ಚುನಾವಣಾ ವೇಳಾಪಟ್ಟಿ ಘೋಷಣೆಯಾದ ಬಳಿಕವೇ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುವ ಉದ್ದೇಶ ಹೊಂದಿದ್ದು, ಇದಕ್ಕೆ ಪೂರಕವಾಗಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಔಪಚಾರಿಕವಾಗಿ ಸಮಾಲೋಚನೆ ನಡೆಯಬಹುದು.
ಬೆಂಗಳೂರು(ಮಾ.26): ರಾಷ್ಟ್ರೀಯ ಬಿಜೆಪಿಯ ಪ್ರಭಾವಿ ನಾಯಕರೂ ಆಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಭಾನುವಾರ ರಾತ್ರಿ ರಾಜ್ಯ ಬಿಜೆಪಿಯ ಹಿರಿಯ ನಾಯಕರನ್ನು ಒಳಗೊಂಡ ಕೋರ್ ಕಮಿಟಿ ಸಭೆ ನಡೆಯಲಿದ್ದು, ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸ್ಥೂಲವಾಗಿ ಚರ್ಚೆ ನಡೆಯುವ ಸಾಧ್ಯತೆಯಿದೆ.
ಚುನಾವಣಾ ವೇಳಾಪಟ್ಟಿ ಘೋಷಣೆಯಾದ ಬಳಿಕವೇ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುವ ಉದ್ದೇಶ ಹೊಂದಿದ್ದು, ಇದಕ್ಕೆ ಪೂರಕವಾಗಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಔಪಚಾರಿಕವಾಗಿ ಸಮಾಲೋಚನೆ ನಡೆಯಬಹುದು ಎಂದು ಮೂಲಗಳು ತಿಳಿಸಿವೆ.
ಬಿಎಸ್‌ವೈ ಮನೆಯಲ್ಲಿ “ವರುಣಾ” ವ್ಯೂಹ ಹೆಣೆದರಾ ಕೇಸರಿ ಚಾಣಕ್ಯ..?
ಈಗಾಗಲೇ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ತಮ್ಮ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಪ್ರಕಟಗೊಳಿಸಿರುವುದರಿಂದ ತಮ್ಮ ಪಕ್ಷ ಯಾವ ರೀತಿಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು? ಇದುವರೆಗೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಸಿರುವ ಪಕ್ಷದ ವಿವಿಧ ಸಮೀಕ್ಷೆಗಳ ಆಧಾರದ ಮೇಲೆ ಎಂಥವರಿಗೆ ಆದ್ಯತೆ ನೀಡಬೇಕು ಎಂಬುದರ ಬಗ್ಗೆ ಚರ್ಚೆ ನಡೆಯಲಿದೆ. ಮುಂದೆ ವೇಳಾಪಟ್ಟಿಘೋಷಣೆಯಾದ ಮೇಲೆ ಮತ್ತೊಮ್ಮೆ ಕೋರ್ ಕಮಿಟಿ ಸಭೆ ಸೇರಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸಬಹುದು ಎನ್ನಲಾಗಿದೆ.
ಭಾನುವಾರ ರಾತ್ರಿ ತಾಜ್ ವೆಸ್ಟೆಂಡ್ ಹೋಟೆಲ್‌ನಲ್ಲಿ ಈ ಕೋರ್ ಕಮಿಟಿ ಸಭೆ ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಮತ್ತಿತರರು ಉಪಸ್ಥಿತರಿರಲಿದ್ದಾರೆ.
