ಲಕ್ಷ್ಮಣ ಸವದಿ ಕಣ್ಣೀರು, ಕಾಂಗ್ರೆಸ್ ಸೇರುವ ಸಾಧ್ಯತೆ, ಶೆಟ್ಟರ್ ಬಂಡಾಯ, ಮನವೊಲಿಕೆಗೆ ಮುಂದಾದ ಹೈಕಮಾಂಡ್, ಎಂಎಲ್‌ಸಿ ಸ್ಥಾನಕ್ಕೆ ಆರ್.ಶಂಕರ್ ರಾಜೀನಾಮೆ, ಶಿವಮೊಗ್ಗ, ರಾಮದುರ್ಗ, ಜೇವರ್ಗಿಗಳಲ್ಲಿ ಪ್ರತಿಭಟನೆ.
ಬೆಂಗಳೂರು(ಏ.12): ಮೊದಲ ಪಟ್ಟಿ ಬಿಡುಗಡೆ ಬೆನ್ನ ಹಿಂದೆಯೇ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಟಿಕೆಟ್ ವಂಚಿತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಣೆಬೆನ್ನೂರು ಕ್ಷೇತ್ರದಲ್ಲಿ ಟಿಕೆಟ್ ತಪ್ಪಿದ್ದಕ್ಕಾಗಿ ಅಸಮಾಧಾನಗೊಂಡಿರುವ ಮಾಜಿ ಸಚಿವ ಆರ್. ಶಂಕರ್ ಅವರು ವಿಧಾನ ಪರಿಷತ್ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಲು ನಿರ್ಧರಿಸಿದ್ದು, ಪಕ್ಷೇತರರಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಇದೇ ವೇಳೆ ಅಥಣಿಯಲ್ಲಿ ಟಿಕೆಟ್ ಕೈತಪ್ಪಿದ್ದಕ್ಕೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿಯವರು ಬಣಜಿಗರ ಸಮಾವೇಶದಲ್ಲಿ ಕಣ್ಣೀರು ಹಾಕಿದ್ದಾರೆ. ಅವರು ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಕುಂದಗೋಳದಲ್ಲಿ ಟಿಕೆಟ್ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಮಾಜಿ ಶಾಸಕ ಎಸ್.ಐ.ಚಿಕ್ಕನಗೌಡರು ಅವರು ಪಕ್ಷೇತರರಾಗಿ ಸ್ಪರ್ಧಿಸುವ ಸುಳಿವು ನೀಡಿದ್ದಾರೆ.
ಇದೇ ವೇಳೆ, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಟಿಕೆಟ್ ಕೈತಪ್ಪುವ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನಗೊಂಡಿರುವ ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರು ಬಂಡಾಯದ ಸುಳಿವು ನೀಡಿದ್ದು, ಅವರ ಮನವೊಲಿಕೆಗೆ ಹೈಕಮಾಂಡ್ ಮುಂದಾಗಿದೆ. ಈ ಮಧ್ಯೆ, ಶಿವಮೊಗ್ಗದಲ್ಲಿ ಟಿಕೆಟ್ ಕೈತಪ್ಪುವ ಸುಳಿವು ದೊರೆತ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದು, ಅವರ ಬೆಂಬಲಿಗರು ಪಕ್ಷದ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದ್ದಾರೆ.
ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, 189 ಮಂದಿಗೆ ಟಿಕೆಟ್ ಘೋಷಣೆ, 52 ಹೊಸ ಮುಖ!
ಜೇವರ್ಗಿಯಲ್ಲಿ ಶಿವನಗೌಡ ಪಾಟೀಲ್ ರದ್ದೇವಾಡಗಿಗೆ ಟಿಕೆಟ್ ಘೋಷಿಸಿದ್ದಕ್ಕೆ ಅಸಮಾಧಾನಗೊಂಡಿರುವ ದೊಡ್ಡಪ್ಪ ಗೌಡ ಪಾಟೀಲ್ ಬೆಂಬಲಿಗರು, ಜೇವರ್ಗಿ ಹಾಗೂ ಯಡ್ರಾಮಿಗಳಲ್ಲಿ ಪ್ರತಿಭಟನೆ ನಡೆಸಿ, ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಫ್ಜಲಪುರದಲ್ಲಿ ಟಿಕೆಟ್ ಸಿಗದಿದ್ದಕ್ಕೆ ಅಸಮಾಧಾನಗೊಂಡಿರುವ ನಿತಿನ್ ಗುತ್ತೇದಾರ್ ಅಭಿಮಾನಿಗಳು, ‘ಅಫ್ಜಲಪುರದಲ್ಲಿ ಬಿಜೆಪಿಗೆ ಸೋಲು ಖಚಿತ’ ಎಂದು ಮೊಬೈಲ್‌ಗೆ ಸ್ಟೇಟಸ್ ಹಾಕಿ, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆ ರಾಮದುರ್ಗದಲ್ಲಿ ಹಾಲಿ ಶಾಸಕ ಮಹಾದೇವಪ್ಪ ಯಾದವಾಡ ಅವರಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.
ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.
