ಮಂಗಳೂರಿನಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಐಟಿ ಪಾರ್ಕ್‌ ವಾಣಿಜ್ಯ ಕಚೇರಿ ನಿರ್ಮಾಣಕ್ಕೆ ಈಗಾಗಲೇ ಟೆಂಡರ್‌ ಆಹ್ವಾನಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ಸುವರ್ಣ ವಿಧಾನಸಭೆ (ಡಿ.21): ಮಂಗಳೂರಿನಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಐಟಿ ಪಾರ್ಕ್‌ ವಾಣಿಜ್ಯ ಕಚೇರಿ ನಿರ್ಮಾಣಕ್ಕೆ ಈಗಾಗಲೇ ಟೆಂಡರ್‌ ಆಹ್ವಾನಿಸಲಾಗಿದೆ. ಐಟಿ ಪಾರ್ಕ್‌ ವಿಚಾರವಾಗಿ ಸಮಸ್ಯೆಯಿದ್ದರೆ ಆ ಕುರಿತು ಸ್ಥಳೀಯ ಉದ್ಯಮಿಗಳು, ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಟೆಂಡರ್‌ ಮಾರ್ಗಸೂಚಿ ಬದಲಾವಣೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು. ಬಿಜೆಪಿ ಶಾಸಕ ಡಾ.ವೈ.ಭರತ್‌ ಶೆಟ್ಟಿ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್‌, ಮಂಗಳೂರು, ಉಡುಪಿ ಹಾಗೂ ಮಣಿಪಾಲ ನಗರಗಳನ್ನು ಕೇಂದ್ರವಾಗಿಸಿಕೊಂಡು ಐಟಿ-ಬಿಟಿ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆ ಹೆಚ್ಚಿಸಲು ಸರ್ಕಾರ ಮುಂದಡಿ ಇಟ್ಟಿದೆ.

ಆ ಹಿನ್ನೆಲೆಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಐಟಿ ಉದ್ಯಮಿಗಳು, ಶಿಕ್ಷಣ ಕ್ಷೇತ್ರದ ಪ್ರಮುಖರ, ಕ್ರೆಡಾಯ್‌ ಸೇರಿ ಇನ್ನಿತರ ಭಾಗೀದಾರರೊಂದಿಗೆ ಚರ್ಚಿಸಿ ರೂಪುರೇಷೆ ಸಿದ್ಧಪಡಿಸಲಾಗಿದೆ. ಅದರ ಅನುಸಾರ ಟೆಕ್‌ ಪಾರ್ಕ್‌ನ ವಾಣಿಜ್ಯ ಕಚೇರಿ ನಿರ್ಮಿಸಲು ಟೆಂಡರ್‌ ಪ್ರಕ್ರಿಯೆ ನಡೆಸಲಾಗಿದೆ. ಅಲ್ಲದೆ, ಐಟಿ ಪಾರ್ಕ್‌ನಲ್ಲಿ 30 ವರ್ಷದ ಅವಧಿಗೆ ಗುತ್ತಿಗೆ ನೀಡಲಾಗುತ್ತಿದೆ. ಆ ಅವಧಿ ವಿಸ್ತರಣೆಗೂ ಅವಕಾಶವಿದೆ. ಇನ್ನು, ಐಟಿ ಪಾರ್ಕ್‌ಗೆ ಸಂಬಂಧಿಸಿ ಯಾವುದೇ ಸಮಸ್ಯೆಗಳಿದ್ದರೂ ಅದನ್ನು ಚರ್ಚಿಸಿ ನಿವಾರಿಸಲಾಗುವುದು ಎಂದರು.

ಅನಧಿಕೃತ ಬಡಾವಣೆ ಮಾಲೀಕತ್ವ ಗೊಂದಲಕ್ಕೆ ಪರಿಹಾರ

ಅನಧಿಕೃತ ಬಡಾವಣೆಗಳ ಮಾಲೀಕತ್ವ ಸಮಸ್ಯೆ ನಿವಾರಣೆಗೆ ಕಂದಾಯ ಇಲಾಖೆಯೊಂದಿಗೆ ಚರ್ಚೆ ನಡೆಸಿ ಸೂಕ್ತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಕಾಂಗ್ರೆಸ್ ಸದಸ್ಯ ಜೆ.ಎನ್‌.ಗಣೇಶ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್‌ ಖರ್ಗೆ, ಅನಧಿಕೃತ ಖಾಸಗಿ ಬಡಾವಣೆಗಳ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಸಾಕಷ್ಟು ಗೊಂದಲಗಳಿವೆ. ಆ ಸಮಸ್ಯೆ ಪರಿಹರಿಸಲು ಕಂದಾಯ ಇಲಾಖೆ ಸಹಕಾರ ಬೇಕಿದೆ. ಅದಕ್ಕಾಗಿ ಕಂದಾಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಜಂಟಿಯಾಗಿ ಸಭೆ ನಡೆಸಿ ಪರಿಹಾರ ಕಂಡುಕೊಳ್ಳಬೇಕಿದೆ. ಈ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರೊಂದಿಗೆ ಮಾತುಕತೆ ನಡೆಸಲಾಗುವುದು. ಇನ್ನು, ಅನಧಿಕೃತ ಬಡಾವಣೆಗಳಲ್ಲಿನ ನಿವೇಶನಗಳಿಗೆ ಇ-ಸ್ವತ್ತು ನೀಡುವ ಪ್ರಕ್ರಿಯೆ ಆರಂಭಿಸಲಾಗಿದ್ದು, ಅದರಿಂದ ಒಂದು ಕೋಟಿ ಆಸ್ತಿಗಳು ತೆರಿಗೆ ವ್ಯಾಪ್ತಿಗೆ ವರಲಿದೆ ಎಂದು ವಿವರಿಸಿದರು.