ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ ಎಂದು ಹೇಳುವ ಮೂಲಕ ಹೊಸ ಕುತೂಹಲ ಮೂಡಿಸಿದ್ದಾರೆ. ಈ ಹಿಂದೆ ಬದಲಾವಣೆ ಇಲ್ಲ ಎಂದಿದ್ದ ಅವರು, ಇದೀಗ ಹೈಕಮಾಂಡ್ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಕಲಬುರಗಿ (ಮೇ.2): ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಇನ್ನೂ ಡೇಟ್‌ ಫಿಕ್ಸ್ ಆಗಿಲ್ಲ. ದಿನಾಂಕವೇ ನಿಗದಿಯಾಗದೆ ಇರುವಾಗ ಮುಖ್ಯಮಂತ್ರಿ ಬದಲಾಗುತ್ತಾರೆ, ಬದಲಾಗಲ್ಲ ಎಂದು ನಾನು ಹೇಗೆ ಹೇಳಲಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗುರುವಾರವಷ್ಟೇ ‘ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ’ ಎಂದಿದ್ದ ಖರ್ಗೆಯವರು ಶುಕ್ರವಾರ ತಮ್ಮ ಹೇಳಿಕೆಗೆ ಸ್ಪಷ್ಟೀಕರಣ ನೀಡುತ್ತಾ, ‘ಸಿಎಂ ಬದಲಾವಣೆಗೆ ಇನ್ನೂ ಸಮಯ ನಿಗದಿಯಾಗಿಲ್ಲ’ ಎಂದು ಹೇಳಿಕೆ ನೀಡಿ ಕುತೂಹಲ ಮೂಡಿಸಿದ್ದಾರೆ.

ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಅವರು ಮಾತನಾಡಿ ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ’ ಎಂಬ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಖರ್ಗೆ, ಪದೇ ಪದೇ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಕೇಳಿದರೆ ನಾನೇನು ಹೇಳಲಿ? ಮುಖ್ಯಮಂತ್ರಿ ಬದಲಾವಣೆಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ. ಡೇಟ್‌ ಫಿಕ್ಸ್‌ ಆದ ಮೇಲೆ ನಾವೆಲ್ಲ ಅಂದರೆ, ನಾನು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಎಲ್ಲರೂ ಸೇರಿ ಒಟ್ಟಾಗಿ ಚರ್ಚಿಸಿ, ಪಕ್ಷ ಹಾಗೂ ರಾಜ್ಯದ ಹಿತದೃಷ್ಟಿಯಿಂದ ಏನು ನಿರ್ಧಾರ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತೇವೆ ಎಂದರು.

ಯಾವುದೇ ನಿರ್ಣಯ ಕೈಗೊಂಡರೂ ಅದರ ಸಾಧಕ-ಬಾಧಕಗಳನ್ನು ಚರ್ಚಿಸಿ ಮುಂದುವರಿಯುತ್ತೇವೆ. ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಪಕ್ಷದ ಪ್ರತಿಯೊಬ್ಬರೂ ಬೆಂಬಲ ನೀಡಬೇಕು. ಈಗಲೇ ಈ ಬಗ್ಗೆ ಯಾವುದೇ ಊಹಾಪೋಹ ಮಾಡಬೇಡಿ. ನಾನೊಂದು ಹೇಳಿದರೆ ನೀವು ಇನ್ನೊಂದನ್ನು ಅರ್ಥೈಸಬೇಡಿ. ಸುಮ್ಮನೆ ತಪ್ಪು ಸಂದೇಶ ನೀಡಬೇಡಿ ಎಂದು ಮಾಧ್ಯಮದವರಿಗೆ ಮನವಿ ಮಾಡಿದರು.