ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಭಯೋತ್ಪಾದಕ ಮೊಬೈಲ್ ಬಳಸಿದ ಪ್ರಕರಣವನ್ನು ಎನ್‌ಐಎ ತನಿಖೆಗೆ ನೀಡಬೇಕು. ಈ ಬಗ್ಗೆ ಹೆಚ್ಚು ತನಿಖೆ ಮಾಡಿದರೆ ಹೊಸ ವಿಚಾರಗಳು ಗೊತ್ತಾಗುತ್ತದೆ ಎಂದು ಆರ್.ಅಶೋಕ್ ಆಗ್ರಹಿಸಿದ್ದಾರೆ.
ಬೆಂಗಳೂರು (ನ.12): ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಭಯೋತ್ಪಾದಕ ಮೊಬೈಲ್ ಬಳಸಿದ ಪ್ರಕರಣವನ್ನು ಎನ್‌ಐಎ ತನಿಖೆಗೆ ನೀಡಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ದೆಹಲಿಯಲ್ಲಿ ನಡೆದ ಘಟನೆ ಭಯೋತ್ಪಾದನಾ ಕೃತ್ಯ ಎಂಬ ಅನುಮಾನವಿದೆ. ಇದೇ ಸಮಯದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಬ್ಬ ಭಯೋತ್ಪಾದಕ ಮೊಬೈಲ್ ಬಳಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಹೆಚ್ಚು ತನಿಖೆ ಮಾಡಿದರೆ ಹೊಸ ವಿಚಾರಗಳು ಗೊತ್ತಾಗುತ್ತದೆ.
ಇದು ದೇಶದ ಭದ್ರತೆಗೆ ಸಂಬಂಧಿಸಿದ ವಿಷಯವಾಗಿರುವುದರಿಂದ ಇದನ್ನು ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಪ್ರತಿಪಾದಿಸಿದರು. ಡಾಕ್ಟರ್‌ಗಳು ಸೇರಿ ಹೆಚ್ಚು ಶಿಕ್ಷಣ ಪಡೆದ ಮುಸ್ಲಿಮರೇ ಭಯೋತ್ಪಾದಕರಾಗಿ ಬದಲಾಗುತ್ತಿದ್ದಾರೆ. ಆದ್ದರಿಂದ ಕಾಂಗ್ರೆಸ್ ಈ ಬಗ್ಗೆ ಹೆಚ್ಚು ಎಚ್ಚರ ವಹಿಸಬೇಕಿದೆ. ಅಧಿಕಾರಕ್ಕೆ ಬರಲು ಓಲೈಕೆ ಮಾಡುವುದರಿಂದ ಹೀಗೆಲ್ಲ ಆಗುತ್ತಿದೆ. ಪರಪ್ಪನ ಅಗ್ರಹಾರದಲ್ಲೂ ಕಾಂಗ್ರೆಸ್‌ನ ತಪ್ಪಿನಿಂದಲೇ ಉಗ್ರವಾದಿಗಳು ಮೊಬೈಲ್ ಬಳಸುವಂತಾಗಿದೆ. ಇಂಥ ವೈಫಲ್ಯ ಒಪ್ಪಿಕೊಂಡು ಕಾಂಗ್ರೆಸ್ ನಾಯಕರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಇದು ಮನಮೋಹನ್ ಸಿಂಗ್ ಸರ್ಕಾರವಲ್ಲ. ಪ್ರಧಾನಿ ಮೋದಿ ಸರ್ಕಾರದಲ್ಲಿ ಭಯೋತ್ಪಾದಕರಿಗೆ ಯಾವುದೇ ವಿನಾಯ್ತಿ ನೀಡುವುದಿಲ್ಲ ಎಂಬುದು ಇಡೀ ಜಗತ್ತಿಗೆ ತಿಳಿದಿದೆ. ಈ ಘಟನೆ ವಿರುದ್ಧವೂ ಕೇಂದ್ರ ಸರ್ಕಾರ ಕಠಿಣ ಕ್ರಮ ವಹಿಸಲಿದೆ. ಕಾಂಗ್ರೆಸ್ ಇದ್ದಾಗ ನಕ್ಸಲ್ ಚಟುವಟಿಕೆ ಅಧಿಕವಾಗಿತ್ತು. ಅದನ್ನು ಗೃಹ ಸಚಿವ ಅಮಿತ್ ಶಾ ಬಹುತೇಕ ನಿರ್ಮೂಲನೆ ಮಾಡಿದ್ದಾರೆ. ಅದೇ ರೀತಿ ಭಯೋತ್ಪಾದನೆ ಕೂಡ ನಿರ್ಮೂಲನೆಯಾಗಲಿದೆ ಎಂದರು.
ಎಡಿಜಿಪಿ ಹಿತೇಂದ್ರ ನೇತೃತ್ವದಲ್ಲಿನ ಸಮಿತಿಗೆ ಕಾರಾಗೃಹ ಅಧಿಕಾರಿ?
ಕಾರಾಗೃಹಗಳ ಸುಧಾರಣೆಗೆ ರಚಿಸಲಾಗಿರುವ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಆರ್.ಹಿತೇಂದ್ರ ನೇತೃತ್ವದ ಉನ್ನತ ಮಟ್ಟದ ಸಮಿತಿಗೆ ಹಾಲಿ ಅಥವಾ ನಿವೃತ್ತ ಕಾರಾಗೃಹ ಅಧಿಕಾರಿಯೊಬ್ಬರು ಸೇರ್ಪಡೆಗೊಳ್ಳುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ. ತಮ್ಮ ಇಲಾಖೆಯ ಹಾಲಿ ಅಥವಾ ನಿವೃತ್ತ ಅಧಿಕಾರಿ ಸೇರಿಸುವಂತೆ ಕೋರಿ ರಾಜ್ಯ ಸರ್ಕಾರಕ್ಕೆ ಕಾರಾಗೃಹ ಮತ್ತು ಸುಧಾರಣಾ ಇಲಾಖೆ ಪತ್ರ ಬರೆದು ಮನವಿ ಮಾಡಿದೆ. ಈ ಬೆಳವಣಿಗೆ ಹಿನ್ನಲೆಯಲ್ಲಿ ಐಪಿಎಸ್ ಅಧಿಕಾರಿಗಳ ಸಮಿತಿಗೆ ಹೊಸ ಸದಸ್ಯರು ಸೇರಬಹುದು ಎನ್ನಲಾಗಿದೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿಗಳಿಗೆ ವಿಶೇಷ ಸೌಲಭ್ಯ ಕಲ್ಪಿಸಿದ ಆರೋಪ ಕೇಳಿ ಬಂದಿತ್ತು. ಈ ವಿವಾದ ಹಿನ್ನೆಲೆಯಲ್ಲಿ ಕಾರಾಗೃಹ ಆಡಳಿತ ಮತ್ತು ಭದ್ರತಾ ಸುಧಾರಣೆಗೆ ನಿರ್ಧರಿಸಿರುವ ಸರ್ಕಾರ, ಈ ಸಂಬಂಧ ಎಡಿಜಿಪಿ ಹಿತೇಂದ್ರ ನೇತೃತ್ವದಲ್ಲಿ ನಾಲ್ವರು ಐಪಿಎಸ್ ಅಧಿಕಾರಿಗಳ ಸಮಿತಿ ರಚಿಸಿದೆ.
