Asianet Suvarna News Asianet Suvarna News

ನೈತಿಕತೆಯಿದ್ದರೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಮಾಜಿ ಸಿಎಂ ಸದಾನಂದಗೌಡ

ರಾಜ್ಯಪಾಲರ ವಿರುದ್ಧ ಅವಹೇಳನಾಕಾರಿಯಾಗಿ ಮಾತನಾಡುವುದನ್ನು ಕಾಂಗ್ರೆಸ್ ನಾಯಕರು ನಿಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಹೇಳಿದರು. 

Muda Case CM Siddaramaiah should resign if there is morality Says Ex CM Sadananda Gowda gvd
Author
First Published Aug 23, 2024, 9:34 PM IST | Last Updated Aug 23, 2024, 9:34 PM IST

ತುಮಕೂರು (ಆ.23): ರಾಜ್ಯಪಾಲರ ವಿರುದ್ಧ ಅವಹೇಳನಾಕಾರಿಯಾಗಿ ಮಾತನಾಡುವುದನ್ನು ಕಾಂಗ್ರೆಸ್ ನಾಯಕರು ನಿಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಹೇಳಿದರು. ನಗರದ ಬಿಜಿಎಸ್ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ರಾಜ್ಯಪಾಲರು ಬೆದರುಗೊಂಬೆ ಅಲ್ಲ, ಸಾಂವಿಧಾನಿಕ ಹುದ್ದೆ. ರಾಜ್ಯದ ಆಡಳಿತ ಯಂತ್ರ ದುರುಪಯೋಗವಾದಾಗ ಸರ್ಕಾರದ ಖಜಾನೆ ಲೂಟಿಯಾದಾಗ, ಸಾರ್ವಜನಿಕ ಆಸ್ತಿಯನ್ನು ಸ್ವಾರ್ಥಕ್ಕೆ ಬಳಸಿಕೊಂಡಾಗ, ಸರ್ಕಾರ ತಪ್ಪುದಾರಿಗೆ ಇಳಿದಾಗ ರಾಜ್ಯಪಾಲರು ಕಾನೂನಾತ್ಮಕ ಕಾರ್ಯಾಚರಣೆ ಮಾಡುತ್ತಾರೆ. 

ನಿಮ್ಮ ಕರ್ಮಕಾಂಡವನ್ನು ಮುಚ್ಚಿಕೊಳ್ಳಲು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ಅತ್ಯಂತ ಹೀನಾಯವಾಗಿ ನಡೆದುಕೊಳ್ಳುತ್ತಿರುವುದು ಖಂಡನೀಯ ಎಂದರು. ಕಾಂಗ್ರೆಸ್‌ನವರು ರಾಜ್ಯದಲ್ಲಿ ಹೀಗೇ ಅರಾಜಕತೆ ಪ್ರಾರಂಭ ಮಾಡಿದರೆ ಕೇಂದ್ರ ಸರ್ಕಾರ ಖಂಡಿತವಾಗಿಯೂ ಸಂಭವವಾದ ಕ್ರಮಕ್ಕೆ ಆಲೋಚನೆ ಮಾಡುತ್ತದೆ. ರಾಜ್ಯಪಾಲರ ವಿರುದ್ಧ ಹೀನಾಯವಾಗಿ ನಡೆದುಕೊಳ್ಳುತ್ತಿರುವ ಕಾಂಗ್ರೆಸ್‌ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಾಯಿ ಮುಚ್ಚಲು ಹೇಳಬೇಕು. ಸಂವಿಧಾನ ವಿರೋಧಿ, ದೇಶ ವಿರೋಧಿ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್‌ ವಿರುದ್ಧ ದೇಶದ್ರೋಹಿ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಒತ್ತಾಯಿಸಿದರು.

ರೈತರ ಹಿತರಕ್ಷಣೆಗೆ ಅರಣ್ಯ ಇಲಾಖೆ ವಿರುದ್ಧ ಜನಾಂದೋಲನ: ಮುಖ್ಯಮಂತ್ರಿ ಚಂದ್ರು

ಮುಡಾ (ಮೈಸುರು ಅಭಿವೃದ್ಧಿ ಪ್ರಾಧಿಕಾರ) ಹಗರಣ ಸಂಬಂಧ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಏಕಾಏಕಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಿಲ್ಲ. ಅದಕ್ಕೂ ಮೊದಲು ಸರ್ಕಾರಕ್ಕೆ ನೋಟೀಸ್ ನೀಡಿ, ಪ್ರಕರಣದ ಬಗ್ಗೆ ಉತ್ತರ ನೀಡಲು ಹೇಳಿದ್ದರು. ಆದರೆ, ಡಿಸಿಎಂ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್‌ನಲ್ಲಿ ರಾಜ್ಯಪಾಲರ ನೋಟೀಸ್ ವಾಪಸ್ ಮಾಡಲು ತೀರ್ಮಾನ ಮಾಡಿತು. ರಾಜ್ಯಪಾಲರು ನಿಯಮಾನುಸಾರ ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದರು. ಸಿಎಂ ಸಿದ್ದರಾಮಯ್ಯಗೆ ನೈತಿಕತೆಯಿದ್ದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಲಿ ಎಂದು ಹೇಳಿದರು.

ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿ, ಕಳೆದ ಒಂದು ತಿಂಗಳಿನಿಂದ ನಡೆದ ಘಟನೆಗಳು ರಾಜ್ಯ ಕಾಂಗ್ರೆಸ್ ಸರ್ಕಾರ ಇರುವುದೇ ಭ್ರಷ್ಟಾಚಾರ ಮಾಡೋದಿಕ್ಕೆ ಎಂಬುದಕ್ಕೆ ಸಾಕ್ಷಿಯಾಗಿವೆ. ಪಾದಯಾತ್ರೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರ ಮುಖವಾಡವನ್ನು ಜನರಿಗೆ ತೋರಿಸಿದ್ದೇವೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ವಿರೋಧಿಸಿ ಕಾಂಗ್ರೆಸ್‌ನವರು ನಡೆದುಕೊಳ್ಳುತ್ತಿರುವ ರೀತಿ ನೋಡಿದರೆ ಭಾರತ ದೇಶ ಕೂಡಾ ಬಾಂಗ್ಲಾ, ಆಫ್ಘಾನಿಸ್ತಾನ ಮಾಡಲು ಹೊರಟಂತಿದ್ದಾರೆ ಎಂದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ ಮಾತನಾಡಿ, ಹಗರಣಗಳಲ್ಲಿ ಸಿಕ್ಕಿಕೊಂಡಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ತಾವು ಪ್ರಾಮಾಣಿಕ ಎಂದು ತಮಗೆ ತಾವೇ ಸರ್ಟಿಫಿಕೇಟ್ ಕೊಟ್ಟು ಕೊಳ್ಳುತ್ತಿದ್ದಾರೆ ಎಂದರು. ವಿಧಾನ ಪರಿಷತ್ ಸದಸ್ಯ ಚಿದಾನಂದಗೌಡ ಮಾತನಾಡಿ, ಗ್ಯಾರಂಟಿ ಯೋಜನೆಗಳ ಮರೆಯಲ್ಲಿ ತಾವು ಏನು ಬೇಕಾದರೂ ಮಾಡಬಹುದು ಎಂದು ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರ ಮಾಡಲು ಹೊರಟಿದೆ ಎಂದರು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ವೈ.ಎಚ್.ಹುಚ್ಚಯ್ಯ ಮಾತನಾಡಿ, ಪರಿಶಿಷ್ಟ ಜಾತಿ, ಪಂಗಡದ ಅಭಿವೃದ್ಧಿಗೆ ಮೀಸಲಾದ ಹಣವನ್ನು ದುರುಪಯೋಗ ಮಾಡಿಕೊಂಡ ಕಾಂಗ್ರೆಸ್ ಸರ್ಕಾರ ಹಗಲು ದರೋಡೆ ಮಾಡುತ್ತಿದೆ. ಅಧಿಕಾರದಲ್ಲಿ ಉಳಿಯಲು ಈ ಸರ್ಕಾರಕ್ಕೆ ನೈತಿಕತೆಯಿಲ್ಲ ಎಂದು ಟೀಕಿಸಿದರು.

ಸಂಜು ವೆಡ್ಸ್ ಗೀತಾ 2 ಚಿತ್ರದಲ್ಲಿ ಶ್ರೀನಗರ ಕಿಟ್ಟಿ ಹಾಗೂ ರಚಿತಾ ರಾಮ್ ಈ ಪಾತ್ರದಲ್ಲಿ ನಟಿಸುತ್ತಿದ್ದಾರಾ!

ನಂತರ ಬಿಜಿಎಸ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕಾಂಗ್ರೆಸ್ ನಾಯಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಬ್ಯಾಟರಂಗೇಗೌಡ, ಮಾಜಿ ಪ್ರಧಾನ ಕಾರ್ಯದರ್ಶಿ ಎಸ್.ಶಿವಪ್ರಸಾದ್, ರಾಜ್ಯ ಬಿಜೆಪಿ ವಕ್ತಾರ ಎಚ್.ಎನ್.ಚಂದ್ರಶೇಖರ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗಂಗರಾಜು, ಸಂದೀಪ್‌ಗೌಡ, ಹಾಲೇಗೌಡ, ಕಾರ್ಯದರ್ಶಿಗಳಾದ ಹೆಚ್.ಎಂ.ರವೀಶಯ್ಯ, ಜ್ಯೋತಿತಿಪ್ಪೇಸ್ವಾಮಿ, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಆಂಜನಪ್ಪ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಸಿದ್ದರಾಮಣ್ಣ, ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ವೇದಮೂರ್ತಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಸುಮಿತ್ರಮ್ಮ, ಯುವಮೋರ್ಚಾ ಜಿಲ್ಲಾಧ್ಯಕ್ಷ ನವಚೇತನ್, ನಗರ ಅಧ್ಯಕ್ಷ ಟಿ.ಹೆಚ್.ಹನುಮಂತರಾಜು, ಮುಖಂಡರಾದ ದಿಲೀಪ್‌ಕುಮಾರ್, ಭೈರಣ್ಣ, ಹೆಚ್.ಟಿ.ಭೈರಪ್ಪ, ಚಂದ್ರಶೇಖರಬಾಬು, ಬಾವಿಕಟ್ಟೆ ನಾಗಣ್ಣ, ರುದ್ರೇಶ್, ಗಣೇಶ್‌ಪ್ರಸಾದ್, ಅಂಜನಮೂರ್ತಿ ಭಾಗವಹಿಸಿದ್ದರು.

Latest Videos
Follow Us:
Download App:
  • android
  • ios