ಮಂಡ್ಯ ಮತ್ತು ಹಾಸನ ಜಿಲ್ಲೆಗಳಲ್ಲಿ ಬಿಜೆಪಿ ಸ್ವತಂತ್ರವಾಗಿ ಸ್ಪರ್ಧಿಸುವಷ್ಟು ಶಕ್ತಿಶಾಲಿಯಾಗಿದೆ  . ಒಂದು ವೇಳೆ ಜೆಡಿಎಸ್ ಜೊತೆ ಮೈತ್ರಿ ಮುಂದುವರೆದಲ್ಲಿ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಶೇ.50ರಷ್ಟು ಸ್ಥಾನಗಳನ್ನು ತಮಗೆ ಬಿಟ್ಟುಕೊಡಬೇಕೆಂದು ಬಿಜೆಪಿ ಮುಖಂಡ ಪ್ರೀತಂ ಗೌಡ ಬೇಡಿಕೆ ಇಟ್ಟಿದ್ದಾರೆ.

ಮಂಡ್ಯ: ಮಂಡ್ಯ ಹಾಗೂ ಹಾಸನ ಜಿಲ್ಲೆಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಈಗಾಗಲೇ ಶಕ್ತಿಶಾಲಿಯಾಗಿ ನೆಲೆಸಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜನತಾದಳ (ಜೇಡಿಎಸ್) ಜೊತೆಗೆ ಮೈತ್ರಿ ಮಾಡಿಕೊಳ್ಳುವ ಅಗತ್ಯವಿಲ್ಲ ಎಂಬ ಅಭಿಪ್ರಾಯ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ವ್ಯಾಪಕವಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಹೇಳಿದ್ದಾರೆ.

ಮಂಗಳವಾರ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಳೆದ ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆಗಳಲ್ಲಿಯೇ ಬಿಜೆಪಿ ಈ ಭಾಗದಲ್ಲಿ ಬಲಿಷ್ಠ ಪಕ್ಷವಾಗಿ ಹೊರಹೊಮ್ಮಿದೆ. ಈ ಸತ್ಯವನ್ನು ಜೆಡಿಎಸ್ ಕೂಡ ಅರಿತಿದೆ. ಆದ್ದರಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಬಿಜೆಪಿ ಸ್ವತಂತ್ರವಾಗಿ ಎದುರಿಸಬೇಕು ಎನ್ನುವುದು ಕಾರ್ಯಕರ್ತರ ಸ್ಪಷ್ಟ ಅಭಿಪ್ರಾಯವಾಗಿದೆ” ಎಂದು ಹೇಳಿದರು.

ಮೈತ್ರಿಗೆ ಶೇ.50ರಷ್ಟು ಸ್ಥಾನಕ್ಕೆ ಬೇಡಿಕೆ

ಮಂಡ್ಯ ಮತ್ತು ಹಾಸನ ಜಿಲ್ಲೆಗಳಲ್ಲಿ ಬಿಜೆಪಿ ತನ್ನದೇ ಆದ ರಾಜಕೀಯ ಶಕ್ತಿಯಿಂದ ಬೆಳೆದಿದೆ. 2019 ಹಾಗೂ 2024ರ ಲೋಕಸಭಾ ಚುನಾವಣೆಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳ ಗೆಲುವಿನಲ್ಲಿ ಬಿಜೆಪಿ ಕಾರ್ಯಕರ್ತರ ಪಾತ್ರ ನಿರ್ಣಾಯಕವಾಗಿತ್ತು. ಕಳೆದ ಲೋಕಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರ ಗೆಲುವಿಗೂ ಬಿಜೆಪಿ ಕಾರ್ಯಕರ್ತರು ತಮ್ಮ ಸಂಪೂರ್ಣ ಶಕ್ತಿಯನ್ನು ಬಳಸಿದ್ದಾರೆ. ಇಂತಹ ಹಿನ್ನೆಲೆಯಲ್ಲಿಯೇ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಗರಿಗೂ ಗೆಲುವಿನ ಅವಕಾಶ ಕಲ್ಪಿಸಬೇಕಾದ ಅನಿವಾರ್ಯತೆ ಇದೆ ಎಂದು ಪ್ರೀತಂ ಗೌಡ ಹೇಳಿದರು.

“ಯಾವುದೇ ಕಾರಣಕ್ಕೆ ಮೈತ್ರಿ ಮುಂದುವರೆಯಬೇಕಾದರೆ, ಶೇ.50ರಷ್ಟು ಸ್ಥಾನಗಳನ್ನು ಬಿಜೆಪಿಗೆ ಬಿಟ್ಟುಕೊಡಬೇಕು ಎಂಬುದು ಕಾರ್ಯಕರ್ತರ ಸ್ಪಷ್ಟ ಬೇಡಿಕೆಯಾಗಿದೆ. ಈ ವಿಚಾರವನ್ನು ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಹಿರಿಯ ಮುಖಂಡರ ಗಮನಕ್ಕೆ ತರುತ್ತೇನೆ” ಎಂದು ಅವರು ತಿಳಿಸಿದರು.

ಮೈತ್ರಿ ಕುರಿತು ಅಂತಿಮ ತೀರ್ಮಾನ ದೆಹಲಿಯಿಂದ

ಮಂಡ್ಯ–ಹಾಸನ ಭಾಗದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಗೆ ಸಂಬಂಧಿಸಿದಂತೆ ಕಾರ್ಯಕರ್ತರ ಅಭಿಪ್ರಾಯವನ್ನು ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಕೋರ್ ಕಮಿಟಿಯ ಮುಂದೆ ಇಡಲಾಗುವುದು. ಅಲ್ಲಿನ ನಿರ್ಣಯವನ್ನು ದೆಹಲಿಗೆ ಕಳುಹಿಸಲಾಗುತ್ತದೆ. ಅಂತಿಮವಾಗಿ ರಾಷ್ಟ್ರೀಯ ಅಧ್ಯಕ್ಷರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಪ್ರೀತಂ ಗೌಡ ಸ್ಪಷ್ಟಪಡಿಸಿದರು.

ಗೆಲ್ಲುವ ಸಾಮರ್ಥ್ಯದ ಆಧಾರದಲ್ಲಿ ಟಿಕೆಟ್ ಹಂಚಿಕೆ

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಯಾವ ಕ್ಷೇತ್ರಗಳಲ್ಲಿ ಬಿಜೆಪಿ ಅಥವಾ ಜೆಡಿಎಸ್ ಗೆಲುವು ಸಾಧಿಸಬಹುದು ಎಂಬುದನ್ನು ಸಮೀಕ್ಷೆಗಳ ಆಧಾರದಲ್ಲಿ ನಿರ್ಧರಿಸಲಾಗುವುದು. ಕೇವಲ ಪ್ರಾಬಲ್ಯದ ಆಧಾರದಲ್ಲಿ ಟಿಕೆಟ್ ಹಂಚಿಕೆ ಮಾಡುವುದಿಲ್ಲ. 180 ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ, ಗೆಲುವಿನ ಸಾಧ್ಯತೆ ಇರುವ ಅಭ್ಯರ್ಥಿಗಳಿಗೆ ಮಾತ್ರ ಟಿಕೆಟ್ ನೀಡಲಾಗುವುದು ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಘೋಷಣೆಗೆ ವಿರೋಧ

ಮೈತ್ರಿ ಕುರಿತು ಯಾವುದೇ ಗೊಂದಲವಿಲ್ಲದಿದ್ದರೂ, ರಾಜ್ಯದಲ್ಲಿ ಎರಡೂ ಪಕ್ಷಗಳ ನಡುವೆ ಸ್ಪಷ್ಟತೆ ಇರಬೇಕು. ಮೈತ್ರಿಯ ಹೆಸರಿನಲ್ಲಿ ಈಗಲೇ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸುವುದು ಸರಿಯಲ್ಲ. ನಿಖಿಲ್ ಕುಮಾರಸ್ವಾಮಿ ಅವರು ಕುಮಾರಸ್ವಾಮಿಯವರೇ ಮುಂದಿನ ಮುಖ್ಯಮಂತ್ರಿ ಎಂದು ಹೇಳುತ್ತಿರುವುದನ್ನು ನಾವು ವಿರೋಧಿಸುತ್ತೇವೆ ಎಂದು ಪ್ರೀತಂ ಗೌಡ ಅಸಮಾಧಾನ ವ್ಯಕ್ತಪಡಿಸಿದರು.

“ನಮ್ಮ ಪಕ್ಷದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಮುಂಚಿತವಾಗಿ ಘೋಷಿಸುವ ಪರಿಪಾಠವಿಲ್ಲ. ಅಂತಿಮ ತೀರ್ಮಾನವನ್ನು ವರಿಷ್ಠರು ತೆಗೆದುಕೊಳ್ಳುತ್ತಾರೆ. ಅದಕ್ಕೆ ಎಲ್ಲರೂ ಬದ್ಧರಾಗಬೇಕು” ಎಂದು ಹೇಳಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬಿಜೆಪಿ ಸಜ್ಜು

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ರಾಜ್ಯಾಧ್ಯಕ್ಷರು ನಿರ್ಧಾರ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಿಗೆ ರಾಜ್ಯಾದ್ಯಂತ ಪ್ರವಾಸ ನಡೆಸುವಂತೆ ಸೂಚಿಸಲಾಗಿದೆ. ಕೊಡಗು, ಚಾಮರಾಜನಗರ, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವಿಧಾನಸಭಾ ಕ್ಷೇತ್ರವಾರು ಸಂಘಟನೆಗೆ ಒತ್ತು ನೀಡಲಾಗಿದೆ. ಕಾರ್ಯಕರ್ತರ ಸಭೆಗಳನ್ನು ನಡೆಸಿ ಪಕ್ಷವನ್ನು ಬಲಪಡಿಸುವ ಕೆಲಸ ನಡೆಯುತ್ತಿದೆ ಎಂದು ಪ್ರೀತಂ ಗೌಡ ಮಾಹಿತಿ ನೀಡಿದರು.

ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ: ಕೆ.ಸಿ.ನಾರಾಯಣಗೌಡ

ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಕೆ.ಸಿ. ನಾರಾಯಣಗೌಡ ಮಾತನಾಡಿ, “ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಹಗುರವಾಗಿ ಮಾತನಾಡುವುದನ್ನು ಬಿಡಬೇಕು. ನಾವು ಸಹ ಪ್ರತಿಕ್ರಿಯಿಸಬಹುದು, ಆದರೆ ಪಕ್ಷದ ಗೌರವಕ್ಕೆ ಧಕ್ಕೆಯಾಗಬಾರದೆಂಬ ಕಾರಣಕ್ಕೆ ಸಂಯಮ ತಾಳಿದ್ದೇವೆ” ಎಂದು ಹೇಳಿದರು.

ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಶಾಸಕರು ಬಿಜೆಪಿ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದ ಅವರು, “ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಕೇಂದ್ರದ ವರಿಷ್ಠರು ಸೂಚಿಸಿದ್ದರು. ಅದನ್ನು ನಾವು ಪಾಲಿಸಿದ್ದೇವೆ. ಆದರೆ, ನಮ್ಮ ಕಾರ್ಯಕರ್ತರು ಹೋದರೆ ಅವರನ್ನು ಜೆಡಿಎಸ್‌ಗೆ ಸೇರ್ಪಡೆ ಮಾಡಿಕೊಂಡಿದ್ದಾರೆ ಎಂದು ಘೋಷಿಸುವುದು ಶೋಭೆ ತರುವುದಿಲ್ಲ” ಎಂದು ಎಚ್ಚರಿಸಿದರು.

ಈ ವಿಚಾರವನ್ನು ರಾಜ್ಯ ಪ್ರಧಾನ ಕಾರ್ಯದರ್ಶಿಗಳ ಗಮನಕ್ಕೆ ತಂದಿದ್ದೇವೆ. ಸಮಸ್ಯೆ ಸರಿಪಡಿಸದಿದ್ದರೆ, ಮುಖಂಡರ ನಿಯೋಗವನ್ನು ಕೇಂದ್ರದ ನಾಯಕರ ಬಳಿಗೆ ಕಳುಹಿಸಿ ವಿಷಯವನ್ನು ಮನವರಿಕೆ ಮಾಡಿಕೊಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಅಧ್ಯಕ್ಷ ಡಾ. ಎನ್.ಎಸ್. ಇಂದ್ರೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀ ಅಶ್ವಿನ್ ಗೌಡ, ಮುಖಂಡರಾದ ಡಾ. ಸಿದ್ದರಾಮಯ್ಯ, ಅಶೋಕ್ ಜಯರಾಂ, ಎಸ್.ಪಿ.ಸ್ವಾಮಿ, ಅಶೋಕ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.