ಶ್ರೀನಿವಾಸ ಪ್ರಸಾದ್ ವಿಚಾರಣೆಗೆ ಹೈಕೋರ್ಟ್ ತಡೆ
- ಮತದಾರರಿಗೆ 100 ರು. ಹಂಚಿದ ಪ್ರಕರಣ
- 2017ರ ನಂಜನಗೂಡು ಉಪಚುನಾವಣೆ ವೇಳೆಯ ಘಟನೆ
- ಚುನಾವಣಾಧಿಕಾರಿ ಜಯಶಂಕರ್, ಪೊಲೀಸರಿಗೆ ನೋಟಿಸ್
ಬೆಂಗಳೂರು(ಜು.13): ಕಳೆದ 2017ರಲ್ಲಿ ನಡೆದಿದ್ದ ನಂಜನಗೂಡು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದಲ್ಲಿ ಮತದಾರರಿಗೆ ಬಹಿರಂಗವಾಗಿ 100 ರು.ಗಳನ್ನು ಹಂಚಿದ್ದ ಆರೋಪ ಸಂಬಂಧ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಪ್ರಕರಣದ ಸಂಬಂಧ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯದಲ್ಲಿ (ಜನಪ್ರತಿನಿಧಿಗಳ ವಿಶೇಷ ಕೋರ್ಚ್) ನಡೆಯುತ್ತಿರುವ ವಿಚಾರಣೆ ರದ್ದು ಕೋರಿ ಶ್ರೀನಿವಾಸ್ ಪ್ರಸಾದ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ಸುನೀಲ್‌ದತ್ ಯಾದವ್ ಅವರಿದ್ದ ಪೀಠ ಆದೇಶ ಮಾಡಿತು.
ಇದೇ ವೇಳೆ ಪ್ರತಿವಾದಿಗಳಾದ ನಂಜನಗೂಡು ಗ್ರಾಮಾಂತರ ಪೊಲೀಸರು ಹಾಗೂ ದೂರುದಾರರಾದ ನಂಜನಗೂಡು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಯಾಗಿದ್ದ ಎಸ್. ಜಯಶಂಕರ್ ಅವರಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆ ಮುಂದೂಡಿದೆ.
ಶ್ರೀನಿವಾಸ್ ಪ್ರಸಾದ್ ಪರ ಹಿರಿಯ ವಕೀಲ ಕೆ. ದಿವಾಕರ್ ವಾದ ಮಂಡಿಸಿ, ಅರ್ಜಿದಾರರ ವಿರುದ್ಧದ ಐಪಿಸಿ ಸೆಕ್ಷನ್ 171ಎಚ್ (ಚುನಾವಣೆಗಾಗಿ ಅಕ್ರಮ ಹಣ ಹಂಚಿಕೆ) ಅಡಿ ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ. ರಾಜಕೀಯ ವೈಷಮ್ಯದಿಂದ ಪ್ರಕರಣ ದಾಖಲಿಸಲಾಗಿದ್ದು ಅದನ್ನು ರದ್ದುಗೊಳಿಸಬೇಕು ಎಂದು ಮನವಿ ಮಾಡಿದರು.
ಪ್ರಕರಣದ ಹಿನ್ನೆಲೆ: ನಂಜನಗೂಡು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಶ್ರೀನಿವಾಸ್ ಪ್ರಸಾದ್ 2017ರ ಮಾ.23ರಂದು ದೇವರಸನಹಳ್ಳಿ ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸಿದ್ದರು. ಈ ಸಂದರ್ಭದಲ್ಲಿ ವೃದ್ಧೆಯೊಬ್ಬರಿಗೆ ಬಹಿರಂಗವಾಗಿ 100 ರು.ಗಳ ನೋಟು ನೀಡಿದ್ದು, ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಚುನಾವಣಾಧಿಕಾರಿ ಅಧಿಕಾರಿ ಜಯಶಂಕರ್ ನಂಜನಗೂಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ನಡೆಸಿದ್ದ ಪೊಲೀಸರು ಸ್ಥಳೀಯ ವಿಚಾರಣಾ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ಬಳಿಕ ಪ್ರಕರಣ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿತ್ತು.ಇದೀಗ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಸೌಲಭ್ಯ ವಿತರಣೆ: ವಸತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಪಿಎಂ ಕೇರ್ಸ್ ಯೋಜನೆಯ ಸೇವಾ ಸೌಲಭ್ಯ, ಪಿಯುಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ಸರ್ಕಾರಿ ಕಾಲೇಜಿನ ಪರಿಶಿಷ್ಟಜಾತಿ ಪರಿಶಿಷ್ಟವರ್ಗದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಹಾಗೂ ಸ್ತ್ರೀ ಶಕ್ತಿ ಒಕ್ಕೂಟಗಳಿಗೆ ಆರ್ಥಿಕ ನೆರವು ಚೆಕ್‌ಗಳನ್ನು ವಿತರಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಕೈಗಾರಿಕಾ ಸಂಬಂಧ ಸಭೆಯ ಸಂದರ್ಭದಲ್ಲಿ ಉಸ್ತುವಾರಿ ಸಚಿವರು ಸೌಲಭ್ಯಗಳನ್ನು ವಿತರಣೆ ಮಾಡಿದರು.
ಪಿಎಂ ಕೇರ್ಸ್ ಯೋಜನೆಯಡಿ 18 ವರ್ಷದೊಳಗಿನ ಮಕ್ಕಳಿಗೆ ಪಾಲನೆ ಮತ್ತು ರಕ್ಷಣೆ ಒಳಗೊಂಡಂತೆ ಅವರ ಆರೋಗ್ಯ, ವಿಮೆ, ಶಿಕ್ಷಣ ಹಾಗೂ ಸಮಾಜದಲ್ಲಿ ಸ್ವಾವಲಂಬಿಗಳಾಗಿ ಜೀವನ ನಿರ್ವಹಣೆಗೆ ನೆರವಾಗಲು ನೀಡಲಾಗುವ ಯೋಜನೆಯ ಪ್ರಮಾಣ ಪತ್ರವನ್ನು ವಿತರಿಸಿದರು.
ಇದೇ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಉಚಿತ ಶಾಲಾ ಶಿಕ್ಷಣದ ಜೊತೆ ಉನ್ನತ ಶಿಕ್ಷಣಕ್ಕಾಗಿ ಸಾಲದ ನೆರವು ಪಿಎಂ ಕೇರ್ಸ್ ಯೋಜನೆಯಡಿ ನೀಡಲಾಗುತ್ತದೆ. ವಿಮೆಯ ಪ್ರೀಮಿಯಂ ಮೊತ್ತವನ್ನು ಭರಿಸಲಾಗುತ್ತದೆ. 18 ವರ್ಷ ತುಂಬುವವರೆಗೆ ದೈನಂದಿನ ಅಗತ್ಯಗಳಿಗಾಗಿ ಪ್ರತೀ ತಿಂಗಳು 2 ಸಾವಿರ ರೂ. ಆರ್ಥಿಕ ಸಹಾಯಧನ ನೀಡಲಾಗುತ್ತದೆ. 23 ವರ್ಷ ಪೂರ್ಣಗೊಳಿಸಿದ ಬಳಿಕ ಪಿಎಂ ಕೇರ್ಸ್ ನಿಧಿಯಿಂದ 10 ಲಕ್ಷ ರು. ಆರ್ಥಿಕ ನೆರವು ನೀಡಲಾಗುತ್ತದೆ ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸ್ತ್ರೀ ಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಆಯ್ಕೆ ಮಾಡುವ ಸಂದರ್ಭದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಬೇಕು. ಎಲ್ಲಾ ಜನಪ್ರತಿನಿಧಿಗಳ ಗಮನಕ್ಕೆ ತರಬೇಕು ಎಂದು ಸಚಿವರು ತಿಳಿಸಿದರು.
ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಸಿಎಸ್. ನಿರಂಜನ್‌ಕುಮಾರ್, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಪಂಸಿಇಓ ಕೆ.ಎಂ. ಗಾಯಿತ್ರಿ, ಎಸ್ಪಿ ಟಿ.ಪಿ. ಶಿವಕುಮಾರ್, ಎಡಿಸಿ ಎಸ್. ಕಾತ್ಯಾಯಿನಿದೇವಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಗೀತಾ ಲಕ್ಷ್ಮಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ನಾಗಮಲ್ಲೇಶ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗೋವಿಂದ, ಇತರರು ಇದ್ದರು.