ಹುಬ್ಬಳ್ಳಿ/ಗದಗ [ಅ.27]:  ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರು ಜೈಲಿನಿಂದ ಬಿಡುಗಡೆಯಾದ ಬಳಿಕ ಪಕ್ಷದಲ್ಲಿ ಉನ್ನತ ಸ್ಥಾನಮಾನ ಸಿಗಬಹುದು, ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬಹುದು ಎಂದು ಅವರ ಬೆಂಬಲಿಗರು ಬೆಂಗಳೂರಲ್ಲಿ ಭಾರೀ ಮೆರವಣಿಗೆ ಮಾಡಿ ಸಂಭ್ರಮದಲ್ಲಿದ್ದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಅಂಥ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗರ ಬದಲಾವಣೆ ಕೇವಲ ಗಾಳಿ ಸುದ್ದಿ ಎಂದು ಸ್ಪಷ್ಟಪಡಿಸುವ ಮೂಲಕ ಡಿ.ಕೆ.ಶಿವಕುಮಾರ್‌ಗೆ ಪರೋಕ್ಷ ಟಾಂಗ್‌ ನೀಡಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಡಿ.ಕೆ.ಶಿವಕುಮಾರ್‌ ಕೆಪಿಸಿಸಿ ಅಧ್ಯಕ್ಷರಾಗುತ್ತಾರೆಂಬುದು ಕೇವಲ ಗಾಳಿ ಸುದ್ದಿ. ನನಗೆ ತಿಳಿದಂತೆ ಅಧ್ಯಕ್ಷರ ಬದಲಾವಣೆ ಕುರಿತ ಪ್ರಸ್ತಾಪ ಸದ್ಯ ಪಕ್ಷದ ಮುಂದಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಜತೆಗೆ, ಈ ಕುರಿತು ಪಕ್ಷದ ಹೈಕಮಾಂಡ್‌ ತೀರ್ಮಾನ ತೆಗೆದುಕೊಳ್ಳಲಿದೆ ಎಂದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸದ್ಯ ಜಾಮೀನು ಮೇಲೆ ಬಿಡುಗಡೆಯಾಗಿರುವ ಡಿ.ಕೆ.ಶಿವಕುಮಾರ್‌ ಅವರು ಪಕ್ಷದಲ್ಲಿ ಉನ್ನತ ಹುದ್ದೆಯ ನಿರೀಕ್ಷೆಯಲ್ಲಿದ್ದಾರೆಂಬ ವಿಚಾರ ಗುಟ್ಟಾಗಿಯೇನೂ ಉಳಿದಿಲ್ಲ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ನಿಲುವಿನ ಬಗ್ಗ ರಾಜ್ಯ ಕಾಂಗ್ರೆಸ್‌ನ ಒಂದು ಬಣ ಈಗಾಗಲೆ ಬಹಿರಂಗವಾಗಿಯೇ ತನ್ನ ಅಸಮಾಧಾನ ವ್ಯಕ್ತಪಡಿಸಿದೆ. 

ಸಿದ್ದರಾಮಯ್ಯ ಅವರಿಗೆ ಪ್ರತಿಪಕ್ಷ ನಾಯಕ ಸ್ಥಾನ ತಪ್ಪಿಸಲು ವಿಫಲ ಪ್ರಯತ್ನ ನಡೆಸಿರುವ ಈ ಬಣ ಈಗ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಬದಲಾವಣೆಗೆ ಪಟ್ಟುಹಿಡಿದಿದೆ. ಇಂಥ ಸಂದರ್ಭದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಪಾಲಾದ ಬಳಿಕ ಹೈಕಮಾಂಡ್‌ಗೆ ಇನ್ನಷ್ಟುಹತ್ತಿರವಾಗಿರುವ ಡಿ.ಕೆ.ಶಿವಕುಮಾರ್‌ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕೆಂಬ ಬೇಡಿಕೆ ಅವರ ಬೆಂಬಲಿಗರಿಂದ ಗಟ್ಟಿದನಿಯಲ್ಲಿ ಕೇಳಿಬರುತ್ತಿದೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಅಂಥ ಸಾಧ್ಯತೆಯನ್ನು ತಳ್ಳಿಹಾಕಿದ್ದು ತೀವ್ರ ಕುತೂಹಲ ಮೂಡಿಸಿದೆ