ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಅಸಲಿಮುಖ ಮತ್ತೊಮ್ಮೆ ಕಳಚಿ ಬಿದ್ದಿದೆ: ಅನಿತಾ ಕುಮಾರಸ್ವಾಮಿ ಟೀಕೆ
ಸಣ್ಣ ಮಳೆಗೆ ಕೆರೆ, ಚರಂಡಿಯಂತೆ ಆಗಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನ ಅಸಲಿ ಮುಖ ಮತ್ತೊಮ್ಮೆ ಕಳಚಿ ಬಿದ್ದಿದೆ. ಈ ಹೆದ್ದಾರಿ ಜನರ ಪಾಲಿಗೆ ಹೆಮ್ಮಾರಿ ಆಗಿದೆ.
ರಾಮನಗರ (ಮಾ.18): ಸಣ್ಣ ಮಳೆಗೆ ಕೆರೆ, ಚರಂಡಿಯಂತೆ ಆಗಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನ ಅಸಲಿ ಮುಖ ಮತ್ತೊಮ್ಮೆ ಕಳಚಿ ಬಿದ್ದಿದೆ. ಈ ಹೆದ್ದಾರಿ ಜನರ ಪಾಲಿಗೆ ಹೆಮ್ಮಾರಿ ಆಗಿದೆ. ಸವೀರ್‍ಸ್ ರಸ್ತೆ ಸೇರಿದಂತೆ ಎಲ್ಲ ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸುವವರೆಗೆ ಟೋಲ್ ಸಂಗ್ರಹ ನಿಲ್ಲಿಸಬೇಕು ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ನೂತನ ಹೆದ್ದಾರಿಯಲ್ಲಿ ಸ್ಥಳೀಯರು ಟೋಲ್ ರಹಿತವಾಗಿ ಭೂಮಿ ಕಳೆದುಕೊಂಡ ಸ್ಥಳೀಯರು ಮುಕ್ತವಾಗಿ ಸಂಚಾರ ಮಾಡಲು ಅವಕಾಶ ಕಲಿಸಿಕೊಡಬೇಕು.
ಡಬಲ್ ಎಂಜಿನ್ ರಾಜ್ಯ ಬಿಜೆಪಿ, ಕೇಂದ್ರ ಬಿಜೆಪಿ ಸರ್ಕಾರಗಳು, ಈ ರಸ್ತೆ ನಮ್ಮ ಹೆಮ್ಮೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ಬೆಂ-ಮೈ ಎಕ್ಸ್‌ಪ್ರೆಸ್ ಹೆದ್ದಾರಿಯ ಅಸಲಿಮುಖ ಮತ್ತೊಮ್ಮೆ ಕಳಚಿ ಬಿದ್ದಿದೆ. ಬೆಳಗಿನಜಾವ ಸುರಿದ ಒಂದು ಸಣ್ಣಮಳೆಗೆ ಅದು ಕೆರೆಯಾಗಿ, ಚರಂಡಿಯಾಗಿ ಉಕ್ಕಿ ಹರಿದಿದೆ ಎಂದು ಅಚ್ಚರಿ ವ್ಯಕ್ತಪಡಿಸಿರುವ ಅವರು, ಹೆದ್ದಾರಿಗೆ ಎಕ್ಸ್ ಪ್ರೆಸ್ ಹೆಮ್ಮಾರಿ ಎಂದು ಹ್ಯಾಷ್‌ಟ್ಯಾಗ್ ಹಾಕಿ ಸರ್ಕಾರಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ತಾಯಿ ಸ್ಥಾನದಲ್ಲಿ ನಿಂತು ಕೆಲಸ ಮಾಡುವ ಡಬಲ್ ಎಂಜಿನ್ ಸರ್ಕಾರ: ಸಚಿವ ಕೋಟ ಶ್ರೀನಿವಾಸ ಪೂಜಾರಿ
ಕಳೆದ ವರ್ಷ ಅಬ್ಬರಿಸಿದ ಮಹಾಮಳೆಗೆ ಈ ಎಕ್ಸ್‌ಪ್ರೆಸ್ ಹೆದ್ದಾರಿ ತತ್ತರಿಸಿತ್ತು. ಕಾಮಗಾರಿಗಳು ಮುಗಿದಿರಲಿಲ್ಲ ಎಂದು ಹೇಳಿ ಗುತ್ತಿಗೆದಾರರು ಆಗ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಂಡಿದ್ದರು. ಈಗ ವರ್ಷ ಮುಗಿಯುವ ಮೊದಲೇ ಮತ್ತೆ ಬಂದ ಸಣ್ಣಮಳೆಗೆ ಸಾವಿರಾರು ಕೋಟಿ ವೆಚ್ಚದ ಈ ಹೆದ್ದಾರಿ ವಾಹನ ಸವಾರರ ಪಾಲಿಗೆ ಸಾವಿನ ಮಾರಿಯಾಗಿ ಮಾರ್ಪಟ್ಟಿದೆ. ಅವೈಜ್ಞಾನಿಕವಾದ ಈ ಯೋಜನೆಯ ಕಾಮಗಾರಿಗಳನ್ನು ಪೂರ್ಣಗೊಳಿಸಿದೆಯೇ, ತರಾತುರಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆ ಮಾಡಿಸಿದ ಈ ‘ಚುನಾವಣಾ ಗಿಮಕ್’ ಬಗ್ಗೆ ಜನರು ಹಾದಿಬೀದಿಯಲ್ಲಿ ಆಡಿಕೊಳ್ಳುತ್ತಿದ್ದಾರೆ.
ವಾಹನ ಸವಾರರು ಶಪಿಸುತ್ತಿದ್ದಾರೆ. ಇದಕ್ಕೆ ಉತ್ತರದಾಯಿಗಳು ಯಾರು? ಎಂದು ಅನಿತಾ ಅವರು ಪ್ರಶ್ನಿಸಿದ್ದಾರೆ. ಸರ್ವಿಸ್ ರಸ್ತೆಯೂ ಸೇರಿದಂತೆ ಈ ಹೆದ್ದಾರಿ ಎಲ್ಲಾ ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಅದುವರೆಗೂ ಟೋಲ್ ಸಂಗ್ರಹ ನಿಲ್ಲಿಸಬೇಕು. ಈ ರಸ್ತೆಗಾಗಿ ಭೂಮಿ ಕಳೆದುಕೊಂಡಿರುವ ರಾಮನಗರ, ಮಂಡ್ಯ ಸೇರಿ ಆ ಭಾಗದ ಎಲ್ಲ ಜನರು ಮುಕ್ತವಾಗಿ ಸಂಚರಿಸಲು ಅವಕಾಶ ಮಾಡಿಕೊಡಬೇಕು ಎಂದು ಅನಿತಾ ಒತ್ತಾಯಿಸಿದ್ದಾರೆ.
ಗ್ರಾಮೀಣ ಮಕ್ಕಳಿಗೆ ಉನ್ನತ ವ್ಯಾಸಂಗ ದೊರೆಯಲಿ: ಕ್ಷೇತ್ರದಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳಿಗೆ ವೈದ್ಯಕೀಯ ಸೇರಿದಂತೆ ಉನ್ನತ ವ್ಯಾಸಂಗ ದೊರೆಯಬೇಕು ಎಂಬ ನಿಟ್ಟಿನಲ್ಲಿ ಪರಿಶ್ರಮ ಪಟ್ಟು ಸುಸಜ್ಜಿತ ವಸತಿ ಶಾಲೆ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದರು. ತಾಲೂಕಿನ ಕೈಲಾಂಚ ಹೋಬಳಿಯ ಗುನ್ನೂರು ಗ್ರಾಮದಲ್ಲಿ 18 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲಾ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಈ ಶಾಲೆಯಲ್ಲಿ 250 ಮಕ್ಕಳು ಶಿಕ್ಷಣ ಪಡೆಯಬಹುದಾಗಿದೆ.
ಮಕ್ಕಳ ಪಾಲಕರು ವಸತಿ ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸಿ ಅವರ ಉನ್ನತ ವಿದ್ಯಾಭ್ಯಾಸಕ್ಕೆ ಸಹಕಾರ ನೀಡಬೇಕು. ಗ್ರಾಮೀಣ ಪ್ರದೇಶದ ಮಕ್ಕಳಿಗೆ ವೈದ್ಯಕೀಯ ಸೇರಿದಂತೆ ಉನ್ನತ ವ್ಯಾಸಂಗ ದೊರೆಯಬೇಕು ಎಂಬ ನಿಟ್ಟಿನಲ್ಲಿ ಶ್ರಮಪಟ್ಟು ಸುಸಜ್ಜಿತವಾಗಿ ವಸತಿ ಶಾಲೆ ನಿರ್ಮಾಣ ಮಾಡಲಾಗಿದೆ. ವಸತಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ನೀಡಲಾಗುತ್ತಿದೆ. ಆಂಗ್ಲ ಮಾಧ್ಯಮ ಇರುವುದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾಗಿದೆ. ಅತ್ಯಾಧುನಿಕ ಸೌಲಭ್ಯ ವಸತಿ ಶಾಲೆಗೆ ಒದಗಿಸಲಾಗಿದೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಸತಿ ಶಾಲೆಗೆ ಅನುಮೋದನೆ ನೀಡಿದರು. ಅತ್ಯಲ್ಪ ಅವಧಿಯಲ್ಲೇ ವಸತಿ ಶಾಲೆ ಉದ್ಘಾಟನೆ ಕಂಡಿದೆ ಎಂದು ತಿಳಿಸಿದರು.
ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಧೂಳಿಪಟ ಗ್ಯಾರಂಟಿ: ಸಿ.ಟಿ.ರವಿ
ಅಭಿವೃದ್ಧಿ ವಿಚಾರದಲ್ಲಿ ನಮ್ಮನ್ನು ಯಾರೂ ಟೀಕಿಸಲು ಸಾಧ್ಯವಿಲ್ಲ. ತಮ್ಮ ಅವಧಿಯಲ್ಲಿ ಗರಿಷ್ಠ ಪ್ರಮಾಣದಲ್ಲಿ ಕೆಲಸಗಳನ್ನು ಮಾಡಿರುವ ತೃಪ್ತಿ ಇದೆ. ನಾವು ಕೆಲಸ ಮಾಡುತ್ತೇವೆ. ಹೆಚ್ಚು ಪ್ರಚಾರ ಪಡೆಯಲು ಹೋಗುವುದಿಲ್ಲ. ಅದರ ಅಗತ್ಯವೂ ಇಲ್ಲ. ನಾವು ಮಾಡಿದ ಕೆಲಸಗಳ ಬಗ್ಗೆ ಜನರೇ ಮಾತನಾಡುತ್ತಿದ್ದಾರೆ ಎಂದು ವಿರೋಧ ಪಕ್ಷಗಳಿಗೆ ಮಾತಿನಲ್ಲೇ ಟಾಂಗ್ ನೀಡಿದರು. ಕೋವಿಡ್ ಕಾರಣ ಒಂದೆರಡು ವರ್ಷ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಅನುದಾನ ಕೊರತೆಯಿಂದ ಸಾಧ್ಯವಾಗಿರಲಿಲ್ಲ ನಂತರದ ದಿನಗಳಲ್ಲಿ ಅದಕ್ಕೆ ವೇಗ ನೀಡಿ ಸರ್ಕಾರದಿಂದ ವಿವಿಧ ಹಂತಗಳಲ್ಲಿ ಅನುದಾನ ತಂದು ಕ್ಷೇತ್ರದ ಸಮಗ್ರ ಅಭಿವೃದ್ಧಿ ಮಾಡಲಾಗಿದೆ. ಜನ ಸೇವೆ ಮಾಡಿರುವ ತೃಪ್ತಿ ನನಗಿದೆ.