5 ಭರವಸೆಗಳಲ್ಲಿ 4 ಗ್ಯಾರಂಟಿಗಳನ್ನು ಜಾರಿಗೊಳಿಸಿ ನುಡಿದಂತೆ ನಡೆದ ಕಾಂಗ್ರೆಸ್: ಸಂಸದ ಸುರೇಶ್
ಗ್ರಾಮೀಣ ಅಭಿವೃದ್ಧಿ ಉದ್ದೇಶದಿಂದ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದ್ದು, ಅದನ್ನು ಸಮಪರ್ಕವಾಗಿ ಜಾರಿಗೆ ತಂದಲ್ಲಿ ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸನ್ನು ಸಾಕಾರಗೊಳಿಸಬಹುದು ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದರು.
ಚನ್ನಪಟ್ಟಣ (ಸೆ.09): ಗ್ರಾಮೀಣ ಅಭಿವೃದ್ಧಿ ಉದ್ದೇಶದಿಂದ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದ್ದು, ಅದನ್ನು ಸಮಪರ್ಕವಾಗಿ ಜಾರಿಗೆ ತಂದಲ್ಲಿ ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸನ್ನು ಸಾಕಾರಗೊಳಿಸಬಹುದು ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದರು.
ತಾಲೂಕಿನ ಸಿಂಗರಾಜಪುರ, ಭೂಹಳ್ಳಿ, ವಿರುಪಾಕ್ಷಿಪುರ, ಕೋಡಂಬಳ್ಳಿ ಗ್ರಾಮಗಳಲ್ಲಿ ಹಮ್ಮಿಕೊಂಡಿದ್ದ ಜನಸಂಪರ್ಕ ಸಭೆಯಲ್ಲಿ ಜನರ ಕುಂದುಕೊರತೆ ಆಲಿಸಿ, ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಗ್ರಾಮೀಣರ ಸಮಸ್ಳೆಗಳಿಗೆ ಮೊದಲ ಆದ್ಯತೆ ನೀಡಬೇಕು. ಅಧಿಕಾರಿಗಳ ಬದ್ಧತೆ ಹಾಗೂ ಇಚ್ಛಾಶಕ್ತಿ ಕೊರತೆಯಿಂದಾಗಿ ಸರ್ಕಾರಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗುತ್ತಿಲ್ಲ. ಅಧಿಕಾರಿಗಳು ಜನರ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿಕೊಡುವ ನಿಟ್ಟಿನಲ್ಲಿ ಬದ್ಧತೆ ಪ್ರದರ್ಶಿಸಬೇಕು ಎಂದು ತಾಕೀತು ಮಾಡಿದರು.
ಉರಿಯುವ ಬೆಂಕಿಗೆ ತುಪ್ಪ ಸುರಿದ ಸಿದ್ದು- ಡಿಕೆಶಿ: ಉಸಿರುಗಟ್ಟುವ ಸ್ಥಿತಿಯಲ್ಲಿ ಮೆಡಿಕಲ್ ಕಾಲೇಜು!
ನುಡಿದಂತೆ ನಡೆದ ಕಾಂಗ್ರೆಸ್: ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಚುನಾವಣೆ ಪೂರ್ವದಲ್ಲಿ ಐದು ಭರವಸೆಗಳಲ್ಲಿ ನಾಲ್ಕು ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಮಹಿಳೆಯರಿಗೆ ಉಚಿತ ಪ್ರಯಾಣದಲ್ಲಿ ಸುಮಾರು 38.5 ಕೋಟಿ ಮಹಿಳೆಯರು ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡಿದ್ದಾರೆ. ಮಹಿಳೆಯರು ಪರವಾಗಿ ಸಾರಿಗೆ ಸಂಸ್ಥೆಗೆ ಸರ್ಕಾರ ಹಣ ನೀಡಿದೆ ಎಂದು ತಿಳಿಸಿದರು.
ಪಡಿತರ ಕುಟುಂಬದ ಮನೆಯೊಡತಿಗೆ 2 ಸಾವಿರ ಹಣ ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಿದೆ. ಈಗಾಗಲೇ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡುತ್ತಿದೆ. ಪ್ರತಿ ಪಡಿತರ ಕುಟುಂಬದ ಮನೆಯೊಡತಿಗೂ ಯೋಜನೆಯನ್ನು ತಲುಪಿಸಬೇಕು ಎಂಬುದು ಸರ್ಕಾರದ ಗುರಿಯಾಗಿದ್ದು, ಗೃಹಲಕ್ಷ್ಮಿ ಯೋಜನೆಗೆ ನೊಂದಾಯಿಸಿಕೊಳ್ಳದ ಮಹಿಳೆಯರನ್ನು ಗುರುತಿಸಿ ಅವರನ್ನು ಯೋಜನೆಗೆ ನೊಂದಾಯಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಗೃಹಜ್ಯೋತಿ ಯೋಜನೆ ಮೂಲಕ ಮನೆಗಳಿಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ಯೋಜನೆಯನ್ನು ಜಾರಿಗೆ ತರಲಾಗಿದೆ. ರಾಜ್ಯದ 1.54 ಕೋಟಿ ಕುಟುಂಬಗಳಿಗೆ ಯೋಜನೆಯಿಂದ ಲಾಭವಾಗಿದೆ. ಅದೇ ರೀತಿ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು, 5 ಕೆ.ಜಿ.ಅಕ್ಕಿ ಬದಲಿಗೆ ಪಡಿತರ ಕುಟುಂಬದ ವ್ಯಕ್ತಿಯೊಬ್ಬರಿಗೆ 170 ರು.ಗಳಂತೆ ಹಣ ನೀಡಲಾಗುತ್ತಿದೆ. ಹೆಚ್ಚುವರಿ ಅಕ್ಕಿ ನೀಡಿ ಎಂದು ಮನವಿ ಮಾಡಿದರೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ನೀಡಲಿಲ್ಲ. ಆದರೂ, ಕೊಟ್ಟ ಮಾತಿನಂತೆ ಜನರಿಗೆ ಆಹಾರ ಭದ್ರತೆ ಒದಗಿಸಬೇಕು ಎಂಬ ಉದ್ದೇಶದಿಂದ ಅಕ್ಕಿ ಬದಲಿಗೆ ಹಣ ನೀಡಲಾಗುತ್ತಿದೆ. ಆದಷ್ಟು ಬೇಗ ಪೂರ್ಣ ಪ್ರಮಾಣದಲ್ಲಿ ಅಕ್ಕಿ ಹಾಗೂ ರಾಗಿ ನೀಡಲಾಗುವುದು. ಅದೇ ರೀತಿ ಪದವೀಧರರಿಗೆ ನೀಡಿದ್ದ ನಿರುದ್ಯೋಗಿ ವೇತನದ ಭರವಸೆಯನ್ನು ಡಿಸೆಂಬರ್ ಅಥವಾ ಜನವರಿಯಲ್ಲಿ ಅನುಷ್ಠಾನಕ್ಕೆ ತರಲಾಗುವುದು ಎಂದು ತಿಳಿಸಿದರು.
ನಿಮ್ಮ ಖಾತೆ ಸಕ್ರಿಯವಾಗಿಟ್ಟುಕೊಳ್ಳಿ: ಸರ್ಕಾರ ಬಡವರಿಗೆ ಅನುಕೂಲ ಕಲ್ಪಿಸಬೇಕು ಎಂಬ ನಿಟ್ಟಿನಲ್ಲಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು, ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾಹಿಸುವ ಕೆಲಸ ಮಾಡುತ್ತಿದೆ. ಗ್ರಾಮೀಣರು ನಗರ ಪ್ರದೇಶಕ್ಕೆ ಅಲೆದಾಡುವುದನ್ನು ತಪ್ಪಿಸಲು ಪಂಚಾಯಿತಿ ವ್ಯಾಪ್ತಿಯಲ್ಲಿಯೇ ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲಾಗಿದೆ. ಆದ್ದರಿಂದ ನಿಮ್ಮ ಬ್ಯಾಂಕ್ ಖಾತೆಯನ್ನು ಸಕ್ರಿಯವಾಗಿಟ್ಟುಕೊಂಡು ಸರ್ಕಾರಿ ಸವಲತ್ತು ಪಡೆಯಿರಿ ಎಂದು ತಿಳಿಸಿದರು.
ಇದೇ ಗ್ರಾಮಸ್ಥರು ಪಹಣಿ, ಖಾತೆ, ರಸ್ತೆ, ಚರಂಡಿ, ಜಮೀನು ಸರ್ವೆ ಸೇರಿದಂತೆ ಸ್ಥಳೀಯ ಸಮಸ್ಯೆಗಳ ಕುರಿತು ಸಂಸದರಿಗೆ ಅರ್ಜಿ ಸಲ್ಲಿಸಿದ್ದರು. ಜನರ ಸಮಸ್ಯೆಯನ್ನು ಕುಂದುಕೊರತೆ ಆಲಿಸಿದ ಸಂಸದರು, ಇಲ್ಲಿ ಕಂಡುಬರುತ್ತಿರುವ ಸಮಸ್ಯೆಗಳಲ್ಲಿ ಬಹುತೇಕ ಸಮಸ್ಯೆಗಳು ಪಂಚಾಯಿತಿ ಮಟ್ಟದಲ್ಲೇ ಬಗೆಹರಿಸಬಹುದಾದ ಸಮಸ್ಯೆಯಾಗಿದ್ದು, ಅಧಿಕಾರಿಗಳು ಬದ್ಥೆತೆಯಿಂದ ಕೆಲಸ ಮಾಡಿ ಸಮಸ್ಯೆಗಳನ್ನು ಪರಿಹರಿಸುವಂತೆ ಸೂಚಿಸಿದರು.
ಮೆಡಿಕಲ್ ಕಾಲೇಜು ಸ್ಥಳಾಂತರ ಹಿಂದೆ ಡಿಕೆ ಬ್ರದರ್ಸ್‌ಗೆ ಲಾಭದ ಉದ್ದೇಶ: ಸಿ.ಪಿ.ಯೋಗೇಶ್ವರ್
ಸಭೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗಂಗಾಧರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಸ್.ಆರ್. ಪ್ರಮೋದ್, ಸುನೀಲ್, ರಾಜ್ಯ ಕುಕ್ಕುಟ ಮಹಾಮಂಡಲದ ಅಧ್ಯಕ್ಷ ಡಿ.ಕೆ.ಕಾಂತರಾಜು, ಮುಖಂಡರಾದ ದುಂತೂರು ವಿಶ್ವನಾಥ್, ಬೋರ್‌ವೆಲ್ ರಂಗನಾಥ್. ಇಒ ಶಿವಕುಮಾರ್, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.