ಕರ್ನಾಟಕದಿಂದ ಪ್ರಧಾನಿ ಅಭ್ಯರ್ಥಿ ಆಗೋರು ಯಾರೂ ಇಲ್ಲ: ಸಿಎಂ ಸಿದ್ದರಾಮಯ್ಯ
ಕರ್ನಾಟಕದಿಂದ ಪ್ರಧಾನಮಂತ್ರಿ ಅಭ್ಯರ್ಥಿ ಆಗುವವರು ಯಾರೂ ಇಲ್ಲ. ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಕಾಮನ್ ಮಿನಿಮಮ್ ಪ್ರೋಗ್ರಾಂ ಚರ್ಚಿಸಿ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತಾರೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು(ಮೇ.21): ಕರ್ನಾಟಕದಿಂದ ಪ್ರಧಾನಮಂತ್ರಿ ಅಭ್ಯರ್ಥಿ ಆಗುವವರು ಯಾರೂ ಇಲ್ಲ. ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಎಲ್ಲಾ ಪಕ್ಷಗಳೂ ಸೇರಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳನ್ನು ಚರ್ಚಿಸಿ ಪ್ರಧಾನಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಮಾಧ್ಯಮ ಸಂವಾದ ಉದ್ದೇಶಿಸಿ ಮಾತನಾಡಿದ ಅವರು, 2014ರಲ್ಲಿ ಗುಜರಾತ್ ಮಾದರಿ ಮುಂದಿಟ್ಟುಕೊಂಡು ನರೇಂದ್ರ ಮೋದಿ ಪ್ರಧಾನಿಯಾದರು. ಈಗ ಕರ್ನಾಟಕದ ಗ್ಯಾರಂಟಿ ಮಾದರಿ ಮುಂದಿಟ್ಟುಕೊಂಡು ಕಾಂಗ್ರೆಸ್ ಚುನಾವಣೆಗೆ ಹೋಗುತ್ತಿರುವುದರಿಂದ ಕರ್ನಾಟಕದಿಂದ ಹಿಂದುಳಿದ ವರ್ಗದ ನಾಯಕರೊಬ್ಬರು ಪ್ರಧಾನಿ ಆಗಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದರು.
ನಮ್ಮ ರಾಜ್ಯದಲ್ಲಿ ಕೊಟ್ಟ ಮಾತಿನಂತೆ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದ್ದೇವೆ. ಇದು ದೇಶಕ್ಕೆ ಮಾದರಿಯಾಗಿದ್ದು, ಕೇಂದ್ರದಲ್ಲೂ ಕಾಂಗ್ರೆಸ್ ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಇದು ಕರ್ನಾಟಕದ ಮಾದರಿ ಹೌದು. ಆದರೆ ಕರ್ನಾಟಕದಿಂದ ಪ್ರಧಾನಮಂತ್ರಿ ಅಭ್ಯರ್ಥಿ ಆಗುವವರು ಯಾರೂ ಇಲ್ಲ. ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಕಾಮನ್ ಮಿನಿಮಮ್ ಪ್ರೋಗ್ರಾಂ ಚರ್ಚಿಸಿ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತಾರೆ ಎಂದರು.