ಬೆಂಗಳೂರು, (ಡಿ.07): ಲೋಕಸಭೆ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ಕುರಿತಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಇಂದು (ಸೋಮವಾರ) ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕರ ಜೊತೆ ಸಮಾಲೋಚನೆ ನಡೆಸಿದರು.‌

ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ, ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಉಪ ಚುನಾವಣೆಯ ಉಸ್ತುವಾರಿ ವಹಿಸಿರುವ ಎಂ.ಬಿ. ಪಾಟೀಲ್, ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್, ಮಹಾಂತೇಶ ಕೌಜಲಗಿ ಹಾಜರಿದ್ದರು.

ಬೆಳಗಾವಿ ಲೋಕಸಭಾ ಬೈ ಎಲೆಕ್ಷನ್: ಕಣಕ್ಕಿಳಿಯುಲು ರೆಡಿ ಎಂದ ಕೈ ಕಲಿ..!

ಕೇಂದ್ರ ಸಚಿವರಾಗಿದ್ದ ಬೆಳಗಾವಿ ಸಂಸದ ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯಬೇಕಿದೆ. ಆದ್ರೆ, ಇನ್ನೂ ಚುನಾವಣೆ ದಿನಾಂಕ ನಿಗದಿಯಾಗಿಲ್ಲವಾದರೂ ಪಕ್ಷಗಳು ತಯಾರಿಯಲ್ಲಿ ತೊಡಗಿದೆ.

ಅಭ್ಯರ್ಥಿ ಯಾರು..?
ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ಎಂ.ಬಿ.ಪಾಟೀಲ್ ನೇತೃತ್ವದ ಸಮಿತಿ ಈಗಾಗಲೇ ಒಂದು ಸುತ್ತಿನ ಜಿಲ್ಲೆಯ ನಾಯಕ ಸಭೆ ನಡೆಸಿದೆ. ಸಭೆಯಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಹೆಸರು ಪ್ರಸ್ತಾಪವಾಗಿದೆ. ಇದನ್ನು ಎಂ.ಬಿ.ಪಾಟೀಲ್ ನೇತೃತ್ವದ ಸಮಿತಿಯು ಕೆಪಿಸಿಸಿಗೆ ತಿಳಿಸಿದೆ. ಅಲ್ಲದೇ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದು ಹೇಳುವ ಮೂಲಕ ಸತೀಶ್ ಜಾರಕಿಹೊಳಿ ಸ್ಪರ್ಧೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ. ಇನ್ನು ಬಿಜೆಪಿಯಿಂದ ಸಚಿವ ಜಗದೀಶ್ ಶೆಟ್ಟರ್ ಹೆಸರು ಕೇಳಿಬರುತ್ತಿದೆ.