ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವಾಗಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ
‘ಲಿಂಗಾಯತ ಸಮುದಾಯದ ಅಧಿಕಾರಿಗಳಿಗೆ ಗೌರವ ಸಿಗುತ್ತಿಲ್ಲ ಎಂಬುದು ಸರಿಯಲ್ಲ. ಸಂಪುಟದಲ್ಲಿ ಏಳು ಮಂದಿ ಲಿಂಗಾಯತ ಸಚಿವರಿದ್ದಾರೆ. ಈ ಸಮುದಾಯಕ್ಕೆ ಸೇರಿದ ಅಧಿಕಾರಿಗಳಿಗೆ ಅನ್ಯಾಯವಾಗಲು ಸಾಧ್ಯವಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು (ಅ.02): ‘ಲಿಂಗಾಯತ ಸಮುದಾಯದ ಅಧಿಕಾರಿಗಳಿಗೆ ಗೌರವ ಸಿಗುತ್ತಿಲ್ಲ ಎಂಬುದು ಸರಿಯಲ್ಲ. ಸಂಪುಟದಲ್ಲಿ ಏಳು ಮಂದಿ ಲಿಂಗಾಯತ ಸಚಿವರಿದ್ದಾರೆ. ಈ ಸಮುದಾಯಕ್ಕೆ ಸೇರಿದ ಅಧಿಕಾರಿಗಳಿಗೆ ಅನ್ಯಾಯವಾಗಲು ಸಾಧ್ಯವಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಲಿಂಗಾಯತ ಅಧಿಕಾರಿಗಳದ್ದು ನಾಯಿಪಾಡು ಮತ್ತು ಲಿಂಗಾಯತರಿಗೆ ಉಪಮುಖ್ಯಮಂತ್ರಿ ಬೇಡ, ಮುಖ್ಯಮಂತ್ರಿ ಸ್ಥಾನ ಬೇಕು ಎಂಬ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ ಅವರು ಮಾತನಾಡಿದರು.
ಲಿಂಗಾಯತರು ಮಾತ್ರವಲ್ಲ, ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಜಾತಿ, ಧರ್ಮಕ್ಕೂ ಅನ್ಯಾಯವಾಗಲ್ಲ. ನನ್ನ ಸಚಿವ ಸಂಪುಟದಲ್ಲಿ ಏಳು ಮಂದಿ ಲಿಂಗಾಯತ ಸಚಿವರಿದ್ದಾರೆ. ಹೀಗಿರುವಾಗ ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವಾಗಲು ಹೇಗೆ ಸಾಧ್ಯ ಎಂದು ಹೇಳಿದರು.
ಶಾಮನೂರು ಜತೆ ಚರ್ಚೆ: ಈ ಬಗ್ಗೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆ ಬಗ್ಗೆ ನನಗೆ ತಿಳಿದಿಲ್ಲ. ತಿಳಿದುಕೊಂಡು ಮಾತನಾಡುತ್ತೇನೆ. ಒಂದು ವೇಳೆ ಆ ರೀತಿ ಹೇಳಿದ್ದರೆ, ಯಾಕೆ ಹೀಗೆ ಹೇಳಿದರು ಎಂಬುದರ ಬಗ್ಗೆ ಶಾಮನೂರು ಶಿವಶಂಕರಪ್ಪ ಅವರ ಜತೆ ಚರ್ಚಿಸುತ್ತೇನೆ ಎಂದು ಹೇಳಿದರು.
ಜಾತಿ ಆಧಾರದಲ್ಲಿ ಸಿಎಂ ಮಾಡಲಾಗದು: ಸಚಿವ ಸತೀಶ ಜಾರಕಿಹೊಳಿ
ಶಾಮನೂರಿಗೂ ಆರ್ಹತೆಯಿದೆ: ಸಚಿವ ಕೆ.ಎಚ್. ಮುನಿಯಪ್ಪ ಮಾತನಾಡಿ, ಶಾಮನೂರು ಶಿವಶಂಕರಪ್ಪ ಅವರೂ ಸೇರಿದಂತೆ 224 ಶಾಸಕರಿಗೂ ಮುಖ್ಯಮಂತ್ರಿ ಆಗುವ ಅರ್ಹತೆ ಇದೆ. ಶಾಮನೂರು ಅವರನ್ನು ಒಳಗೊಂಡಂತೆ ಎಲ್ಲರೂ ಸಹಮತದಿಂದ ಈಗಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಿದ್ದಾರೆ. ನಮ್ಮಲ್ಲಿ ಏನೇ ಬದಲಾವಣೆಗಳಿದ್ದರೂ ಬೇಡಿಕೆಗಳಿದ್ದರೂ ಅದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ. ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಪ್ರಜಾಪ್ರಭುತ್ವ ಮಾದರಿಯಲ್ಲಿ ಎಲ್ಲರಿಗೂ ಮಾತನಾಡುವ ಹಾಗೂ ಅವರವರ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕಿದೆ ಎಂದು ಹೇಳಿದರು.