ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಇಂದು ಮೋದಿ ಸಮಾವೇಶ: ಸಿದ್ಧತೆ ಪರಿಶೀಲಿಸಿದ ವಿಜಯೇಂದ್ರ
ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ಸಮೀಪಿಸುತ್ತಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಎರಡು ಕಡೆ ಪ್ರಚಾರ ನಡೆಸಲಿದ್ದು, ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ. ಚಿಕ್ಕಬಳ್ಳಾಪುರ ಮತ್ತು ರಾಜಧಾನಿ ಬೆಂಗಳೂರಿನಲ್ಲಿ ಸಾರ್ವಜನಿಕ ಸಮಾವೇಶಗಳನ್ನು ಉದ್ದೇಶಿಸಿ ಮೋದಿ ಅವರು ಭಾಷಣ ಮಾಡಲಿದ್ದಾರೆ.
ಬೆಂಗಳೂರು (ಏ.20): ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ಸಮೀಪಿಸುತ್ತಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಎರಡು ಕಡೆ ಪ್ರಚಾರ ನಡೆಸಲಿದ್ದು, ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ. ಚಿಕ್ಕಬಳ್ಳಾಪುರ ಮತ್ತು ರಾಜಧಾನಿ ಬೆಂಗಳೂರಿನಲ್ಲಿ ಸಾರ್ವಜನಿಕ ಸಮಾವೇಶಗಳನ್ನು ಉದ್ದೇಶಿಸಿ ಮೋದಿ ಅವರು ಭಾಷಣ ಮಾಡಲಿದ್ದಾರೆ. ಈ ಎರಡೂ ಸಮಾವೇಶಗಳ ಮೂಲಕ ಒಟ್ಟು ಆರು ಲೋಕಸಭಾ ಕ್ಷೇತ್ರಗಳ ಮತದಾರರ ಮನಸ್ಸು ಗೆಲ್ಲುವ ಪ್ರಯತ್ನವನ್ನು ಪ್ರಧಾನಿ ನಡೆಸಲಿದ್ದಾರೆ.
ಚಿಕ್ಕಬಳ್ಳಾಪುರ ಸಮೀಪದ ಚೊಕ್ಕಹಳ್ಳಿಯಲ್ಲಿ ಸಮಾವೇಶ ಆಯೋಜಿಸಲಾಗಿದ್ದು, ಮಧ್ಯಾಹ್ನ 2 ಗಂಟೆಗೆ ಮೋದಿ ಅವರು ಕೋಲಾರ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ ಮತದಾರರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಎಚ್‌ಡಿಕೆಗೆ 3 ಲಕ್ಷ ಅಂತರದ ಜಯ: ವಿಜಯೇಂದ್ರ
ಬಳಿಕ ಸಂಜೆ 4 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ಮೋದಿ ಭಾಷಣ ಮಾಡಲಿದ್ದು, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ ಮತದಾರರು ಮತ್ತು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.
ಸಿದ್ಧತೆ ಪರಿಶೀಲಿಸಿದ ವಿಜಯೇಂದ್ರ: ಪ್ರಧಾನಿ ಮೋದಿ ಅವರ ಸಮಾವೇಶದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶುಕ್ರವಾರ ಬೆಂಗಳೂರಿನ ಅರಮನೆ ಮೈದಾನಕ್ಕೆ ತೆರಳಿ ಸಿದ್ಧತೆಗಳ ಕೊನೆಯ ಹಂತದ ಪರಿಶೀಲನೆ ನಡೆಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಕಾರ್ಯಕ್ರಮದ ಬಳಿಕ ಬೆಂಗಳೂರಿನಲ್ಲಿ ಕಾರ್ಯಕ್ರಮ ನಿಗದಿಯಾಗಿದೆ. 60 ಸಾವಿರಕ್ಕೂ ಹೆಚ್ಚು ಆಸನಗಳ ವ್ಯವಸ್ಥೆ ಮಾಡಲಾಗಿದೆ ಎಂದರು.
ಗ್ಯಾರಂಟಿ ಬಿಟ್ಟು ಸಿದ್ದರಾಮಯ್ಯ ಸರ್ಕಾರ ಏನ್ಮಾಡಿದೆ: ಮುಖಾಮುಖಿಯಲ್ಲಿ ವಿಜಯೇಂದ್ರ ಹೇಳಿದ್ದೇನು?
ಮೋದಿ ಅವರ ಭೇಟಿಯಿಂದ ಕಾರ್ಯಕರ್ತರು ಮತ್ತು ಮತದಾರರ ಉತ್ಸಾಹ ಇಮ್ಮಡಿಯಾಗಲಿದೆ. ಮಹಿಳೆಯರಿಗೆ ವಿಶೇಷವಾದ ಆಸನ ವ್ಯವಸ್ಥೆ ಮಾಡಲಾಗಿದೆ. 15 ಸಾವಿರ ವಿಶೇಷ ಆಹ್ವಾನಿತರಿಗೆ ಪಾಸ್ ವ್ಯವಸ್ಥೆ ಮಾಡಿದ್ದೇವೆ. ಈ ಕಾರ್ಯಕ್ರಮ ಯಶಸ್ವಿ ಆಗಲಿದ್ದು, ರಾಜ್ಯಕ್ಕೆ ವಿಶೇಷ ಸಂದೇಶ ಲಭಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.