Karnataka MLC election voting: ರಾಜ್ಯದ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆಗೆ ಶುಕ್ರವಾರ ಮತದಾನ ನಡೆಯಲಿದೆ. ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಒಟ್ಟು 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಬೆಂಗಳೂರು (ಆ.23): ವಿಧಾನನ ಪರಿಷತ್ತಿನ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರ ಸೇರಿ ಒಟ್ಟು ನಾಲ್ಕು ಕ್ಷೇತ್ರಗಳ ಚುನಾವಣೆ ಅಂತಿಮ ಘಟ್ಟ ತಲುಪಿದ್ದು, ಶುಕ್ರವಾರ ಮತದಾನ ನಡೆಯಲಿದೆ.
ಯಾರು ಮತದಾನ ಮಾಡಬಹುದು?
ನೋಂದಾಯಿತ ಶಿಕ್ಷಕರು ಮತ್ತು ಪದವೀಧರರು ಮಾತ್ರ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ನಾಲ್ಕು ಕ್ಷೇತ್ರಗಳ ವ್ಯಾಪ್ತಿಯಲ್ಲಿ 549 ಮತಗಟ್ಟೆಗಳಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರಾಶಸ್ತ್ಯದ ಮತಗಳ ಮೂಲಕ ಮತದಾನ ಪ್ರಕ್ರಿಯೆ ನಡೆಯಲಿದೆ.
ಕಾಂಗ್ರೆಸ್-ಜೆಡಿಎಸ್ ನಡುವೆ ನೇರಾನೇರ ಪೈಪೋಟಿ
ನಾಲ್ಕು ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಹಾಗೂ ಮತ್ತೊಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿ ನಡುವೆ ನೇರಾನೇರ ಪೈಪೋಟಿ ನಡೆಯಲಿದೆ. ಈ ಚುನಾವಣೆಯನ್ನು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪ್ರತಿಷ್ಠೆಯಾಗಿ ಪರಿಗಣಿಸಿವೆ. ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಈ ಚುನಾವಣೆ ಎದುರಿಸುತ್ತಿವೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಠಕ್ಕರ್ ನೀಡಲು ಉಭಯ ಪಕ್ಷಗಳ ನಾಯಕರು ಬಿರುಸಿನ ಪ್ರಚಾರ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಕೂಡ ತನ್ನ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಭರ್ಜರಿ ಪ್ರಚಾರ ಮಾಡಿದೆ. ಅ.27ರಂದು ಈ ನಾಲ್ಕು ಕ್ಷೇತ್ರಗಳ ಮತ ಎಣಿಕೆ ಕಾರ್ಯ ನಡೆಯಲಿದ್ದು, ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಮೂರು ಪಕ್ಷಗಳ ಪೈಪೋಟಿ:
ಬೆಂಗಳೂರು ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎ.ಪಿ.ರಂಗನಾಥ್ ಮತ್ತು ಕಾಂಗ್ರೆಸ್ ಅಭ್ಯರ್ಥಿಯಾಗಿ ಪುಟ್ಟಣ್ಣ, ಆಗ್ನೇಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಂ.ಸುರೇಶ್, ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ, ಪಶ್ಚಿಮ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರು, ಕಾಂಗ್ರೆಸ್ ಅಭ್ಯರ್ಥಿ ಮೋಹನ್ ಲಿಂಬಿಕಾಯಿ, ಈಶಾನ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಶೀಲ್ ಜಿ.ನಮೋಶಿ, ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಚುನಾವಣೆಯಲ್ಲಿ ಸೆಣಸಾಡಲಿದ್ದಾರೆ.
ಪಶ್ಚಿಮ ಪದವೀಧರ ಕ್ಷೇತ್ರವು ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ ಜಿಲ್ಲೆಯ ವ್ಯಾಪ್ತಿ ಹೊಂದಿದ್ದು, 97,398 ಮತದಾರರು ಇದ್ದಾರೆ. ಈಶಾನ್ಯ ಶಿಕ್ಷಕರ ಕ್ಷೇತ್ರವು ಬೀದರ್, ಕಲಬುರಗಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಯಾದಗಿರಿ, ವಿಜಯನಗರ ಜಿಲ್ಲೆಗಳ ವ್ಯಾಪ್ತಿ ಹೊಂದಿದೆ. ಈ ಕ್ಷೇತ್ರದಲ್ಲಿ 34,784 ಮತದಾರರು ಇದ್ದಾರೆ.
ಆಗ್ನೇಯ ಪದವೀಧರ ಕ್ಷೇತ್ರವು ತುಮಕೂರು, ಕೋಲಾರ, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ ಜಿಲ್ಲೆಗಳ ವ್ಯಾಪ್ತಿ ಹೊಂದಿದ್ದು, 31,616 ಮತದಾರರು ಇದ್ದಾರೆ. ಬೆಂಗಳೂರು ಶಿಕ್ಷಕರ ಕ್ಷೇತ್ರವು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿ ಹೊಂದಿದ್ದು, 27,456 ಮತದಾರರು ಇದ್ದಾರೆ.
-43 ಅಭ್ಯರ್ಥಿಗಳ ಸೆಣಸಾಟನಾಲ್ಕು ಕ್ಷೇತ್ರಗಳ ಪೈಕಿ ಪಶ್ಚಿಮ ಪದವೀಧರರ ಕ್ಷೇತ್ರದಲ್ಲಿ 14 ಅಭ್ಯರ್ಥಿಗಳು, ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ 13 ಅಭ್ಯರ್ಥಿಗಳು, ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ 6 ಅಭ್ಯರ್ಥಿಗಳು ಹಾಗೂ ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ 10 ಮಂದಿ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಸೆಣಸಾಡಲಿದ್ದಾರೆ.


