ಸರ್ಕಾರಕ್ಕೆ ಆದಾಯ ತಂದು ಕೊಡುವ ಇಲಾಖೆ ಸಾರಿಗೆ ಇಲಾಖೆ. ಈ ವರ್ಷ ₹15 ಸಾವಿರ ಕೋಟಿಯ ಗುರಿಯನ್ನು ಮುಖ್ಯಮಂತ್ರಿ ನೀಡಿದ್ದಾರೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಬೆಳಗಾವಿ (ಜು.19): ಸರ್ಕಾರಕ್ಕೆ ಆದಾಯ ತಂದು ಕೊಡುವ ಇಲಾಖೆ ಸಾರಿಗೆ ಇಲಾಖೆ. ಈ ವರ್ಷ ₹15 ಸಾವಿರ ಕೋಟಿಯ ಗುರಿಯನ್ನು ಮುಖ್ಯಮಂತ್ರಿ ನೀಡಿದ್ದಾರೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಬೆಳಗಾವಿಯಲ್ಲಿ ನಿರ್ಮಿಸಲಾದ ನೂತನ ಆರ್‌ಟಿಒ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಕ್ಕೆ ಆದಾಯ ತರುವ ಪ್ರಮುಖ ಇಲಾಖೆಗಳಲ್ಲಿ ಸಾರಿಗೆ ಇಲಾಖೆ ಕೂಡ ಒಂದಾಗಿದೆ. ಸಾರಿಗೆ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದ್ದು, ಈಗಾಗಲೇ ನೇಮಕಾತಿ ಪ್ರಕ್ರಿಯೆ ನಡೆದಿದೆ. ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸಿಬ್ಬಂದಿ ಕೊರತೆ ಕಡಿಮೆಯಾಗಲಿದೆ. ಅಲ್ಲದೆ, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಎಲೆಕ್ಟ್ರಿಕ್ ಬಸ್‌ಗಳನ್ನು ಒದಗಿಸಲಾಗುವುದು ಎಂದು ಅವರು ತಿಳಿಸಿದರು. ಬೆಳಗಾವಿ ಜಿಲ್ಲೆಗೆ ಒಟ್ಟು 300 ಬಸ್‌ಗಳನ್ನು ನೀಡಲಾಗುವುದು. ಅದರಲ್ಲಿ ನಗರ ಸುತ್ತ-ಮುತ್ತ ಸಂಚಾರಕ್ಕೆ 100 ಎಲೆಕ್ಟ್ರಿಕ್ ಬಸ್‌ಗಳನ್ನು ಸಹ ಒದಗಿಸಲಾಗುವುದು ಎಂದರು.
ಪಾರದರ್ಶಕವಾಗಿ ಚಾಲಕ, ನಿರ್ವಾಹಕರ ನೇಮಕಾತಿ: ಸಾರಿಗೆ ಸಂಸ್ಥೆಗೆ 2019ರಲ್ಲಿ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ, ಕೋವಿಡ್‌ನಿಂದ ಸ್ಥಗಿತಗೊಂಡಿತ್ತು. ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ವಾಕರಸಾ ಸಂಸ್ಥೆಯಲ್ಲಿ 1000 ಚಾಲಕ ಮತ್ತು ಚಾಲಕ ಕಂ ನಿರ್ವಾಹಕ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿ ಸಂಪೂರ್ಣ ಪಾರದರ್ಶಕವಾಗಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿದ್ದೇವೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಬೆಂಗಳೂರಿನ ಕರಾರಸಾ ಸಂಸ್ಥೆಯ ಸಭಾಂಗಣದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಹೊಸದಾಗಿ ನೇಮಕಗೊಂಡ ಚಾಲಕರಿಗೆ ನೇಮಕಾತಿ ಪತ್ರ ವಿತರಿಸಿ ಮಾತನಾಡಿದರು. ವಾಕರಸಾ ಸಂಸ್ಥೆಯ ಅಧ್ಯಕ್ಷ ಭರಮಗೌಡ (ರಾಜು) ಕಾಗೆ ಮಾತನಾಡಿ, ಸಂಸ್ಥೆಗೆ ಇನ್ನೂ ಚಾಲನಾ ಸಿಬ್ಬಂದಿಗಳ ಅವಶ್ಯಕತೆ ಇದೆ. ಘಟಕಗಳ ಸುಧಾರಣೆ ಮಾಡಬೇಕಾಗಿದೆ. ಅದಕ್ಕಾಗಿ ವಿಶೇಷ ಹೆಚ್ಚು ಅನುದಾನವನ್ನು ಸರ್ಕಾರದಿಂದ ಒದಗಿಸಬೇಕು ಎಂದು ಮನವಿ ಮಾಡಿದರು.
ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ. ನೇಮಕಾತಿ ಪ್ರಕ್ರಿಯೆ, ವಾಣಿಜ್ಯ ಮಳಿಗೆಗಳ ಪರವಾನಗಿ ನಿರ್ವಹಣಾ ತಂತ್ರಾಂಶ ಕುರಿತು ಮಾಹಿತಿ ನೀಡಿದರು. ಇದೇ ವೇಳೆ ಸಚಿವರು ಸಾಂಕೇತಿಕವಾಗಿ 46 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಿದರು. ನಂತರ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಾಣಿಜ್ಯ ಮಳಿಗೆಗಳ ಪರವಾನಗಿ ನಿರ್ವಹಣಾ ತಂತ್ರಾಂಶ ಅನಾವರಣಗೊಳಿಸಿದರು. ಸಂಸ್ಥೆ ಉಪಾಧ್ಯಕ್ಷ ಪೀರಸಾಬ್ ಕೌತಾಳ, ಅಕ್ರಂ ಪಾಷಾ, ಎಂ. ರಾಚಪ್ಪ, ಇಬ್ರಾಯಿಮ್ ಮೈಗೂರು, ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತ್ತು ಡ್ರೀಮ್ ಸ್ಟೆಪ್ ಸಂಸ್ಥೆಯ ಸಿಬ್ಬಂದಿ ಉಪಸ್ಥಿತರಿದ್ದರು.
