ಬೆಂಗಳೂರು, (ಡಿ.12): ಬಿಬಿಎಂಪಿ ಚುನಾವಣೆಯನ್ನು ಮುಂದೂಡಲು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್​ ಮೊರೆಹೋಗಿದೆ.

6 ವಾರದೊಳಗೆ ಬಿಬಿಎಂಪಿ ಚುನಾವಣೆ ನಡೆಸಬೇಕೆಂದು ಕರ್ನಾಟಕ ಹೈಕೋರ್ಟ್, ರಾಜ್ಯ ಚುನಾವಣೆ ಆಯೋಗಕ್ಕೆ ಸೂಚಿಸಿತ್ತು. ಈ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಸರ್ಕಾರ, ಚುನಾವಣೆ ಮುಂದೂಡುವಂತೆ ಸುಪ್ರೀಂಗೆ ಮೇಲ್ಮನವಿ ಅರ್ಜಿ ಸಲ್ಲಿಸಿದೆ.

ಬಿಬಿಎಂಪಿ ಚುನಾವಣೆ ಭವಿಷ್ಯ: ಮಹತ್ವದ ತೀರ್ಪು ನೀಡಿದ ಹೈಕೋರ್ಟ್..! 

 ಬಿಬಿಎಂಪಿಗೆ ಕರ್ನಾಟಕ ಸರ್ಕಾರ ಪ್ರತ್ಯೇಕ ಕಾಯ್ದೆಯನ್ನು ಜಾರಿ ಮಾಡಿದ್ದು, ವಿಧಾನಮಂಡಲದ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಚುನಾವಣೆಯನ್ನು ಹೊಸ ಕಾಯ್ದೆಯ ಪ್ರಕಾರ ನಡೆಸಬೇಕಾಗಿರುವುದರಿಂದ ಹೈಕೋರ್ಟ್‍ನ ದ್ವಿಸದಸ್ಯ ಪೀಠ ನೀಡಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕೆಂದು ಅರ್ಜಿಯಲ್ಲಿ ಸರ್ಕಾರ ಮನವಿ ಮಾಡಿದೆ.

ಕ್ಷೇತ್ರಗಳ ಪುನರ್ ವಿಂಗಡಣೆ, ವಲಯಗಳ ಹೆಚ್ಚಳ, ಬಿಬಿಎಂಪಿ ವ್ಯಾಪ್ತಿಗೆ ಹೊಸ ಗ್ರಾಮಗಳ ಸೇರ್ಪಡೆ, ಮೇಯರ್ ಅಧಿಕಾರಾವಧಿ ಹೆಚ್ಚಳ ಸೇರಿದಂತೆ ಕೆಲವು ತಿದ್ದುಪಡಿ ಮಾಡಿ ಹೊಸ ಕಾಯ್ದೆಯನ್ನು ಜಾರಿ ಮಾಡಿರುವುದರಿಂದ ತಕ್ಷಣವೇ ಚುನಾವಣೆ ನಡೆಸಲು ಸಾಧ್ಯವಿಲ್ಲ. ಕಾಯ್ದೆ ಅನುಷ್ಠಾನಕ್ಕೆ ಸಮಯಾವಕಾಶ ಬೇಕಾಗಿರುವುದರಿಂದ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಬೇಕೆಂದು ಸರ್ಕಾರ ಸುಪ್ರೀಂಕೋರ್ಟ್‍ಗೆ ಮನವರಿಕೆ ಮಾಡಿದೆ.

ಇನ್ನು ಚುನಾವಣೆ ನಡೆಸಲು ಹೈಕೋರ್ಟ್ ಆದೇಶವನ್ನು ಕಾಂಗ್ರೆಸ್ ಸ್ವಾಗತಿಸಿದೆ. ಆದ್ರೆ, ಬಿಜೆಪಿ ಹಿಂದೇಟು ಹಾಕುತ್ತಿದ್ದು, ಸುಪ್ರೀಂಕೋರ್ಟ್ ಏನು ಹೇಳಲಿದೆ ಎನ್ನುವುದನ್ನು ಕಾದುನೋಡಬೇಕಿದೆ.