂ ಮಳೆಯ ಕಾರಣಕ್ಕೆ ಮುಂದೂಡಲಾಗಿತ್ತು. ಮಳೆ ನಿಂತಿರುವ ಹಿನ್ನೆಲೆಯಲ್ಲಿ ಶುಕ್ರವಾರದಿಂದ ಮತ್ತೆ ಪಂಚರತ್ನ ರಥಯಾತ್ರೆ ಪ್ರಾರಂಭವಾಗಲಿದೆ. ಕಳೆದ ಆ.27ರಂದು ಬೆಂಗಳೂರಿನ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪಂಚರತ್ನ ರಥಕ್ಕೆ ಸಾಂಕೇತಿಕವಾಗಿ ಪಕ್ಷದ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಚಾಲನೆ ನೀಡಿದ್ದರು.

ಪಂಚರತ್ನ ಯಾತ್ರೆಯಲ್ಲಿ ಭಾಗವಹಿಸುವ ಮುನ್ನ ಮೈಸೂರಿಗೆ ಭೇಟಿ ನೀಡಿ ಶುಕ್ರವಾರ ಬೆಳಗ್ಗೆಯೇ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಕುಮಾರಸ್ವಾಮಿ ಅವರು ನಂತರ ಮುಳಬಾಗಿಲಿಗೆ ಆಗಮಿಸಿ ಪಂಚರತ್ನ ಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಸಹ ಎಲ್ಲಾ ರಥಗಳಿಗೆ ಪೂಜೆ ಸಲ್ಲಿಸಲಿದ್ದಾರೆ.

ರಾಜ್ಯದ ಸಮಗ್ರ ಅಭಿವೃದ್ಧಿಯೇ ‘ಪಂಚರತ್ನ’ ಗುರಿ: ಎಚ್‌.ಡಿ.ಕುಮಾರಸ್ವಾಮಿ

ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಮುಳಬಾಗಿಲು ಪಟ್ಟಣದ ತಿರುಪತಿ ಬೈಪಾಸ್‌ ರಸ್ತೆಯಲ್ಲಿರುವ ಬಾಲಾಜಿ ಭವನದ ಪಕ್ಕದಲ್ಲಿನ ಜಾಗದಲ್ಲಿ ಬೃಹತ್‌ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಲಕ್ಷಾಂತರ ಜನ ಭಾಗವಹಿಸಲಿದ್ದಾರೆ. ಸಮಾವೇಶದಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಪಕ್ಷದ ಯುವ ಘಟಕ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಸೇರಿದಂತೆ ಎಲ್ಲ ಶಾಸಕರು, ಮಾಜಿ ಸಚಿವರು, ಎಲ್ಲ ಕ್ಷೇತ್ರಗಳ ಸಂಭವನೀಯ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ.

ಪಂಚ ಯೋಜನೆಗಳ ಪಂಚರತ್ನ:

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 123 ಸ್ಥಾನಗಳನ್ನು ಗೆಲ್ಲಲೇಬೇಕೆಂಬ ಗುರಿ ಹೊಂದಿರುವ ಜೆಡಿಎಸ್‌ ಪಕ್ಷವು ಸ್ವಂತ ಶಕ್ತಿಯ ಮೇಲೆ ಸರ್ಕಾರ ರಚಿಸಬೇಕು ಎಂಬ ಉದ್ದೇಶ ಹೊಂದಿದೆ. ಇದಕ್ಕಾಗಿ ಪಂಚರತ್ನ ಯಾತ್ರೆ ಹೆಸರಲ್ಲಿ ಚುನಾವಣಾ ಪ್ರಚಾರವನ್ನು ಕೈಗೊಳ್ಳುತ್ತಿದೆ. ನವ ಕರ್ನಾಟಕ ನಿರ್ಮಾಣಕ್ಕಾಗಿ ಮಹಾಯಾತ್ರೆ ಹೆಸರಲ್ಲಿ ಈ ರಥಯಾತ್ರೆ ಕೈಗೊಳ್ಳಲಾಗುತ್ತಿದೆ. ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಪಂಚರತ್ನ ಪರಿಪೂರ್ಣ ಪರಿಹಾರ ಎಂದು ಬಿಂಬಿಸಲಾಗುತ್ತಿದೆ. ಶಿಕ್ಷಣವೇ ಆಧುನಿಕ ಶಕ್ತಿ, ಆರೋಗ್ಯ ಸಂಪತ್ತು, ಕೃಷಿ ಚೈತನ್ಯ, ಯುವ ನವಮಾರ್ಗ ಮತ್ತು ಮಹಿಳಾ ಸಬಲೀಕರಣ ಮತ್ತು ವಸತಿ ಆಸರೆ ಪಂಚರತ್ನ ಯೋಜನೆಗಳಾಗಿವೆ. ಚುನಾವಣೆ ಪ್ರಣಾಳಿಕೆಯಲ್ಲಿ ಕೂಡ ಈ ಐದು ಅಂಶಗಳೇ ಪ್ರಮುಖ ಯೋಜನೆಗಳಾಗಿರುತ್ತವೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಮಳೆ: ಜೆಡಿಎಸ್ ಪಂಚರತ್ನ ರಥಯಾತ್ರೆ ಮುಂದೂಡಿಕೆ

ಗ್ರಾಮ ವಾಸ್ತವ್ಯ:

ಮುಳಬಾಗಿಲು ವಿಧಾನಸಭೆ ಕ್ಷೇತ್ರದಲ್ಲಿ ಶುಕ್ರವಾರ ಪಂಚರತ್ನ ರಥಯಾತ್ರೆ ನಡೆಯಲಿದೆ. ರಾತ್ರಿ ತಾಲೂಕಿನ ಊರುಕುಂಟೆ ಮಿಟ್ಟೂರು ಗ್ರಾಮದಲ್ಲಿ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಥವಾ ದೇಗುಲದಲ್ಲಿ ಉಳಿದುಕೊಳ್ಳುವ ಅವರು ಈ ವೇಳೆ ಗ್ರಾಮದ ಜನರ ಜತೆ ಸಂವಾದ, ವಿಚಾರ ವಿನಿಮಯ ನಡೆಸಲಿದ್ದಾರೆ. ಮಹಿಳೆಯರು, ಯುವಕರು, ರೈತರು, ವೃದ್ಧರ ಜತೆ ಮಾತುಕತೆ ನಡೆಸಲಿದ್ದಾರೆ. ಹಳ್ಳಿಯ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆಯುವುದರ ಜತೆಗೆ ಸ್ವತಃ ತಾವೇ ಗ್ರಾಮ ಸಂಚಾರ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಮುಳಬಾಗಿಲು ಕ್ಷೇತ್ರದ ಅಭ್ಯರ್ಥಿ ಸಮೃದ್ಧಿ ಮಂಜುನಾಥ್‌ ಅವರು ಸಹ ಜತೆ ಇರಲಿದ್ದಾರೆ.

ಮಳೆಯಿಂದಾಗಿ ಮುಂದೂಡಿಕೆಯಾಗಿದ್ದ ಯಾತ್ರೆ

- ವಿಧಾನಸಭೆ ಚುನಾವಣೆಯಲ್ಲಿ 123 ಸ್ಥಾನ ಗೆಲ್ಲುವ ಗುರಿ ಹೊಂದಿರುವ ಜೆಡಿಎಸ್‌
- ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪಂಚರತ್ನ ಪರಿಹಾರ ಘೋಷವಾಕ್ಯದಡಿ ಯಾತ್ರೆ
- ಬೆಳಗ್ಗೆ ಮೈಸೂರಿನ ಚಾಮುಂಡೇಶ್ವರಿ ದರ್ಶನ ಪಡೆದು ಮುಳಬಾಗಿಲಿಗೆ ಎಚ್‌ಡಿಕೆ
- ಮೊದಲ ದಿನ ಮುಳಬಾಗಿಲು ವಿಧಾನಸಭಾ ಕ್ಷೇತ್ರದಲ್ಲಿ ಸಂಚಾರ. ಅಲ್ಲೇ ವಾಸ್ತವ್ಯ
- ಗ್ರಾಮವಾಸ್ತವ್ಯ ವೇಳೆ ಜನರ ಜತೆ ಎಚ್‌ಡಿಕೆ ಸಂವಾದ, ವಿಚಾರ ವಿನಿಮಯ
 

Latest Videos
Follow Us:
Download App:
  • android
  • ios