ಕೋಲಾರ (ಜ.27): ನನಗೆ ನೀಡಿರುವ ಖಾತೆ ತೃಪ್ತಿ ತಂದಿದೆ, ರಾಜ್ಯದ ಯಾವ ಜಿಲ್ಲೆಯ ಉಸ್ತುವಾರಿ ನೀಡಿದರೂ ಕೆಲಸ ಮಾಡಲು ಸಿದ್ಧನಿದ್ದೇನೆ ಎಂದು ಪ್ರವಾಸೋದ್ಯಮ ಮತ್ತು ಪರಿಸರ ಇಲಾಖೆ ಸಚಿವ ಸಿ.ಪಿ.ಯೋಗೇಶ್ವರ್‌ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು ಒತ್ತು ನೀಡುತ್ತೇನೆ. ಅಭಿವೃದ್ಧಿ ವಿಚಾರದಲ್ಲಿ ಸ್ಥಳೀಯ ಜನಪ್ರತಿನಿಧಿಗಳನ್ನು, ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಕೋಲಾರ ಜಿಲ್ಲೆ ಉಸ್ತುವಾರಿ ಸಚಿವರ ಜವಾಬ್ದಾರಿ ನೀಡಿದರೆ ನಿಭಾಯಿಸುತ್ತೀರಾ ಎಂಬ ಪ್ರಶ್ನೆಗೆ, ನನಗೆ ಕೋಲಾರ ಆದರೇನು, ರಾಮನಗರ ಆದರೇನು ಎರಡೂ ಜಿಲ್ಲೆಗಳು ಕರ್ನಾಟಕದಲ್ಲೇ ಇವೆ. ಕೋಲಾರ ಜವಾಬ್ದಾರಿ ವಹಿಸಿದರೆ ಸಮರ್ಪಕವಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

'ನಾನು ಮಂಡ್ಯದವನು, ಅವರು ರಾಮನಗರದವರು : ಅವರಿಗೆ ಉಸ್ತುವಾರಿ ಕೊಡಲ್ಲ' .

ರೈತರ  ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡಲು ಅಡ್ಡಿಯಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪ್ರತಿಭಟನೆ ನಡೆಸುವುದು ಬೇಡ ಎಂದು ಸಲಹೆ ನೀಡಿದೆವು.   ವಾಹನ, ಜನ ಸಂಚಾರಕ್ಕೆ ಅಡಚಣೆ ಉಂಟಾಗುವುದನ್ನು ತಪ್ಪಿಸಲು ಮನವೊಲಿಸುವ ಕೆಲಸ ಮಾಡಲಾಗಿದೆ ಎಂದು ಹೇಳಿದರು.

ಖಾತೆ ಹಂಚಿಕೆ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ, ಸಚಿವ ಸಂಪುಟವನ್ನು ಸರಿದೂಗಿಸಲು ಖಾತೆಗಳನ್ನು ಬದಲಾವಣೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದರು. ಇದರಿಂದ ನನಗೇನು ಅಸಮಾಧಾನವಾಗಿಲ್ಲ. ಬೇರೊಬ್ಬರ ಬಗ್ಗೆ ಮಾತನಾಡಲು ಹೋಗುವುದಿಲ್ಲ ಎಂದು ತಿಳಿಸಿದರು.