ರಾಜ್ಯ ಕಾಂಗ್ರೆಸ್‌ ಸರ್ಕಾರ ಜನ ವಿರೋಧಿ ನೀತಿ ಅನುಸರಿಸುತ್ತಿದೆ. ರಾಜ್ಯದ ಜನತೆಗೆ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರದ ಬಗ್ಗೆ ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ನಾಯಕರು ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಬೆಂಗಳೂರು (ಜೂ.21): ರಾಜ್ಯ ಕಾಂಗ್ರೆಸ್‌ ಸರ್ಕಾರ ಜನ ವಿರೋಧಿ ನೀತಿ ಅನುಸರಿಸುತ್ತಿದೆ. ರಾಜ್ಯದ ಜನತೆಗೆ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರದ ಬಗ್ಗೆ ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ನಾಯಕರು ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಸುರಿಯುವ ಮಳೆಯ ನಡುವೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಆರ್‌.ಅಶೋಕ್‌, ಸಂಸದ ಪಿ.ಸಿ.ಮೋಹನ್‌ ಸೇರಿದಂತೆ ಹಲವು ಬಿಜೆಪಿ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ರಾಜ್ಯ ಸರ್ಕಾರ ಹಾಗೂ ಮುಖ್ಯಮಂತಿ ಸಿದ್ದರಾಮಯ್ಯ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಪ್ರತಿಭಟನೆಗೆ ಯಾವುದೇ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ಪೊಲೀಸರು ಪ್ರತಿಭಟನೆಗೆ ಅವಕಾಶ ನಿರಾಕರಿಸಿದರು. ಈ ವೇಳೆ ಪೊಲೀಸರು ಹಾಗು ಬಿಜೆಪಿ ಮುಖಂಡರ ನಡುವೆ ಕೆಲ ಕಾಲ ವಾಗ್ವಾದ ನಡೆಯಿತು. ಪ್ರತಿಭಟನೆಗೆ ಅಡ್ಡಿಪಡಿಸಿದ ಪೊಲೀಸರ ವಿರುದ್ಧ ಬಿಜೆಪಿ ನಾಯಕರು ಕಿಡಿಕಾರಿದರು.

ಅಕ್ಕಿ ಬೇಯಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಆಕ್ರೋಶ: ಬೃಹತ್‌ ಪ್ರತಿಭಟನೆ

ಪ್ರತಿಭಟನೆಗೆ ಅನುಮತಿ ನಿರಾಕರಣೆ ನಡುವೆಯೂ ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಲು ಮುಂದಾದಾಗ, ಪೊಲೀಸರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಆರ್‌.ಅಶೋಕ್‌, ವಿಧಾನ ಪರಿಷತ್‌ ಸದಸ್ಯರಾದ ಎನ್‌.ರವಿಕುಮಾರ್‌, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಬಿಜೆಪಿಯ ಹಲವು ಮುಖಂಡರು ಹಾಗೂ ಕಾರ್ಯಕರ್ತರನ್ನು ವಶಕ್ಕೆ ಪಡೆದು ಪೊಲೀಸ್‌ ವಾಹನದಲ್ಲಿ ಕರೆದೊಯ್ದು ಬಳಿಕ ಬಿಡುಗಡೆಗೊಳಿಸಿದರು.

ಸರ್ಕಾರದ ವಿರುದ್ಧ ಬೊಮ್ಮಾಯಿ ಕಿಡಿ: ಈ ವೇಳೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ತಿಂಗಳಾದರೂ ಜನರ ಸಂಕಷ್ಟಕ್ಕೆ ಪರಿಹಾರ ಕೊಟ್ಟಿಲ್ಲ. ಗ್ಯಾರಂಟಿಗಳ ವಿಚಾರದಲ್ಲಿ ಹೇಳಿದ್ದೊಂದು, ಮಾಡಿದ್ದು ಮತ್ತೊಂದು. ಎಲ್ಲರಿಗೂ ಉಚಿತ ಬಸ್‌ ಎಂದು ಹೇಳಿ ಈಗ ಹತ್ತಾರು ಷರತ್ತುಗಳನ್ನು ಹಾಕಿದ್ದಾರೆ. ಹೆಣ್ಣು ಮಕ್ಕಳು ಬಸ್‌ನಲ್ಲಿ ತುಂಬಿಕೊಂಡು ಬಸ್ಸಿನ ಬಾಗಿಲು ಮುರಿದಿದ್ದಾರೆ. ನಿರ್ವಾಹಕರು ಕೆಲಸ ಮಾಡಲಾಗದ ಸ್ಥಿತಿ ನಿರ್ಮಾಣವಾಗಿದೆ. ಶಾಲಾ ಮಕ್ಕಳಿಗೆ ಬಸ್‌ ಇಲ್ಲವಾಗಿದೆ. ಜನ ದುಡ್ಡು ಕೊಟ್ಟರೂ ಬಸ್‌ ಸಿಗುತ್ತಿಲ್ಲ. ಈ ಸರ್ಕಾರದ ಸಾರಿಗೆ ವ್ಯವಸ್ಥೆಯನ್ನು ಅವ್ಯವಸ್ಥೆ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅನ್ನಭಾಗ್ಯ ಯೋಜನೆಯಡಿ ಅಕ್ಕಿ ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರ ರಾಜಕೀಯ ಮಾಡುತ್ತಿದೆ. ಅಸ್ತಿತ್ವಕ್ಕೆ ಬಂದು ಒಂದೂವರೆ ತಿಂಗಳಾದರೂ ಅಕ್ಕಿ ಹೊಂದಿಸಿಲ್ಲ. ಸರ್ಕಾದ ಬಳಿ ಹಣವೂ ಇಲ್ಲ. ಇದನ್ನು ಮುಚ್ಚಿಕೊಳ್ಳಲು ಅಕ್ಕಿ ಸಿಗುತ್ತಿಲ್ಲ ಎಂದು ನೆಪ ಹೂಡುತ್ತಿದ್ದಾರೆ. ಬೇರೆ ರಾಜ್ಯಗಳು ಹಾಗೂ ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಲಭ್ಯವಿದೆ. ಸರ್ಕಾರ ಪ್ರಯತ್ನಿಸಿದ್ದರೆ ಅಕ್ಕಿ ಪಡೆಯಬಹುದಿತ್ತು. ಈಗ ಕುಂಟುನೆಪ ಹೇಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯದ ಜನತೆಗೆ ಮೋಸ ಮಾಡಿದೆ ಎಂದು ವಾಗ್ದಾಳಿ ನಡೆಸಿದರು.

ಸರ್ಕಾರಕ್ಕೆ ಜನರಿಂದ ತಕ್ಕ ಪಾಠ: ನಮಗೆ ಪ್ರತಿಭಟನೆ ಮಾಡಲು ಅವಕಾಶ ನೀಡುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನ, ವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮಾತನಾಡುತ್ತಾರೆ. ಆದರೆ, ಇಲ್ಲಿ ಪ್ರತಿಭಟನೆಗೆ ಪೊಲೀಸರು ಅವಕಾಶ ನೀಡುತ್ತಿಲ್ಲ. ನಮ್ಮ ನಾಯಕರು ಪೊಲೀಸರು ಬಂಧಿಸಿದ್ದಾರೆ. ಈಗ ನಮ್ಮನ್ನೂ ಬಂಧಿಸಲಿದ್ದಾರೆ. ರಾಜ್ಯದಲ್ಲಿ ಪ್ರಜಾಪ್ರಭುತ್ವ ಸತ್ತು ಹೋಗಿದೆ. ಜನ ಈ ಸರ್ಕಾರವನ್ನು ಕಿತ್ತೊಗೆಯಲಿದ್ದಾರೆ. ಜನ ವಿರೋಧಿ, ಪ್ರಜಾಪ್ರಭುತ್ವ ವಿರೋಧಿ ಈ ಕಾಂಗ್ರೆಸ್‌ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಆಕ್ರೋಶ ಹೊರಹಾಕಿದರು.

10 ಕೆಜಿ ಉಚಿತ ಅಕ್ಕಿ ಜುಲೈನಲ್ಲಿ ಜಾರಿ ಅನುಮಾನ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಶಾಸಕರಾದ ಎಂ.ಕೃಷ್ಣಪ್ಪ, ಮುನಿರಾಜು, ವಿಧಾನ ಪರಿಷತ್‌ ಸದಸ್ಯರಾದ ತೇಜಸ್ವಿನಿಗೌಡ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಬೆಂಗಳೂರು ಬಿಜೆಪಿ ಜಿಲ್ಲಾಧ್ಯಕ್ಷ ಮಂಜುನಾಥ್‌ ಸೇರಿದಂತೆ ಪಕ್ಷದ ಹಲವು ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.