ಬೆಂಗಳೂರು, (ಆ.08): ತುಮಕೂರು ಜಿಲ್ಲೆ , ಶಿರಾ ವಿಧಾಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಬಿ.ಸತ್ಯನಾರಾಯಣ ಅವರ ನಿಧನದಿಂದಾಗಿ ಉಪಚುನಾವಣೆ ಎದುರಾಗಲಿದ್ದು, ರಾಜ್ಯದಲ್ಲಿ ಮತ್ತೊಂದು ಮಿನಿಮಹಾಸಮರ ನಡೆಯಲಿದೆ.

ಅಲ್ಲದೇ ಬೆಂಗಳೂರಿನ ರಾಜರಾಜೇಶ್ವರಿ ನಗರ, ರಾಯಚೂರು ಜಿಲ್ಲೆಯ ಮಸ್ಕಿ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಬೇಕಿದೆ. ಸಮ್ಮಿಶ್ರ ಸರ್ಕಾರ ಪತನವಾಗಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ನಡೆಯಲಿರುವ ಎರಡನೇ ಮಿನಿಮಹಾಸಮರ ಇದಾಗಿದೆ.

ಡಿಕೆಶಿಗೆ ಸಿದ್ದರಾಮಯ್ಯರ ಕಾಟವೇ ಜಾಸ್ತಿಯಾಗಿದೆ: ಅಶೋಕ್‌

ಹೀಗಾಗಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಜಿದ್ದಾಜಿದ್ದಿಗೂ ಕಾರಣವಾಗಲಿದೆ. ಈ ಹಿಂದೆ ಕಾಂಗ್ರೆಸ್ ಹಾಗೂ ಜೆಡಿಎಸ್‍ಗೆ ರಾಜೀನಾಮೆ ಕೆಲವು ಶಾಸಕರು ನೀಡಿದ್ದರಿಂದ 15 ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿತ್ತು. ಇದರಲ್ಲಿ ಬಿಜೆಪಿ 12 , ಕಾಂಗ್ರೆಸ್ 2 ಹೊಸಕೋಟೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಶರತ್ ಬಚ್ಚೇಗೌಡ ವಿಜೇತರಾಗಿದ್ದರು.

ಜೆಡಿಎಸ್ ಒಂದೇ ಒಂದು ಕ್ಷೇತ್ರದಲ್ಲೂ ಗೆಲ್ಲದೆ, ಭಾರೀ ಮುಖಭಂಗ ಅನುಭವಿಸಿತ್ತು. ಇದೀಗ ನಡೆಯಲಿರುವ ಮೂರು ಕ್ಷೇತ್ರಗಳ ಉಪಚುನಾವಣೆಯು ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಸ್‍ಗೆ ನಿರ್ಣಾಯಕವಾಗಲಿದೆ.

ಶಿರಾ ಗೆಲ್ಲಲು ಕೈ ಸಜ್ಜು
ಶಿರಾ ಕ್ಷೇತ್ರದ ಜೆಡಿಎಸ್ ಶಾಸಕ ಸತ್ಯನಾರಾಯಣ ನಿಧನದ ಹಿನ್ನೆಲೆಯಲ್ಲಿ ಯಾವ ಸಂದರ್ಭದಲ್ಲೂ ಬೈ ಎಲೆಕ್ಷನ್ ಘೋಷಣೆಯಾಗದೆ. ಈ ಹಿನ್ನೆಲೆಯಲ್ಲಿ ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಶಿರಾ ಕ್ಷೇತ್ರವನ್ನು ಗೆಲ್ಲಲು ಕಾಂಗ್ರೆಸ್ ಕಸರತ್ತು ನಡೆಸುತ್ತಿದೆ. ಶಿರಾ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮಧ್ಯೆ ಜಿದ್ದಾಜಿದ್ದಿ ಇದೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಬಿ ಜಯಚಂದ್ರ ಅವರನ್ನ ಸತ್ಯನಾರಾಯಣ ಅವರು 11 ಸಾವಿರು ಮತಗಳಿಂದ ಗೆಲುವು ಸಾಧಿಸಿದ್ದರು.

ಡಿಕೆಶಿಗೆ ಸವಾಲು

ಹೌದು... ಕೆಪಿಸಿಸಿ ಅಧ್ಯಕ್ಷರಾದ ನಂತರ ಭರ್ಜರಿ ಹವಾ ಎಬ್ಬಿಸಿರುವ ಡಿ.ಕೆ.ಶಿವಕುಮಾರ್‍ಗೂ ಈ ಉಪಸಮರ ಮತ್ತೊಂದು ಸವಾಲಾಗಿ ಪರಿಣಮಿಸಲಿದೆ. ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಸಮಾರಂಭವನ್ನು ಅದ್ದೂರಿಯಾಗಿ ನಡೆಸಿದ್ದ ಶಿವಕುಮಾರ್ ಇದೀಗ ರಾಜ್ಯಾದ್ಯಂತ ಪ್ರವಾಸ ಮಾಡುತ್ತಾ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ. ಜೊತೆಗೆ ರಾಜರಾಜೇಶ್ವರಿ ನಗರ ಹಾಗೂ ಮಸ್ಕಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದರು. ಈ ಎರಡೂ ಕ್ಷೇತ್ರಗಳನ್ನು ಗೆಲ್ಲಿಸಲೇಬೇಕಾದ ಹೊಣೆಗಾರಿಕೆ ಅವರ ಮೇಲಿದೆ.

ಜಿಲ್ಲಾ ನಾಯಕರ ಸಭೆ

ಮಸ್ಕಿ ವಿಧಾನಸಭಾ ಕ್ಷೇತ್ರವನ್ನು ಗೆಲ್ಲಲು ರಾಯಚೂರು ಜಿಲ್ಲಾ ಕಾಂಗ್ರೆಸ್ ನಾಯಕರ ತಂಡ ಶುಕ್ರವಾರ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು, ಮಸ್ಕಿ ಬೈ ಎಲೆಕ್ಷನ್‌ಗೆ ಈಗಿನಿಂದಲೇ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳುವಂತೆ ನಾಯಕರಿಗೆ ಡಿಕೆಶಿ ಸಲಹೆ ನೀಡಿದ್ದಾರೆ ಎನ್ನಲಾಗಿದೆ.