ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಪಕ್ಷದಲ್ಲಿ ಗೊಂದಲ ಇದೆ. ಈ ಗೊಂದಲ ಸರಿಪಡಿಸುವ ಕೆಲಸವನ್ನು ಹೈಕಮಾಂಡ್ ಮಾಡಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಬೆಳಗಾವಿ/ಹುಬ್ಬಳ್ಳಿ (ಅ.07): ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಪಕ್ಷದಲ್ಲಿ ಗೊಂದಲ ಇದೆ. ಈ ಗೊಂದಲ ಸರಿಪಡಿಸುವ ಕೆಲಸವನ್ನು ಹೈಕಮಾಂಡ್ ಮಾಡಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಿಎಂ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿ, ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಪಕ್ಷದಲ್ಲಿ ಗೊಂದಲ ಇದೆ. ಆದರೆ, ಸ್ವತಃ ಸಿದ್ದರಾಮಯ್ಯನವರೇ ಎರಡೂವರೆ ವರ್ಷ ಸಿಎಂ ಆಗಿ ಮುಂದುವರಿಯುತ್ತೇನೆ ಎಂದು ಸ್ಪಷ್ಟಪಡಿಸಿದ್ದು, ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಅಂತಿಮವಾಗಿ ಹೈಕಮಾಂಡ್ ಈ ಗೊಂದಲ ನಿವಾರಿಸುವ ಕೆಲಸ ಮಾಡಬೇಕು ಎಂದು ಹೇಳಿದರು.
‘ಖಾಲಿ ಇರುವ 2 ಸಚಿವ ಸ್ಥಾನವನ್ನು ವಾಲ್ಮೀಕಿ ಸಮುದಾಯಕ್ಕೇ ಕೊಡಬೇಕು’
ಸಂಪುಟ ಪುನಾರಚನೆ ವಿಚಾರವಾಗಿ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಸಚಿವ ಸಂಪುಟದಲ್ಲಿ ಖಾಲಿಯಿರುವ 2 ಹುದ್ದೆಗಳನ್ನು ವಾಲ್ಮೀಕಿ ಸಮಾಜಕ್ಕೆ ನೀಡಬೇಕೆಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗುವುದು. ಬೆಂಗಳೂರಿನಲ್ಲಿ ಮಂಗಳವಾರ ವಾಲ್ಮೀಕಿ ಜಯಂತಿಯಿದ್ದು, ಆ ವೇಳೆ ಸಂಪುಟದಲ್ಲಿ ಖಾಲಿಯಿರುವ ಎರಡು ಸ್ಥಾನಗಳನ್ನು ವಾಲ್ಮೀಕಿ ಸಮಾಜಕ್ಕೆ ನೀಡಬೇಕೆಂದು ಒತ್ತಾಯಿಸಲಾಗುವುದು ಎಂದರು. ಡಿಸಿಸಿ ಬ್ಯಾಂಕ್ ಚುನಾವಣೆ ಕುರಿತು ಪ್ರತಿಕ್ರಿಯಿಸಿ, ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ರಾಹುಲ್ ಜಾರಕಿಹೊಳಿ ಸ್ಪರ್ಧಿಸುವ ಬಗ್ಗೆ ಇನ್ನೂ ಚರ್ಚೆಯಲ್ಲಿದೆ.
ಎಲ್ಲ ನಾಯಕರೊಂದಿಗೆ ಚರ್ಚಿಸಿ 10 ದಿನದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಜಾತಿ ಜನಗಣತಿಯ 60 ಪ್ರಶ್ನಾವಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸುಸ್ತಾಗಿ ಸರಳೀಕರಣ ಮಾಡಲು ಹೇಳಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಇದಕ್ಕೆ ನನ್ನ ಸಹಮತ ಇದೆ. ಪ್ರಶ್ನೆಗಳನ್ನು ಕಡಿಮೆ ಮಾಡಬೇಕು. ಅಲ್ಲದೇ ಜನರು ತಮಗೆ ಇಷ್ಟ ಇರುವ ಪ್ರಶ್ನೆಗೆ ಮಾತ್ರ ಉತ್ತರಿಸಬಹುದಾಗಿದೆ. ಪ್ರಶ್ನಾವಳಿ ತಯಾರಿಸಿದ್ದು ಆಯೋಗದವರು. ಅದು ಸ್ವತಂತ್ರವಾಗಿ ಕಾರ್ಯ ನಿರ್ವಹಿಸುತ್ತದೆ. ಅವರು ಸರ್ಕಾರಕ್ಕೆ ಎಲ್ಲವನ್ನೂ ತಿಳಿಸಬೇಕೆಂದಿಲ್ಲ ಎಂದರು.
