ಬೆಂಗಳೂರು(ಆ.21): ಕಾಂಗ್ರೆಸ್‌ ‘ಜನಧ್ವನಿ’ ಘೋಷಣೆಯಡಿ ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವ ಮೂಲಕ ರಾಜ್ಯದ ಜನತೆಯ ಹಾದಿ ತಪ್ಪಿಸುವ ಕಾರ್ಯ ಮಾಡುತ್ತಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿಯೂ ವಿಧಾನ ಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ದೂರಿದ್ದಾರೆ.

ಕಾಂಗ್ರೆಸ್‌ ಭೂ-ಸುಧಾರಣೆ, ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆ, ಕೋವಿಡ್‌-19, ನೆರೆ ಸೇರಿದಂತೆ ಅನೇಕ ವಿಷಯಗಳನ್ನು ಮುಂದಿಟ್ಟುಕೊಂಡು ರಾಜ್ಯಾದ್ಯಂತ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವ ಮೂಲಕ ವಿರೋಧ ಪಕ್ಷವಾಗಿ ಕಾರ್ಯ ನಿರ್ವಹಿಸುವಲ್ಲಿ ಕಾಂಗ್ರೆಸ್‌ ಸಂಪೂರ್ಣ ವಿಫಲವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್‌ಗೆ ಜನರು ಇಲ್ಲ, ಧ್ವನಿಯೂ ಇಲ್ಲವಾಗಿದೆ. ರಾಜ್ಯದ ಜನರ ಹಿತ, ಜನಪರ ಯೋಜನೆಗಳನ್ನು ಸರ್ಕಾರ ಜಾರಿ ಮಾಡುವುದು ಇವರಿಗೆ ಬೇಡವಾಗಿದೆ. ಕೇವಲ ರಾಜಕೀಯ ಲಾಭಕ್ಕಾಗಿ, ವಿರೋಧ ಪಕ್ಷವಾಗಿ ವಿರೋಧಿಸಲೆಂದೇ ಇಂತಹ ಪ್ರತಿಭಟನೆ ಮಾಡುತ್ತಿದ್ದಾರೆ. ಸಂವಿಧಾನದಲ್ಲಿ ಎಲ್ಲರಿಗೂ ಪ್ರತಿಭಟನೆ ಮಾಡುವ ಹಕ್ಕಿದೆ. ಆದರೆ ಸುಳ್ಳು ಪ್ರಚಾರ ಮಾಡಿ, ರಾಜ್ಯದ ಜನತೆಯ ಹಾದಿ ತಪ್ಪಿಸುವ ಕೆಲಸವನ್ನು ಕಾಂಗ್ರೆಸ್‌ ಮಾಡುತ್ತಿರುವುದು ಖಂಡನೀಯ ಎಂದು ಹೇಳಿದ್ದಾರೆ.

ಬಿಜೆಪಿ ಬಗ್ಗೆ ಸಿದ್ದರಾಮಯ್ಯ ಮಾತಾಡೋದು ಬೇಡ: ಸೂಕ್ಷ್ಮವಾಗಿ ಹೇಳಿದ ಗೃಹ ಸಚಿವ

ಪ್ರವಾಹ ಮತ್ತು ಅತಿವೃಷ್ಟಿಯ ಪರಿಹಾರ ಕಾರ್ಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಂಪೂರ್ಣವಾಗಿ ಶ್ರಮಿಸುತ್ತಿದೆ. ಅಲ್ಲದೆ, ಕೋವಿಡ್‌ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಹಗಲಿರುಳು ಶ್ರಮಿಸುತ್ತಿದೆ. ಕಾಂಗ್ರೆಸ್‌ ಮಾತ್ರ ತನ್ನ ರಾಜಕೀಯ ಲಾಭಕ್ಕಾಗಿ ಜನರ ಹಾದಿ ತಪ್ಪಿಸುವ ಕಾರ್ಯ ಮಾಡುತ್ತಿರುವುದು ಖಂಡನೀಯ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.