ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಭ್ರಷ್ಟಾಚಾರ ನಡೆದಿರುವ ಕುರಿತು ಈಗಾಗಲೇ ತನಿಖೆ ನಡೆದಿದ್ದು, ವರದಿ ಬಂದ ತಕ್ಷಣ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
ಗಂಗಾವತಿ (ಅ.01): ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಭ್ರಷ್ಟಾಚಾರ ನಡೆದಿರುವ ಕುರಿತು ಈಗಾಗಲೇ ತನಿಖೆ ನಡೆದಿದ್ದು, ವರದಿ ಬಂದ ತಕ್ಷಣ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಕಳೆದ ಎರಡು ವರ್ಷಗಳಿಂದ ಸಾಹಿತಿಗಳು, ಸಾಹಿತ್ಯ ಪರಿಷತ್‌ನವರು ದೂರು ನೀಡಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳಿಗೆ ಹಾಗೂ ನನಗೂ ದೂರು ನೀಡಿದ್ದು, ಇದರ ತನಿಖೆ ಬಗ್ಗೆ ಸಹಕಾರ ಇಲಾಖೆಯಿಂದ ಸಮಿತಿ ರಚನೆ ಮಾಡಲಾಗಿದೆ. ಇನ್ನು ಎರಡು ಮೂರು ದಿನಗಳಲ್ಲಿ ವರದಿ ಬರುತ್ತದೆ.
ವರದಿ ಬಂದ ಬಳಿಕ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಈ ಹಿಂದೆ ಹಾವೇರಿ ಮತ್ತು ಮಂಡ್ಯದಲ್ಲಿ ಜರುಗಿದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹಣ ದುರ್ಬಳಕೆಯಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತನವರೇ ದೂರು ನೀಡಿದ್ದಾರೆ. ಈ ಬಗ್ಗೆ ಸಾಹಿತಿಗಳು ಪ್ರತಿಭಟನೆ ನಡೆಸಿದ್ದಾರೆ. ಇದನ್ನು ಸರ್ಕಾರ ಗಂಭೀರವಾಗಿ ಗಣನಿಗೆ ತೆಗೆದುಕೊಂಡಿದೆ. ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುತ್ತದೆ. ಆಡಳಿತಾಧಿಕಾರಿ ನೇಮಕ ಕುರಿತು ವಿಚಾರ ನಡೆಸಲಾಗುತ್ತದೆ ಎಂದರು.
ಸಿಎಂ ಕಾರ್ಯಕ್ರಮಕ್ಕೆ ಹೆಚ್ಚಿನ ಜನರನ್ನು ಸೇರಿಸಿ
ಅ. 6ರಂದು ಕೊಪ್ಪಳ ಜಿಲ್ಲೆಯ ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಆಗಮಿಸಲಿರುವ ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಹೆಚ್ಚಿನ ಜನರನ್ನು ಸೇರಿಸಬೇಕು ಎಂದು ಹೇಳಿದರು. ಜನರ ಅಭಿವೃದ್ಧಿಗಾಗಿ ನಮ್ಮ ಸರ್ಕಾರ ಕಳೆದ ಎರಡೂವರೆ ವರ್ಷಗಳ ಅವಧಿಯಲ್ಲಿ ಜನಪರ ಕಾರ್ಯಕ್ರಮಗಳನ್ನು ರೂಪಿಸಿದ್ದು, ಶಕ್ತಿಯೋಜನೆ, ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಯನ್ನು ಜಾರಿಗೊಳಿಸಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನೇರವಾಗಿ ಗ್ಯಾರಂಟಿ ಯೋಜನೆಗಳ ಲಾಭ ಸಿಗುವಂತೆ ಮಾಡಿದೆ.
ಇದರ ಜತೆಗೆ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ದಿಶೆಯಲ್ಲಿ ಕೊಪ್ಪಳ ಜಿಲ್ಲೆಯ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸಲು ಮುಖ್ಯಮಂತ್ರಿ ಕೊಪ್ಪಳಕ್ಕೆ ಆಗಮಿಸುತ್ತಿದ್ದು, ಈ ಕಾರ್ಯಕ್ರಮ ಅಚ್ಚುಕಟ್ಟಾಗಿ ನೆರವೇರಿಸಲು ಈಗಾಗಲೇ ರಚಿಸಲ್ಪಟ್ಟ ಸಮಿತಿಗಳು ತಮಗೆ ವಹಿಸಲಾಗಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರಸ್ತುತ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಹಾನಿಯಾದ ಬೆಳೆಗಳಿಗೆ ತಕ್ಷಣ ಪರಿಹಾರ ನೀಡಲು ಆಯಾ ತಾಲೂಕುಗಳ ತಹಸೀಲ್ದಾರರು ಮತ್ತು ಸಂಬಂಧಪಟ್ಟ ಇಲಾಖಾಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕೈಗೊಳ್ಳಲಾಗುತ್ತಿರುವ ಕರ್ನಾಟಕ ರಾಜ್ಯ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಯನ್ನು ಕೊಪ್ಪಳ ಜಿಲ್ಲೆಯಲ್ಲಿ ಅ. 5ರೊಳಗೆ ಪೂರ್ಣಗೊಳಿಸುವಂತೆ ಗಣತಿದಾರರಿಗೆ ಸೂಕ್ತ ನಿರ್ದೇಶನ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
