ಶಾಸಕಾಂಗ ಪಕ್ಷದ ಸಭೆ ಯಶಸ್ವಿಯಾಗಿ ನಡೆದಿದೆ. ಯಾವ ಶಾಸಕಗೂ ಅಸಮಾಧಾನ ಇಲ್ಲ. ಯಾರೂ ಸಚಿವರ ವಿರುದ್ಧ ದೂರು ಕೊಟ್ಟಿಲ್ಲ. ಎಲ್ಲರೂ ಖುಷಿಯಾಗಿದ್ದಾರೆ: ಡಿ.ಕೆ.ಶಿವಕುಮಾರ್‌ 

ಬೆಂಗಳೂರು(ಜು.28): ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ತಮ್ಮ ಕ್ಷೇತ್ರದ ಸಮಸ್ಯೆಗಳನ್ನು ಹಂಚಿಕೊಂಡಿದ್ದಾರೆ. ಆ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ನೀಡಲಾಗಿದೆ. ಯಾರಿಗೂ ಅಸಮಾಧಾನ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಶಾಸಕಾಂಗ ಪಕ್ಷದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಇಬ್ಬರೂ ಪ್ರತ್ಯೇಕವಾಗಿ ಮಾತನಾಡಿದರು. ಮೊದಲಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಶಾಸಕರು ನನಗೆ ಪತ್ರ ಬರೆದಿದ್ದರು. ಅದರಂತೆ ಇವತ್ತು ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಬಹುತೇಕ ಎಲ್ಲ ಶಾಸಕರೂ ಭಾಗಿಯಾಗಿ ತಮ್ಮ ಕ್ಷೇತ್ರದ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ತಾವು ಹೇಳಿದ ವರ್ಗಾವಣೆಗಳು ಆಗಿಲ್ಲ ಎಂದು ಹೇಳಿದ್ದಾರೆ. ವರ್ಗಾವಣೆ ಮಾಡಿಕೊಡೋಣ ಎಂದು ಹೇಳಿದ್ದೇವೆ. ಜೊತೆಗೆ ಅವರ ಕ್ಷೇತ್ರಗಳ ಅಭಿವೃದ್ಧಿ ವಿಚಾರ ಸೇರಿದಂತೆ ಇನ್ನಿತರೆ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ನೀಡಲಾಗಿದೆ ಎಂದರು.

ಸರ್ಕಾರ ಉರುಳಿಸಲು ಎಚ್‌ಡಿಕೆ ಪಿತೂರಿ: ಯಾವ ಶಾಸಕರಿಗೆ ಗಾಳ ಅಂತ ಗೊತ್ತಿದೆ -ಡಿಕೆಶಿ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಾತನಾಡಿ, ಶಾಸಕಾಂಗ ಪಕ್ಷದ ಸಭೆ ಯಶಸ್ವಿಯಾಗಿ ನಡೆದಿದೆ. ಯಾವ ಶಾಸಕಗೂ ಅಸಮಾಧಾನ ಇಲ್ಲ. ಯಾರೂ ಸಚಿವರ ವಿರುದ್ಧ ದೂರು ಕೊಟ್ಟಿಲ್ಲ. ಎಲ್ಲರೂ ಖುಷಿಯಾಗಿದ್ದಾರೆ. ತಮ್ಮ ಕ್ಷೇತ್ರಾಭಿವೃದ್ಧಿಗೆ ಅನುದಾನ ಹಂಚಿಕೆ ಹಾಗೂ ವರ್ಗಾವಣೆ ಬಗ್ಗೆ ಹೇಳಿದ್ದಾರೆ. ನಿಯಮಾವಳಿಯಲ್ಲಿ ಶೇ.6ರಷ್ಟು ವರ್ಗಾವಣೆಗೆ ಮಾತ್ರ ಅವಕಾಶವಿದೆ. ಎಲ್ಲವನ್ನೂ ಮುಖ್ಯಮಂತ್ರಿ ಅವರು ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಹೇಳಿದರು.