ಹೇಳಿ ಬಂದ ಯಡಿಯೂರಪ್ಪ, ತಿಂಗಳಿಗೊಮ್ಮೆ ಕರ್ನಾಟಕಕ್ಕೆ ಬರ್ತಾರಂತೆ ಮೋದಿ
ಬಿಎಸ್ ಯಡಿಯೂರಪ್ಪ ಅವರು ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯರಾದ ಬಳಿಕ ಮೊದಲ ಬಾರಿಗೆ ದೆಹಲಿಗೆ ಹೋಗಿಬಂದಿದ್ದು, ಅಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ ಬಂದಿದ್ದಾರೆ. ಈ ವೇಳೆ ಮೋದಿಗೆ ತಿಂಗಳಿಗೊಮ್ಮೆ ಕರ್ನಾಟಕಕ್ಕೆ ಬರುವಂತೆ ಮನವಿ ಮಾಡಿದ್ದಾರಂತೆ.
ವರದಿ : ಟಿ.ಮಂಜುನಾಥ್, ಹೆಬ್ಬಗೋಡಿ,
ಬೆಂಗಳೂರು, (ಆಗಸ್ಟ್, 27): ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಲೇ ಇವೆ. ಅದರಲ್ಲೂ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿವೆ.
ಪ್ರಧಾನಿ ನರೇಂದ್ರ ಮೋದಿ ಅವರು ತಿಂಗಳಿಗೊಮ್ಮ ಕರ್ನಾಟಕಕ್ಕೆ ಬರುತ್ತಾರಂತೆ. ಈ ಬಗ್ಗೆ ಸ್ವತಃ ಮಾಜಿ ಸಿಎಂ ಯಡಿಯೂರಪ್ಪ ಅವರು ಕಾರ್ಯಕ್ರಮವೊಂದಲ್ಲಿ ಹೇಳಿದ್ದಾರೆ.
ನರೇಂದ್ರ ಮೋದಿ ಭೇಟಿಯಾಗಿ ಮಹತ್ವದ ಮಾತು ಕೊಟ್ಟು ಬಂದ ಯಡಿಯೂರಪ್ಪ
ಗೌರಿ ಗಣೇಶ ಹಬ್ಬದ ಪ್ರಯುಕ್ತ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ನೇತೃತ್ವದಲ್ಲಿ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದಲ್ಲಿ ಮಹಿಳೆಯರಿಗೆ ಬಾಗಿನ ಅರ್ಪಿಸಿ ಮಾತನಾಡಿದ ಅವರು, ಚುನಾವಣೆ ಹಿನ್ನೆಲೆಯಲ್ಲಿ ಮೋದಿಯವರು ಆಗಾಗ ರಾಜ್ಯಕ್ಕೆ ಬರುವಂತೆ ಮನವಿ ಮಾಡಿದ್ದೇನೆ. ತಿಂಗಳಿಗೊಮ್ಮೆ ಯಾವುದಾದರೂ ಕಾರ್ಯಕ್ರಮಕ್ಕೆ ಬರುವುದಾಗಿ ಒಪ್ಪಿಕೊಂಡಿದ್ದಾರೆ. ಮುಂದಿನ ತಿಂಗಳು ಮಂಗಳೂರಿನಲ್ಲಿ ನಡೆಯುವ ಬೃಹತ್ ಸಮಾವೇಶಕ್ಕೆ ನರೇಂದ್ರ ಮೋದಿಯವರು ಆಹ್ವಾನ ನೀಡಿದ್ದೇವೆ. ಸಮಾವೇಶಕ್ಕೆ ಲಕ್ಷಾಂತರ ಜನರು ಪಾಲ್ಗೊಳ್ಳಲಿದ್ದಾರೆ. ಸಮಾವೇಶ ಮಾಡಲು ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದೇನೆ ಎಂದು ಹೇಳಿದರು.
ರಾಜ್ಯದಲ್ಲಿ ಬಿಜೆಪಿ ಪಕ್ಷ ಬಿಟ್ಟು ಯಾವುದೇ ಪಕ್ಷಗಳು ಅಧಿಕಾರಕ್ಕೆ ಬರದಂತೆ ನೋಡಿಕೊಂಡು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 140 ಕ್ಕೂ ಹೆಚ್ಚು ಸೀಟ್ ಗೆಲ್ಲುವ ಮೂಲಕ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು..
ರಾಜ್ಯದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಎಲ್ಲರೂ ಒಟ್ಟಾಗಿ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಬಲವರ್ಧನೆಗೆ ಶ್ರಮಿಸಲಾಗುವುದು. ಮುಂದೆ ಬರುವಂತಹ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ಯಾವುದೇ ಶಕ್ತಿಯಿಂದ ತಡೆಯಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದ್ದಾರೆ ಎಂದು ಲೇವಡಿ ಮಾಡಿದರು.
ಮುಂದಿನ ಸಲ ಬೈರತಿ ಬಸವರಾಜ ಅವರನ್ನು ಗೆಲ್ಲಿಸಬೇಕಿದೆ. ಅವರ ಮುಂದೆ ಯಾರು ಗೆಲ್ಲದಂತೆ ಅವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಬೇಕು. ದಾವಣಗೆರೆ ಹಾಗೂ ಚಿಕ್ಕಮಗಳೂರು ಉಸ್ತುವಾರಿ ಕೊಟ್ಟು ನಂತರ ವಿಶೇಷ ಕಾಳಜಿ ವಹಿಸಿ ಕೆಲಸ ಮಾಡುತ್ತಿದ್ದಾರೆ. ಪಕ್ಷ ವಹಿಸಿರುವ ಕೆಲಸಗಳನ್ನು ಅಚ್ಚುಕಟ್ಟಾಗಿ ಮಾಡಿ ಪಕ್ಷ ಸಂಘಟನೆ ಮಾಡುತ್ತಿದ್ದಾರೆ ಎಂದು ಶ್ಲಾಘನೀಯ ವ್ಯಕ್ತಪಡಿಸಿದರು.
40% ಕಮೀಷನ್ ಆರೋಪ ಸುಳ್ಳು, ಕಮೀಷನ್ ಬಗ್ಗೆ ಮೂರ್ಖರು ಮಾತನಾಡುತ್ತಾರೆ. ಯಾರೋ ಒಬ್ಬನಿಗೆ ಹೇಳಿಕೊಟ್ಟು ಸುಳ್ಳು ಆರೋಪ ಮಾಡಿಸುತ್ತಿದ್ದಾರೆ. ಸುಳ್ಳು ಆರೋಪ ಮಾಡಿದರೆ ಅದು ಸತ್ಯ ಆಗಲು ಸಾಧ್ಯವಿಲ್ಲ. ಕಾಂಗ್ರೆಸ್ ನವರು ಲೋಕಾಯುಕ್ತಕ್ಕೆ ದೂರು ಕೊಟ್ಟು ತನಿಖೆ ಮಾಡಿಸಲಿ. ಇದಕ್ಕೆ ನಮ್ಮದೇನೂ ಅಭ್ಯಂತರ ಇಲ್ಲ. ಸುಮ್ಮನೆ ಅನಗತ್ಯವಾಗಿ ಆರೋಪ ಮಾಡಲಾಗುತ್ತದೆ. ಸಿದ್ದರಾಮಯ್ಯ ಅವರು ಉದ್ದೇಶಪೂರ್ವಕವಾಗಿ ಆರೋಪ ಮಾಡಿಸುತ್ತಿದ್ದಾರೆ. ಅಧಿವೇಶನದಲ್ಲಿ ಕಾಂಗ್ರೆಸ್ ನವರಿಗೆ ಇದರ ಬಗ್ಗೆ ತಕ್ಕ ಉತ್ತರ ಕೊಡುತ್ತೇವೆ ಎಂದು ಹೇಳಿದರು.
ಸಚಿವ ಬೈರತಿ ಬಸವರಾಜ ಮಾತನಾಡಿ, ಬಾಗಿನ ಕಾರ್ಯಕ್ರಮ ಚುನಾವಣೆಗಾಗಿ ಮಾಡಿರುವ ಕಾರ್ಯಕ್ರಮ ಅಲ್ಲ. ನಮ್ಮ ಕ್ಷೇತ್ರದ ಲಕ್ಷಾಂತರ ಹೆಣ್ಣುಮಕ್ಕಳಿಗಾಗಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಯಾರಾದರೂ ಇದು ಚುನಾವಣೆಗೆ ಮಾಡ್ತಿರೋ ಕಾರ್ಯಕ್ರಮ ಅಂದರೆ ಅವರಿಗೆ ನೀವು ತಕ್ಕ ಉತ್ತರ ಕೊಡಬೇಕು. ನನಗೆ ಅಧಿಕಾರ, ಪದವಿ ಇರಲಿ ಇಲ್ಲದಿರಲಿ ಬಾಗಿನ ಕಾರ್ಯಕ್ರಮ ಮುಂದುವರೆಸಿಕೊಂಡು ಹೋಗುತ್ತಿದ್ದೇನೆ. ಕೋವಿಡ್ ಸಂದರ್ಭದಲ್ಲಿ ಎಲ್ಲರನ್ನು ಸೇರಿಸಿ ಕಾರ್ಯಕ್ರಮ ಮಾಡುವುದಕ್ಕೆ ಆಗಿರಲಿಲ್ಲ. ಈಗ ಕಾರ್ಯಕ್ರಮ ಮಾಡಿದ್ದೇನೆ ಎಂದು ಹೇಳಿದರು
ಈ ಸಂಧರ್ಭದಲ್ಲಿ ರಾಜ್ಯ ಬಿಜೆಪಿ ಮಹಿಳಾ ಅಧ್ಯಕ್ಷೆ ಗೀತಾ ವಿವೇಕಾನಂದ, ಕೆ.ಆರ್.ಪುರ ಮಹಿಳಾ ಅಧ್ಯಕ್ಷೆ ಮಂಜುಳಾದೇವಿ, ಮಾಜಿ ಪಾಲಿಕೆ ಸದಸ್ಯರಾದ ಎಸ್.ಜಿ.ನಾಗರಾಜ್, ಸುರೇಶ್, ಅಂತೋಣಿಸ್ವಾಮಿ, ಮುಖಂಡರಾದ ಶಾಂತ ಕೃಷ್ಣಮೂರ್ತಿ ಮತ್ತಿತರರು ಇದ್ದರು.