ಬೆಂಗಳೂರು, (ಅ.13) : ಶೀಘ್ರದಲ್ಲೇ 'ಗ್ರಾಮ ಪಂಚಾಯತಿ ಚುನಾವಣೆ' ನಡೆಸುವಂತೆ ರಾಜ್ಯ ಸರ್ಕಾರಕ್ಕೆ ರಾಜ್ಯ ಚುನಾವಣಾ ಆಯೋಗ ಪತ್ರ ಬರೆದಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಮುಂದೂಡಲು ರಾಜ್ಯ ಸರ್ಕಾರ, ರಾಜ್ಯ ಚುನಾವಣೆ ಆಯೋಗಕ್ಕೆ ಪತ್ರ ಬರೆದಿತ್ತು. ಇದೀಗ ಇದಕ್ಕೆ ಚುನಾವಣೆ ಆಯೋಗ ಪತ್ರದ ಮೂಲಕ ಪ್ರತಿಕ್ರಿಯಿಸಿದ್ದು, ಗ್ರಾಮ ಪಂಚಾಯಿತಿಯನ್ನು ಬೇಗ ನಡೆಸುವುದು ಅನಿವಾರ್ಯವಾಗಿದೆ ಎಂದು ಸ್ಪಷ್ಟಪಡಿಸಿದೆ.

ಚುನಾವಣೆ ಆಯೋಗದಿಂದ ಮತ್ತೊಂದು ಸೂಚನೆ: ಗರಿಗೆದರಿದ ಗ್ರಾಮ ಪಂಚಾಯಿತಿ ಎಲೆಕ್ಷನ್

 ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಹಾಗೂ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆ ನಡೆಸಲು ವೇಳಾಪಟ್ಟಿ ಹೊರಡಿಸಿದ್ದು,  ಚುನಾವಣಾ ಪ್ರಕ್ರಿಯೆ ಕೂಡ ಪ್ರಾರಂಭವಾಗಿದೆ. 

ಅದರಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಚುನಾವಣೆ ನಡೆಸಲು ಸಿದ್ದತೆ ಮಾಡಿಕೊಳ್ಳಲಾಗಿದೆ.

ಈ ಹಿನ್ನೆಲೆ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಯನ್ನು ಶೀಘ್ರದಲ್ಲೇ ನಡೆಸುವುದು ಅನಿವಾರ್ಯವಾಗಿರುತ್ತದೆ ಎಂದು ರಾಜ್ಯ ಚುನಾವಣಾ ಆಯೋಗ, ಸರ್ಕಾರಕ್ಕೆ ಪತ್ರದ ಮೂಲಕ ತಿಳಿಸಿದೆ.

ಸಂಭಾವ್ಯ ವೇಳಾಪಟ್ಟಿ
ಗ್ರಾಮ ಪಂಚಾಯಿತಿ ಚುನಾವಣೆ ಸಂಬಂಧ ಕರ್ನಾಟಕ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ಸಲ್ಲಿಸಲಾಗಿತ್ತು. ಈ ಮಧ್ಯೆ,ಚುನಾವಣಾ ಆಯೋಗ ಸಂಭಾವ್ಯ ವೇಳಾಪಟ್ಟಿಯನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್‌ಗೆ ಸಲ್ಲಿಸಿದೆ. 

ಸದ್ಯ ರಾಜ್ಯದಲ್ಲಿ 2 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಮತ್ತು ವಿಧಾನ ಪರಿಷತ್ತಿನ ಶಿಕ್ಷಕರ ಮತ್ತು ಪದವೀಧರರ 4 ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಚಾಲ್ತಿಯಲ್ಲಿದೆ. ಸುಮಾರು 18 ಜಿಲ್ಲೆಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. 

ಗ್ರಾಮ ಪಂಚಾಯತಿ ಚುನಾವಣೆ: ಕಂದಾಯ ಇಲಾಖೆಗೆ ಚುನಾವಣಾ ಆಯೋಗ ಮಹತ್ವದ ಸೂಚನೆ

ಆಡಳಿತ ಯಂತ್ರ ಚುನಾವಣಾ ಕಾರ್ಯದಲ್ಲಿ ತೊಡಗಿದೆ. ಈ ಚುನಾವಣೆಗಳು ನ.12ಕ್ಕೆ ಮುಕ್ತಾಯಗೊಳ್ಳಲಿದ್ದು, ಅದಕ್ಕೂ ಮುನ್ನವೇ ಗ್ರಾ.ಪಂ. ಚುನಾವಣೆ ನಡೆಸುವ ಸ್ಥಿತಿಯಲ್ಲಿಇಲ್ಲ ಎಂದು ಆಯೋಗ ವರದಿಯಲ್ಲಿ ಹೇಳಿರುವುದಾಗಿ ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ 6, 025 ಗ್ರಾಮ ಪಂಚಾಯಿತಿಗಳಿದ್ದು, ಅವುಗಳ ಅವಧಿ ಜೂನ್/ ಜುಲೈ ತಿಂಗಳಲ್ಲಿ ಅಂತ್ಯಗೊಂಡಿದೆ. ಕೋವಿಡ್- 19 ಕಾರಣದಿಂದಾಗಿ ವಿಶೇಷ ಸಂದರ್ಭ ಎಂದು ಪರಿಗಣಿಸಿ ಚುನಾವಣೆಯನ್ನು ಮುಂದೂಡಿರುವುದಾಗಿ ಚುನಾವಣಾ ಆಯೋಗ ಮೇ ತಿಂಗಳಲ್ಲಿ ಘೋಷಿಸಿತ್ತು.