Asianet Suvarna News Asianet Suvarna News

ಕಾವೇರಿ ಹಂಚಿಕೆಯಲ್ಲಿ ಸಂಕಷ್ಟ ಸೂತ್ರ ಇಲ್ಲದಿರುವುದು ಸಮಸ್ಯೆ ಹೆಚ್ಚಲು ಕಾರಣ: ಸಿದ್ದರಾಮಯ್ಯ

ಕಾವೇರಿ ನದಿ ನೀರು ಹಂಚಿಕೆ ವಿಷಯವಾಗಿ ಸಂಕಷ್ಟ ಸೂತ್ರ ಇಲ್ಲದಿರುವುದು ಸಮಸ್ಯೆ, ಸಂಕಷ್ಟ ಹೆಚ್ಚಲು ಕಾರಣವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. 

Lack of hardship formula in distribution of Cauvery is the reason for increasing the problem Says Siddaramaiah gvd
Author
First Published Sep 21, 2023, 5:23 AM IST

ನವದೆಹಲಿ (ಸೆ.21): ಕಾವೇರಿ ನದಿ ನೀರು ಹಂಚಿಕೆ ವಿಷಯವಾಗಿ ಸಂಕಷ್ಟ ಸೂತ್ರ ಇಲ್ಲದಿರುವುದು ಸಮಸ್ಯೆ, ಸಂಕಷ್ಟ ಹೆಚ್ಚಲು ಕಾರಣವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಎರಡೂ ರಾಜ್ಯದವರನ್ನು ಕರೆದು ಅಹವಾಲು ಕೇಳುವ ಅಧಿಕಾರ, ವ್ಯಾಪ್ತಿ ಪ್ರಧಾನಿಗಿದೆ. ಹೀಗಾಗಿ, ಈ ವಿಚಾರವಾಗಿ ಪ್ರಧಾನಿ ಅವರ ಮಧ್ಯಪ್ರವೇಶಕ್ಕೆ ನಾವು ಮನವಿ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ. 

ದೆಹಲಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬುಧವಾರ ನಡೆದ ಸರ್ವ ಪಕ್ಷಗಳ ಸಂಸದರ ಸಭೆಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೊರತುಪಡಿಸಿ ರಾಜ್ಯದಿಂದ ಆಯ್ಕೆಯಾದ ಎಲ್ಲಾ ಸಂಸದರು, ಕೇಂದ್ರ ಸಚಿವರು ಹಾಜರಿದ್ದರು. ನಿರ್ಮಲಾ ಸೀತಾರಾಮನ್ ಅವರು ಅನ್ಯಕಾರ್ಯ ನಿಮಿತ್ತ ಭಾಗವಹಿಸಲು ಸಾಧ್ಯವಾಗಿಲ್ಲ. ಕಾವೇರಿ ವಿಷಯವಾಗಿ ಗುರುವಾರ ಕೇಂದ್ರ ಜಲ ಸಂಪನ್ಮೂಲ ಸಚಿವರ ಜತೆ ಸಭೆ ನಡೆಸುತ್ತಿದ್ದೇವೆ. ಸಭೆ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ. 

ಅಲ್ಲದೆ, ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್‌ ನೀರು ಬಿಡುಗಡೆ ಮಾಡಬೇಕೆಂಬ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಸುಪ್ರೀಂಕೋರ್ಟ್‌ಗೆ ಮನವಿ ಮಾಡುತ್ತೇವೆ ಎಂದರು. ನಮಗೇ ಕುಡಿಯಲು, ಬೆಳೆ ರಕ್ಷಣೆಗೆ, ಕೈಗಾರಿಕೆಗಳಿಗೆ ನೀರಿಲ್ಲ. ಹೀಗಾಗಿ ನಾವು ಬಹಳ ಕಷ್ಟದಲ್ಲಿದ್ದೇವೆ. ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಮುಂದೆ ಸಮರ್ಥವಾಗಿ ನಮ್ಮ ವಾಸ್ತವ ಪರಿಸ್ಥಿತಿಯನ್ನು ಮಂಡಿಸಿದ್ದೇವೆ. ತಮಿಳುನಾಡಿನ ವಾದ ವಿರೋಧಿಸಿ ಸುಪ್ರೀಂಕೋರ್ಟ್‌ ನಲ್ಲಿ ನಮ್ಮ ತಕರಾರು ಮಂಡಿಸಿದ್ದೇವೆ. ಪ್ರಾಧಿಕಾರ ಆದೇಶ ಬಂದಾಗಲೆಲ್ಲಾ ಒಟ್ಟು ಮೂರು ಬಾರಿ ಸರ್ವ ಪಕ್ಷ ಸಭೆ ನಡೆಸಿದ್ದೇವೆ ಎಂದು ತಿಳಿಸಿದರು.

ಬರ ಕುರಿತು ಮಾತುಕತೆಗೆ ಪ್ರಧಾನಿ ಸಮಯ ನೀಡುತ್ತಿಲ್ಲ: ಸಿಎಂ ಸಿದ್ದರಾಮಯ್ಯ

ಈಗಾಗಲೇ ರಾಜ್ಯದಲ್ಲಿ 195 ತಾಲೂಕುಗಳನ್ನು ಬರಪೀಡಿತ ಎಂದು ಗುರುತಿಸಿದ್ದೇವೆ. 123 ವರ್ಷಗಳಲ್ಲೇ ಆಗಸ್ಟ್ ತಿಂಗಳಿನಲ್ಲಿ ಅತಿ ಕಡಿಮೆ ಮಳೆ ದಾಖಲಾಗಿದೆ. ವಾಡಿಕೆಗಿಂತ ಅತಿ ಕಡಿಮೆ ಮಳೆಯಾಗಿರುವುದು ಸಂಕಷ್ಟ ಹೆಚ್ಚಲು ಕಾರಣ. ಸಾಮಾನ್ಯ ವರ್ಷದಲ್ಲಿ ಮಳೆ ಚೆನ್ನಾಗಿದ್ದಾಗ ತಮಿಳುನಾಡಿಗೆ 177.2 ಟಿಎಂಸಿ ನೀರು ಬಿಡಬೇಕು ಎಂದು ತೀರ್ಪಿನಲ್ಲಿ ಹೇಳಿದೆ. ಆದರೆ, ಜಲಸಂಕಷ್ಟದ ಸಂದರ್ಭದಲ್ಲಿ ಎಷ್ಟು ನೀರು ಬಿಡಬೇಕು ಎನ್ನುವ ಸೂತ್ರ ಇಲ್ಲದಿರುವುದು ಸಮಸ್ಯೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

Follow Us:
Download App:
  • android
  • ios