ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಸ್ಪಷ್ಟಪಡಿಸಿದರು.
ಬೆಂಗಳೂರು (ಜು.19) ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಸ್ಪಷ್ಟಪಡಿಸಿದರು.
ಕೆಪಿವೈಸಿಸಿ ರಾಜ್ಯಾಧ್ಯಕ್ಷ ಎಚ್.ಎಸ್.ಮಂಜುನಾಥ್ ನೇತೃತ್ವದಲ್ಲಿ ಶನಿವಾರ ನಗರದ ಭಾರತ್ ಜೋಡೋ ಸಭಾಂಗಣದಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಂದೇ ಒಂದು ಪರೀಕ್ಷೆಯಲ್ಲೂ ಅಕ್ರಮ ಸಂಭವಿಸಲು ಬಿಡುವುದಿಲ್ಲ. ದೇಶದ ಯುವಕರ ಭವಿಷ್ಯ ಉಜ್ವಲವಾಗಿರಬೇಕು ಎಂಬುದು ನಮ್ಮ ಗುರಿಯಾಗಿದ್ದು, ಅದನ್ನು ಸಾಕಾರಗೊಳಿಸುತ್ತೇವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗುವುದು ಸರ್ಕಾರದ ವೈಫಲ್ಯವಾಗಿದೆ. ಆದ್ದರಿಂದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಲೇಬೇಕೆಂದು ಆಗ್ರಹಿಸಿದರು.
ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳಿಂದ ಆತಂಕಕ್ಕೊಳಗಾಗಿ ವಿದ್ಯಾರ್ಥಿಗಳು ಆತ್ಮ೧ಹತ್ಯೆ ಮಾಡಿಕೊಳ್ಳಬಾರದು, ಆತ್ಮ೧ಹತ್ಯೆ ಪರಿಹಾರವಲ್ಲ ಎಂಬ ಸಂದೇಶ ಸಾರಲು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ(ಕೆಪಿವೈಸಿಸಿ)ಯಿಂದ ಛಾತ್ರೋನ್ ಕಿ ಗೂಂಜ್ (ವಿದ್ಯಾರ್ಥಿಗಳ ಧ್ವನಿ) ಅಭಿಯಾನದ ಅಂಗವಾಗಿ ಈ ಸಂವಾದ ಆಯೋಜಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ನೀಟ್ ಪರೀಕ್ಷೆ ನಡೆಸುವ ಜವಾಬ್ದಾರಿಯನ್ನು ಈ ರಾಜ್ಯಗಳಿಗೇ ನೀಡಬೇಕು ಎಂದು ಒತ್ತಡ ಹೇರಿದ್ದವು. ಆದರೆ, ಕೇಂದ್ರ ಸರ್ಕಾರ ನೀಟ್ ಜಾರಿಗೊಳಿಸಿ ಪರೀಕ್ಷಾ ವ್ಯವಸ್ಥೆಯನ್ನು ಬುಡಮೇಲು ಮಾಡಿದೆ. ಅದನ್ನು ಸರಿಪಡಿಸಲು ಬಹಳ ವರ್ಷಗಳೇ ಬೇಕು. ನಿಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಲು ಯಾವ ಸರ್ಕಾರ ಬೇಕೆಂದು ನೀವೇ ನಿರ್ಧರಿಸಬೇಕು. ಶಿಕ್ಷಣವು ಭವಿಷ್ಯದ ಹಾದಿಯಾಗಿದ್ದು, ಶಿಕ್ಷಣದಿಂದ ಉಜ್ವಲ ಭವಿಷ್ಯ ಸಾಧ್ಯವಿದೆ. ಶಿಕ್ಷಣದಿಂದ ಪ್ರಭುತ್ವವನ್ನು ಪ್ರಶ್ನಿಸುವ ಧೈರ್ಯ ಬರುತ್ತದೆ. ಪ್ರಶ್ನಿಸುವುದರಿಂದಲೇ ಉಜ್ವಲ ಭವಿಷ್ಯ ರೂಪುಗೊಳ್ಳುತ್ತದೆ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷ ಎಚ್.ಎಸ್.ಮಂಜುನಾಥ್ ಮಾತನಾಡಿ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ವಿದ್ಯಾರ್ಥಿಗಳಿಗೆ ಬಹಳಷ್ಟು ತೊಂದರೆಯಾಗಿದೆ. ಸಾಕಷ್ಟು ವಿದ್ಯಾರ್ಥಿಗಳು ಆತ್ಮ೧ಹತ್ಯೆಗೆ ಶರಣಾಗಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನೂ ನೀಡುತ್ತಿಲ್ಲ ಎಂದು ಟೀಕಿಸಿದರು.
ಇಂದು, ದೇಶದ ಶಿಕ್ಷಣ ವ್ಯವಸ್ಥೆ ಪಾರದರ್ಶಕ ರಹಿತವಾಗಿದ್ದು, ಅಕ್ರಮಗಳ ಜಾಲ ತಿಳಿದಿದ್ದರೂ ಕೇಂದ್ರ ಸರ್ಕಾರ ಜಾಣ ಮೌನ ವಹಿಸಿದೆ. ಅಕ್ರಮವಿಲ್ಲದೆ ಒಂದೇ ಒಂದು ಪರೀಕ್ಷೆ ನಡೆಸಲು ಸಾಧ್ಯವಿಲ್ಲದವರು, ವಿಕಸಿತ ಭಾರತದ ಕುರಿತು ಮಾತನಾಡುತ್ತಿದ್ದಾರೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡದಿರುವುದು ಕೇಂದ್ರ ಸರ್ಕಾರಕ್ಕೆ ನಾಚಿಕೆಯ ವಿಷಯ ಎಂದು ಕಿಡಿಕಾರಿದರು. ರಾಜ್ಯಸಭಾ ಸದಸ್ಯ ಮನ್ಸೂರ್ ಅಲಿ ಖಾನ್ ಮಾತನಾಡಿದರು.


