ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರ ಹಿಂದೂ ವಿರೋಧಿ ಸರ್ಕಾರ ಎಂದು ಹರಿಹಾಯ್ದಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹುಬ್ಬಳ್ಳಿಯಲ್ಲಿ ಹಿಂದೂ ಕಾರ್ಯಕರ್ತರ ಬಂಧನ ಖಂಡಿಸಿ ಬುಧವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.
ಬೆಂಗಳೂರು (ಜ.03): ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರ ಹಿಂದೂ ವಿರೋಧಿ ಸರ್ಕಾರ ಎಂದು ಹರಿಹಾಯ್ದಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹುಬ್ಬಳ್ಳಿಯಲ್ಲಿ ಹಿಂದೂ ಕಾರ್ಯಕರ್ತರ ಬಂಧನ ಖಂಡಿಸಿ ಬುಧವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾನು ಹಿಂದೂ ವಿರೋಧಿ ಎಂಬುದನ್ನು ಈ ಸರ್ಕಾರವು ರಾಜ್ಯ ಮತ್ತು ದೇಶದ ಜನತೆಗೆ ಪದೇಪದೇ ನೆನಪು ಮಾಡುವ ಕೆಲಸ ಮಾಡುತ್ತಿದೆ. ಹುಬ್ಬಳ್ಳಿಯಲ್ಲಿ 31 ವರ್ಷದ ಹಳೆಯ ಪ್ರಕರಣಕ್ಕೆ ಮರುಜೀವ ನೀಡಿ ಹಿಂದೂ ಕಾರ್ಯಕರ್ತರನ್ನು ಬಂಧಿಸಿರುವುದನ್ನು ಪಕ್ಷ ಬಲವಾಗಿ ಖಂಡಿಸುತ್ತದೆ ಎಂದರು.
ದೇಶವೇ ಸಂಭ್ರಮದಲ್ಲಿ ಇರುವಾಗ ರಾಮಭಕ್ತನನ್ನು ಬಂಧಿಸುವುದಾದರೆ ನಿಮಗೆಷ್ಟು ಧೈರ್ಯ? ಕಾನೂನು- ಸುವ್ಯವಸ್ಥೆಗೆ ಭಂಗ ತರುವ ದುಸ್ಸಾಹಸಕ್ಕೆ ಮುಖ್ಯಮಂತ್ರಿಗಳೇ ಕೈ ಹಾಕುತ್ತಿದ್ದಾರೆ. ರಾಜ್ಯ ಸರ್ಕಾರಕ್ಕೆ ಆದ್ಯತೆ ಯಾವುದು? ಸಂದರ್ಭ ಮತ್ತು ನಿಮ್ಮ ಉದ್ದೇಶ ಏನು ಎಂದು ಖಾರವಾಗಿ ಪ್ರಶ್ನಿಸಿದರು. ಈ ತಿಂಗಳ 22ರಂದು ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಪ್ರತಿಷ್ಠಾಪನೆ ಆಗುವ ಶುಭ ಸಂದರ್ಭದಲ್ಲಿ ಇಡೀ ರಾಜ್ಯ ಮಾತ್ರವಲ್ಲದೆ ದೇಶಾದ್ಯಂತ ಕೋಟ್ಯಂತರ ಹಿಂದೂ ಕಾರ್ಯಕರ್ತರು ಸಂತಸದಲ್ಲಿದ್ದಾರೆ. ದೇಶದೆಲ್ಲೆಡೆ ಸಂಭ್ರಮದ ವಾತಾವರಣ ಇದೆ. ಇಂಥ ಸಂದರ್ಭವನ್ನು ಆಯ್ಕೆ ಮಾಡಿಕೊಂಡು ಕೈಗೊಂಡ ಕ್ರಮದ ಮೂಲಕ ತಮ್ಮದು ಹಿಂದೂ ವಿರೋಧಿ ಸರ್ಕಾರ ಎಂದು ದೇಶಕ್ಕೇ ತೋರಿಸಿಕೊಟ್ಟಿದ್ದಾರೆ ಎಂದು ವ್ಯಂಗ್ಯವಾಡಿದರು.
ಕಾಂಗ್ರೆಸ್ ಶ್ರೀರಾಮಮಂದಿರ ರೀವೆಂಜ್ ತೀರಿಸಿಕೊಳ್ಳಲು ಹೊರಟಿದೆ: ಪ್ರಲ್ಹಾದ್ ಜೋಶಿ
ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬುಧವಾರ ಇಡೀ ರಾಜ್ಯಾದ್ಯಂತ ಹೋರಾಟ ಮಾಡಲು ಕರೆ ನೀಡುತ್ತಿದ್ದೇವೆ. ಬೆಂಗಳೂರಿನ ಫ್ರೀಡಂ ಪಾರ್ಕ್ ಮಾತ್ರವಲ್ಲದೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದರು. ಅಯೋಧ್ಯೆಯ ಮಂತ್ರಾಕ್ಷತೆಯನ್ನು ರಾಜ್ಯ ಮಾತ್ರವಲ್ಲದೆ, ದೇಶಾದ್ಯಂತ ಪ್ರತಿ ಮನೆಗೂ ತಲುಪಿಸುತ್ತಿದ್ದಾರೆ. ಅಲ್ಲಿ ಕೂಡ ಕಾಂಗ್ರೆಸ್ ಸರ್ಕಾರ ಅಡ್ಡಿ ಮಾಡುತ್ತಿದೆ, ಪುಢಾರಿತನ ಮಾಡುತ್ತಿದೆ ಎಂದು ಗೊತ್ತಾಗಿದೆ. ಇದನ್ನೆಲ್ಲ ಗಮನಿಸಿ ಹೋರಾಟಕ್ಕೆ ಮುಂದಾಗಿದ್ದೇವೆ ಎಂದು ವಿಜಯೇಂದ್ರ ತಿಳಿಸಿದರು.
ಹುಬ್ಬಳ್ಳಿಯಲ್ಲಿ 31 ವರ್ಷದ ಹಳೆಯ ಪ್ರಕರಣಕ್ಕೆ ಮರುಜೀವ ನೀಡಿ ಹಿಂದೂ ಕಾರ್ಯಕರ್ತರನ್ನು ಬಂಧಿಸಿರುವುದನ್ನು ಬಲವಾಗಿ ಖಂಡಿಸುತ್ತೇವೆ. ದೇಶವೇ ಸಂಭ್ರಮದಲ್ಲಿ ಇರುವಾಗ ರಾಮಭಕ್ತನನ್ನು ಬಂಧಿಸಲು ನಿಮಗೆಷ್ಟು ಧೈರ್ಯ?
- ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ
ತಪ್ಪು ಮಾಡಿದವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಬಾರದೆ? ತಪ್ಪು ಮಾಡಿದರೂ ಬಿಟ್ಟು ಬಿಡಬೇಕಾ? ರಾಮಜನ್ಮಭೂಮಿ ಹೋರಾಟಗಾರರ ಮೇಲೆ ನಿಯಮಾನುಸಾರ ಕ್ರಮ ಕೈಗೊಳ್ಳಲಾಗಿದೆ.
- ಸಿದ್ದರಾಮಯ್ಯ ಮುಖ್ಯಮಂತ್ರಿ
ಬಿಜೆಪಿಯವರಿಂದ ಪಕ್ಷಾತೀತವಾಗಿ ರಾಮಮಂದಿರ ಲೋಕಾರ್ಪಣೆಯಾಗಲಿ: ಸಚಿವ ಮಂಕಾಳ ವೈದ್ಯ
ರಾಜ್ಯದಲ್ಲಿ ಇಸ್ಲಾಮಿಕ್, ಐಸಿಸ್, ಮೊಘಲ್ ಸರ್ಕಾರ ಮಾಡಲು ಸಿದ್ದರಾಮಯ್ಯ ಹೊರಟಿದ್ದಾರೆ. ಹೊಟ್ಟೆಕಿಚ್ಚಿನಿಂದ ಶ್ರೀರಾಮ ಭಕ್ತರನ್ನು ಬಂಧಿಸುವ ಮೂಲಕ ರಾಜ್ಯ ಸರ್ಕಾರ ತನ್ನ ನೀಚತನ ತೋರಿಸುತ್ತಿದೆ.
- ಪ್ರಹ್ಲಾದ್ ಜೋಶಿ, ಕೇಂದ್ರ ಸಚಿವ
