ಅನ್ನಭಾಗ್ಯ ವಿಚಾರದ ಕುರಿತಂತೆ ಮುಂದೆ ಏನು ಮಾಡಬೇಕು ಎಂಬುದನ್ನು ಮುಖ್ಯಮಂತ್ರಿಗಳು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರು ಚರ್ಚಿಸಿ, ತೀರ್ಮಾನ ತೆಗೆದುಕೊಳ್ಳಲಿದ್ದಾರೆ: ಡಿ.ಕೆ. ಶಿವಕುಮಾರ್
ಬೆಂಗಳೂರು(ಜೂ.24): ರಾಜ್ಯಕ್ಕೆ ಅಕ್ಕಿ ನೀಡಲು ಒಪ್ಪದ ಕೇಂದ್ರ ಸರ್ಕಾರ ತನ್ನ ಧೋರಣೆಯನ್ನು ಸ್ಪಷ್ಟಪಡಿಸಿದೆ. ಬಿಜೆಪಿ ನಾಯಕರು ಅನ್ನಭಾಗ್ಯ ಯೋಜನೆ ಜಾರಿಗಾಗಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟಿಸುವ ಬದಲು ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮಾಡಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸದಾಶಿವ ನಗರದ ತಮ್ಮ ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅನ್ನಭಾಗ್ಯ ಯೋಜನೆ ಜಾರಿಗೆ ಆಗ್ರಹಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಪ್ರತಿಭಟಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರ ಅಕ್ಕಿ ಪೂರೈಸುವುದಿಲ್ಲ ಎಂದು ಹೇಳುತ್ತಿದೆ. ಹೀಗಾಗಿ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ವಿರುದ್ಧವೇ ಹೋರಾಟ ಮಾಡಬೇಕು. ಅನ್ನಭಾಗ್ಯ ವಿಚಾರದ ಕುರಿತಂತೆ ಮುಂದೆ ಏನು ಮಾಡಬೇಕು ಎಂಬುದನ್ನು ಮುಖ್ಯಮಂತ್ರಿಗಳು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರು ಚರ್ಚಿಸಿ, ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದರು.
ಬಜೆಟ್‌ನಲ್ಲಿ ಹೆಚ್ಚಿನ ಬದಲಾವಣೆ ಮಾಡದೇ ಹೊಸ ರೂಪ: ಡಿ.ಕೆ.ಶಿವಕುಮಾರ್
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಹಾಗೂ ರಾಜ್ಯದಲ್ಲಿ ಅಧಿಕಾರ ನಡೆಸಿರುವ ಸಂದರ್ಭದಲ್ಲಿ ತಾವು ನೀಡಿದ ಎಷ್ಟುಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಬಿಜೆಪಿ ನಾಯಕರು ಲೆಕ್ಕ ಹಾಕಲಿ ಎಂದು ಹೇಳಿದರು.
ವರ್ಷದಲ್ಲಿ 2 ಕೋಟಿ ಉದ್ಯೋಗ ಸೃಷ್ಟಿ, ದೇಶದ ಪ್ರತಿಯೊಬ್ಬರ ಆದಾಯ ದ್ವಿಗುಣ ಮಾಡುವುದು, ವಿದೇಶದಲ್ಲಿನ ಕಪ್ಪು ಹಣ ತಂದು ಜನರಿಗೆ ಹಂಚುವ ಕುರಿತು ಭರವಸೆ ನೀಡಿದ್ದರು. ಅದ್ಯಾವುದನ್ನೂ ಈಡೇರಿಸಲಿಲ್ಲ. ನಾವು ಅಧಿಕಾರಕ್ಕೆ ಬಂದು 1 ತಿಂಗಳಾಗಿದೆ. ಅಷ್ಟರೊಳಗೆ ನಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ. ಸಂವಿಧಾನದಲ್ಲಿ ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ. ಬಿಜೆಪಿ ನಾಯಕರು ನಮ್ಮ ವಿರುದ್ಧ ಧರಣಿ ನಡೆಸಿದರೆ, ಅಲ್ಲಿ ತೆರಳಿ ಅವರ ಆರೋಗ್ಯ ವಿಚಾರಿಸುತ್ತೇನೆ ಎಂದು ಹೇಳಿದರು.
ಕುಮಾರಣ್ಣ ಭೇಟಿಯಾಗುವೆ:
ವಿದ್ಯುತ್ ದರ ಏರಿಕೆ ನಮ್ಮ ಸರ್ಕಾರದ ನಿರ್ಧಾರವಲ್ಲ. ಹಿಂದಿನ ಸರ್ಕಾರವಿದ್ದಾಗ ತೆಗೆದುಕೊಂಡ ನಿರ್ಧಾರ. ಆ ಬಗ್ಗೆ ಯಾರೂ ಮಾತನಾಡುವುದಿಲ್ಲ. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಈ ವಿಷಯ ತಿಳಿದಿಲ್ಲ. ಅವರಿಗೆ ತಿಳಿಸುತ್ತೇನೆ. ರಾಜ್ಯದ ಮಾಜಿ ಸಿಎಂಗಳನ್ನು ಭೇಟಿಯಾಗಿ ಸಲಹೆ ಪಡೆದಿದ್ದೇನೆ. ಅದೇ ರೀತಿ ಎಚ್.ಡಿ. ಕುಮಾರಸ್ವಾಮಿ ಅವರನ್ನೂ ಭೇಟಿಯಾಗಿ ಸಲಹೆ ಪಡೆಯುತ್ತೇನೆ. ಅದೇ ರೀತಿ ಬಸವರಾಜ ಬೊಮ್ಮಾಯಿ ಅವರನ್ನೂ ಭೇಟಿಯಾಗುತ್ತೇನೆ. ಅವರು ಮಾಡಲಾಗದ ಯೋಜನೆಗಳಿದ್ದರೆ ತಿಳಿಸಲಿ. ರಾಜಕಾರಣ ಬಿಟ್ಟು ಅಭಿವೃದ್ಧಿ ಮಾಡೋಣ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
