ಮೂರು ಲೋಕಸಭೆ, ಎರಡು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಈಗಾಗಲೇ ಘೋಷಣೆಯಾಗಿದ್ದು, ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.  

ಶಿವಮೊಗ್ಗ : ರಾಜ್ಯದ ಮೂರು ಲೋಕಸಭೆ, ಎರಡು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಗರದ ಪಕ್ಷದ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಎಲ್ಲಾ ಬಿಜೆಪಿ ವಿಧಾನ ಸಭಾ ಸದಸ್ಯರು ಮತ್ತು ಮುಖಂಡರು ಹಾಗೂ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿ, ಈಗಾಗಲೆ ಒಮ್ಮತದ ಆಯ್ಕೆಯಾಗಿ ಬಿ.ವೈ. ರಾಘವೇಂದ್ರ ಅವರನ್ನು ಶಿವಮೊಗ್ಗ ಜಿಲ್ಲಾ ಮುಖಂಡರು ಆಯ್ಕೆ ಮಾಡಿದ್ದು, ಅವರು ಅ.15ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ಭರವಸೆ ಇದೆ ಎಂದರು.

ಸಮೀಕ್ಷೆ ಪ್ರಕಾರ ಈಗಾಗಲೇ ರಾಜ್ಯದಲ್ಲಿ 18 ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ. ಆದರೆ 22ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದ್ದು, ಪ್ರಧಾನಿ ಮೋದಿ ಅವರು ಮತ್ತೊಮ್ಮೆ ದೇಶದ ಪ್ರಧಾನಿಯಾಗುವುದು ನಿಶ್ಚಿತ ಎಂದರು.

ಈ ಉಪ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸುತ್ತೇವೆ. ಕಾಂಗ್ರೆಸ್‌, ಜೆಡಿಎಸ್‌ ಹೊಂದಾಣಿಕೆ ಮಾಡಿದರೂ ನಮ್ಮ ಕಾರ್ಯಕರ್ತರ ಶ್ರಮದಿಂದ ನಾವೇ ಗೆಲ್ಲುತ್ತೇವೆ. ಬಳ್ಳಾರಿಯಲ್ಲೂ ಈಗಾಗಲೇ ಶ್ರೀರಾಮಲು ಜೊತೆಗೆ ಮಾತನಾಡಿದ್ದೇನೆ. ಅಲ್ಲೂ ಬಿಜೆಪಿ ಗೆಲ್ಲಲಿದೆ. ಮಂಡ್ಯದಲ್ಲೂ ಉತ್ತಮ ಅಭ್ಯರ್ಥಿಗಾಗಿ ಹುಡುಕಾಟ ನಡೆದಿದೆ. ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡು ದೊಡ್ಡ ಅಂತರದಲ್ಲಿ ಗೆಲ್ಲುವ ಅವಶ್ಯಕತೆ ಇದೆ ಎಂದರು.

ಈ ಚುನಾವಣೆಯ ಫಲಿತಾಂಶ ಮುಂಬರುವ ಲೋಕ ಸಭಾ ಚುನಾವಣೆಗೆ ದಿಕ್‌ಸೂಚಿ ಅಲ್ಲ ಆದರೂ ಉಪ ಚುನಾವಣೆ ನಡೆಯಲಿರುವ 5 ಕ್ಷೇತ್ರಗಳಲ್ಲಿ ಹೆಚ್ಚಿನ ಕ್ಷೇತ್ರಗಳನ್ನು ಬಿಜೆಪಿ ಗೆಲ್ಲುತ್ತದೆ ಎಂದರು.