ನಾನು ಕಂಡ ಅತ್ಯಂತ ಭ್ರಷ್ಟ ಸರ್ಕಾರವಿದು: ಸಂಸದ ರಮೇಶ ಜಿಗಜಿಣಗಿ
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇದು ಅತ್ಯಂತ ಭ್ರಷ್ಟ ಸರ್ಕಾರ ಎಂದು ಸಂಸದ ರಮೇಶ ಜಿಗಜಿಣಗಿ ಆರೋಪಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಹೆಬ್ಬಾವು ಸುತ್ತಿದ ಹಾಗೆ ಭ್ರಷ್ಟಾಚಾರದ ಸುರಿಮಳೆಯಾಗುತ್ತಿದೆ.
ಬೆಳಗಾವಿ (ಜು.20): ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇದು ಅತ್ಯಂತ ಭ್ರಷ್ಟ ಸರ್ಕಾರ ಎಂದು ಸಂಸದ ರಮೇಶ ಜಿಗಜಿಣಗಿ ಆರೋಪಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಹೆಬ್ಬಾವು ಸುತ್ತಿದ ಹಾಗೆ ಭ್ರಷ್ಟಾಚಾರದ ಸುರಿಮಳೆಯಾಗುತ್ತಿದೆ. ದಲಿತರ, ಹಿಂದುಳಿದ ವರ್ಗದ ಹಾಗೂ ಮುಸ್ಲಿಂ ಸಮಾಜದ ಚಾಂಪಿಯನ್ ಎಂದು ಹೇಳುವ ಕಾಂಗ್ರೆಸ್ ಅದೇ ಸಮಾಜದ ಜನರಿಗೆ ಮೋಸ ಮಾಡಿದೆ ಎಂದು ಆರೋಪಿಸಿದರು. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ₹ 187 ಕೋಟಿ, ಎಸ್‌ಟಿಪಿ ₹ 32 ಸಾವಿರ ಕೋಟಿ ಹಣ ಎಲ್ಲಿ ಹೋಯಿತು?
ಲೋಕಸಭೆ ಚುನಾವಣೆಯಲ್ಲಿ ಮದ್ಯ ಕುಡಿಸಲು ಆ ಹಣ ಹೋಗಿದೆಯೇ ಎಂದು ಪ್ರಶ್ನಿಸಿದ ಅವರು, ರಾಜ್ಯದಲ್ಲಿ ಲಿಂಗಾಯತ ಹಾಗೂ ಒಕ್ಕಲಿಗರ ಹಣ ಯಾಕೆ ತೆಗೆದುಕೊಳ್ಳಲಿಲ್ಲ? ಅತ್ಯಂತ ಹಿಂದುಳಿದ ಬಡವರ ಹಣವೇ ಬೇಕಾಗಿತ್ತಾ? ಇದು ಪಾಪಗೇಡಿ ಕೆಲಸ. ನಿಜವಾಗಿ ನೀವು ಪಾತ್ರಧಾರಿ ಇಲ್ಲ ಎಂದರೆ ಸಿಬಿಐ ತನಿಖೆಗೆ ವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದರು. ರಾಜ್ಯದಲ್ಲಿ ಬಿಜೆಪಿ ವೀಕ್ ಆಗಿಲ್ಲ. ಅತ್ಯಂತ ಬಲಿಷ್ಠವಾಗಿ ರಾಜ್ಯ ಹಾಗೂ ದೇಶದಲ್ಲಿ ಬೆಳೆಯುತ್ತಿದೆ. ನನ್ನ ಜೀವನದಲ್ಲಿ ಎಸ್‌ಟಿಪಿ ಅನುದಾನವನ್ನು ಬಳಸಲಿಲ್ಲ. ನನ್ನ ಸುದೀರ್ಘ ರಾಜಕಾರಣ ಜೀವನದಲ್ಲಿ ಇಂಥ ಭ್ರಷ್ಟಾಚಾರ ನೋಡಿಲ್ಲ. ಅತ್ಯಂತ ಪಾಪಿಷ್ಟ ಸರ್ಕಾರ ಎಂದು ಜರಿದರು.
ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ಕೊಡಿ: ಕೇಂದ್ರ ಸಚಿವ ಸೋಮಣ್ಣ
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತಕ್ಕ ಪಾಠ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಎನ್.ಡಿ.ಎ ಮೈತ್ರಿಕೂಟ 19 ಲೋಕಸಭೆ ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಜನ ತಕ್ಕ ಪಾಠ ಕಲಿಸಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಬೆಳಗಾವಿ ತಾಲೂಕಿನ ಮುತಗಾ ಗ್ರಾಮದಲ್ಲಿ ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲೆ ವತಿಯಿಂದ ನಡೆದ ವಿಶೇಷ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಆರೋಪಿಸಿದರು.
ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರಗೇಶ ನಿರಾಣಿ ಮಾತನಾಡಿ, ಬೆಳಗಾವಿ ಲೋಕಸಭೆ ಚುನಾವಣೆಯಲ್ಲಿ ಅಧಿಕಾರದ ಮದ, ಹಣ ಬಲದ ಮೇಲೆ ಮೆರೆಯುತ್ತಿದ್ದವರಿಗೆ ಜಿಲ್ಲೆಯ ಜನತೆ ತಕ್ಕ ಪಾಠ ಕಲಿಸಿದ್ದಾರೆ. ಕಾರ್ಯಕರ್ತರ ಸಂಘಟಿತ ಪರಿಶ್ರಮದ ಫಲವಾಗಿ ಬಿಜೆಪಿಗೆ ಗೆಲುವಾಗಿದೆ ಎಂದು ಹೇಳಿದರು. ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಧಿಕಾರಕ್ಕೆ ಬೇಸತ್ತು ಜನತೆ ಲೋಕಸಭೆ ಚುನಾವಣೆಯಲ್ಲಿ ಎನ್.ಡಿ.ಎ ಅಭ್ಯರ್ಥಿಗಳಿಗೆ ಮತ ಹಾಕಿ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಿಸಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರುತ್ತಿದೆ, ಕಾನೂನು ಬಾಹಿರ ಚಟುವಟಿಕೆ ಹೆಚ್ಚುತ್ತಿದೆ. ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರುಪಾಯಿ ಲೂಟಿ ಹೊಡೆಯಲಾಗಿದೆ.
ಮರುಬಳಕೆ ಇಂಧನ ಉತ್ಪಾದನೆಗೆ ಆದ್ಯತೆ: ಸಚಿವ ಎಂ.ಬಿ.ಪಾಟೀಲ್
ಈ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ಸಂಸದ ಈರಣ್ಣ ಕಡಾಡಿ, ಮಾಜಿ ಸಂಸದೆ ಮಂಗಲಾ ಅಂಗಡಿ, ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಮಾಜಿ ಶಾಸಕರಾದ ಸಂಜಯ ಪಾಟೀಲ, ಸಂಸದ ಜಗದೀಶ ಶೆಟ್ಟರ್, ಜಗದೀಶ ಮೆಟಗುಡ್ಡ, ಮಹಾಂತೇಶ ದೊಡಗೌಡರ, ವಿಶ್ವನಾಥ್ ಪಾಟೀಲ, ಅರವಿಂದ ಪಾಟೀಲ, ರತ್ನಾ ಮಾಮನಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.