ಒಂದು ವರ್ಷ ಕಡ್ಡಾಯ ಸೇವೆ ನಿರ್ವಹಿಸುವ ವೈದ್ಯರ ವೇತನ ಪರಿಷ್ಕರಣೆಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ವಿಧಾನ ಪರಿಷತ್ತು (ಆ.21): ಸರ್ಕಾರಿ ಕೋಟಾ ಸೀಟು ಪಡೆದು ವೈದ್ಯಕೀಯ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿ ಸರ್ಕಾರಿ ಆಸ್ಪತ್ರೆಗಳಲ್ಲಿ ನಿಯಮಾನುಸಾರ ಒಂದು ವರ್ಷ ಕಡ್ಡಾಯ ಸೇವೆ ನಿರ್ವಹಿಸುವ ವೈದ್ಯರ ವೇತನ ಪರಿಷ್ಕರಣೆಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಒಂದು ವರ್ಷ ಕಡ್ಡಾಯ ಸೇವೆ ಸಲ್ಲಿಸಬೇಕಿರುವ ವೈದ್ಯರನ್ನು ಗ್ರಾಮೀಣ ಆಸ್ಪತ್ರೆಗಳಿಗೆ ನಿಯೋಜಿಸಿ ಹೆಚ್ಚುವರಿಯಾದವರನ್ನು ನಗರ ಪ್ರದೇಶದ ಆಸ್ಪತ್ರೆಗಳಿಗೆ ನಿಯೋಜಿಸುವ ಹಾಗೂ ತಜ್ಞ ವೈದ್ಯರನ್ನು ನಗರ ಪ್ರದೇಶಕ್ಕೆ ಮಾತ್ರವಲ್ಲದೆ ಗ್ರಾಮೀಣ ಭಾಗಕ್ಕೂ ನಿಯೋಜಿಸುವ ಸಂಬಂಧದ ‘ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ವಿಧೇಯಕ-2025ಕ್ಕೆ ಬುಧವಾರ ವಿಧಾನ ಪರಿಷತ್‌ನಲ್ಲೂ ಅಂಗೀಕಾರ ದೊರೆಯಿತು.
ವಿಧೇಯಕದ ಮೇಲೆ ಮಾತನಾಡಿದ ಬಿಜೆಪಿಯ ಡಾ.ಧನಂಜಯ ಸರ್ಜಿ, ಕೇಶವಪ್ರಸಾದ್ ಮತ್ತಿತರರು ಕಡ್ಡಾಯ ಸೇವೆಗೆ ಬರುವ ವೈದ್ಯರ ವೇತನ ಕಡಿಮೆ ಇದ್ದು, ಪರಿಷ್ಕರಿಸುವಂತೆ ಕೋರಿದರು. ಇದಕ್ಕೆ ಉತ್ತರಿಸಿದ ಸಚಿವರು, ಕಡ್ಡಾಯ ಸೇವೆಯಡಿ ಬರುವ ವೈದ್ಯರಿಗೆ ಗೌರವಧನದ ರೀತಿ ಇದೆ. ಅದನ್ನು ಕನಿಷ್ಠ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳುವ ವೈದ್ಯರ ವೇತನಕ್ಕೆ ಸರಿಸಮನಾಗಿ ಹೆಚ್ಚಿಸುವ ಪ್ರಯತ್ನ ನಡೆದಿದ್ದು, ಈ ಸಂಬಂಧದ ಪ್ರಸ್ತಾವನೆಯನ್ನು ಹಣಕಾಸು ಇಲಾಖೆಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಜನೌಷಧಿ ಕೇಂದ್ರ ಮುಚ್ಚಿಸಿಲ್ಲ: ರಾಜ್ಯದಲ್ಲಿ ಜನೌಷಧಿ ಕೇಂದ್ರಗಳನ್ನು ಮುಚ್ಚಿಸಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಜನಸಾಮಾನ್ಯರಿಗೆ ಉಚಿತ ಔಷಧಿಗಳನ್ನು ನಿರಾಕರಿಸುವುದನ್ನು ತಡೆಯಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರಿಗೆ ರಾಜ್ಯದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪತ್ರ ಬರೆದು ಸ್ಪಷ್ಟನೆ ನೀಡಿದ್ದಾರೆ. ಜನೌಷಧಿ ಕೇಂದ್ರಗಳನ್ನು ತೆರವುಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಅವರು ಪತ್ರ ಬರೆದಿದ್ದರು.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ರಾಜ್ಯದಲ್ಲಿ 1417 ಕ್ಕೂ ಹೆಚ್ಚು ಜನೌಷಧಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಕರ್ನಾಟಕ ದೇಶದಲ್ಲಿಯೇ ಅಗ್ರಸ್ಥಾನದಲ್ಲಿದೆ. ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಔಷಧಿಗಳು ಲಭ್ಯವಾಗುವಂತೆ ಮಾಡುವ ನಿಮ್ಮ ಕಾಳಜಿಯನ್ನು ನಾನು ಶ್ಲಾಘಿಸುತ್ತೇನೆ. ಕರ್ನಾಟಕ ಸರ್ಕಾರವು ಎಲ್ಲಾ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಅಗತ್ಯ ಔಷಧಗಳ ಪಟ್ಟಿಯ (EML) ಪ್ರಕಾರ ಎಲ್ಲಾ ಅಗತ್ಯ ಔಷಧಿಗಳನ್ನು ಉಚಿತವಾಗಿ ಪೂರೈಸುತ್ತಿದೆ. ಹೀಗಾಗಿ ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಮಾತ್ರ ಜನೌಷಧಿ ಕೇಂದ್ರಗಳನ್ನ ನಿರ್ಬಂಧಿಸಲು ನಿರ್ಧರಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಇದು ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳನ್ನು ಪಡೆಯುವ ಬಡ ಮತ್ತು ಹಿಂದುಳಿದ ರೋಗಿಗಳಿಗೆ ಅನುಕೂಲಕರವಾಗುತ್ತದೆ. ಸರ್ಕಾರಿ ಆಸ್ಪತ್ರೆಗಳ ಆವರಣಗಳ ಹೊರಗೆ ಜನೌಷಧಿ ಕೇಂದ್ರಗಳ ಕಾರ್ಯನಿರ್ವಹಣೆಯನ್ನು ನಿರ್ಬಂಧಿಸುವುದಿಲ್ಲ. ರಾಜ್ಯದಲ್ಲಿ 1417 ಜನೌಷಧಿ ಕೇಂದ್ರಗಳಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ 184 ಜನೌಷಧಿ ಕೇಂದ್ರಗಳಿವೆ. ಉಳಿದವು ಸರ್ಕಾರಿ ಆಸ್ಪತ್ರೆಗಳ ಆವರಣದ ಹೊರಗೆ ಕಾರ್ಯನಿರ್ವಹಿಸುತ್ತಿವೆ. ಅವುಗಳಿಗೆ ಯಾವುದೇ ಸಮಸ್ಯೆಯಿಲ್ಲ ಎಂದು ಹೇಳಿದ್ದಾರೆ.
