ಈಗಾಗಲೇ ಬಜೆಟ್‌ನಲ್ಲಿ ಕನಕಪುರ ಮತ್ತು ಬಾಗಲಕೋಟೆಗೆ ವೈದ್ಯಕೀಯ ಕಾಲೇಜು ಘೋಷಿಸಲಾಗಿದೆ. ಉಳಿದ ಏಳು ಜಿಲ್ಲೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆ.
ವಿಧಾನಸಭೆ (ಆ.22): ರಾಜ್ಯದ ಏಳು ಜಿಲ್ಲೆಗಳಲ್ಲಿ ಪಿಪಿಪಿ(ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವ) ಮಾದರಿಯಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ. ಗುರುವಾರ ಪ್ರಶ್ನೋತ್ತರ ಕಲಾಪದ ವೇಳೆ ಶಾಸಕ ಬಸನಗೌಡ ಯತ್ನಾಳ್ ಅವರ ಪ್ರಶ್ನೆಗೆ ಉತ್ತರಿಸಿ, ರಾಜ್ಯದಲ್ಲಿ 24 ಸರ್ಕಾರಿ ವೈದ್ಯಕೀಯ ಕಾಲೇಜುಗಳಿವೆ. ರಾಜ್ಯದ ಪ್ರತಿ ಜಿಲ್ಲೆಗೊಂದು ವೈದ್ಯಕೀಯ ಕಾಲೇಜು ಆರಂಭಿಸುವ ನೀತಿ ರಾಜ್ಯ ಸರ್ಕಾರದ್ದಾಗಿದೆ.
ಈಗಾಗಲೇ ಬಜೆಟ್‌ನಲ್ಲಿ ಕನಕಪುರ ಮತ್ತು ಬಾಗಲಕೋಟೆಗೆ ವೈದ್ಯಕೀಯ ಕಾಲೇಜು ಘೋಷಿಸಲಾಗಿದೆ. ಉಳಿದ ಏಳು ಜಿಲ್ಲೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆ. ಅದರಂತೆ ಮೊದಲ ಹಂತದಲ್ಲಿ ಪಿಪಿಪಿ ಮಾದರಿಯಲ್ಲಿ ವಿಜಯಪುರ, ತುಮಕೂರು, ಕೋಲಾರ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಈ ಸಂಬಂಧ ಮುಕ್ತ ಟೆಂಡರ್ ಕರೆಯಲಾಗುವುದು. ಇದರಲ್ಲಿ ಯಾರು ಬೇಕಾದರೂ ಭಾಗವಹಿಸಬಹುದು ತಿಳಿಸಿದರು.
ಎಲ್ಲಾ ವೈದ್ಯರು ಮಾಸ್ಕ್ ಧರಿಸಿ: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ವೆಂಟಿಲೇಟರ್, ಆಕ್ಸಿಜನ್ ಸೇರಿ ಇತರೆ ಲಭ್ಯತೆ ಕುರಿತು ವರದಿ ನೀಡುವಂತೆ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಸೂಚನೆ ನೀಡಿದ್ದಾರೆ. ಕೋವಿಡ್ ಮುನ್ನಚ್ಚರಿಕಾ ಕ್ರಮಗಳ ಕುರಿತು ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಅವರು, ಇಲಾಖೆ ವ್ಯಾಪ್ತಿಯ ವೈದ್ಯರು, ಆರೋಗ್ಯ ಸಿಬ್ಬಂದಿ ಮಾಸ್ಕ್ ಧರಿಸಬೇಕು ಎಂದು ನಿರ್ದೇಶನ ನೀಡಿದರು. ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದೆ. ಆದರೆ, ಜನತೆ ಯಾವುದೇ ರೀತಿಯಲ್ಲೂ ಆತಂಕ ಪಡುವ ಅಗತ್ಯವಿಲ್ಲ.
ಸರ್ಕಾರ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ. ಜನನಿಬಿಡ ಸ್ಥಳಗಳಲ್ಲಿ ಜ್ವರ, ಶೀತ, ಕೆಮ್ಮ ಇರುವವರು ಮಾಸ್ಕ್ ಧರಿಸಬೇಕು. ಅಲ್ಲದೆ ಗರ್ಭಿಣಿಯರೂ ಮಾಸ್ಕ್ ಬಳಕೆ ಮಾಡಬೇಕು. ಜನರು ಸರ್ಕಾರದೊಂದಿಗೆ ಕೈ ಜೋಡಿಸಿ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಹೇಳಿದರು. ಸಾರಿ ಪ್ರಕರಣಗಳ ಪರೀಕ್ಷೆ ನಡೆಸಬೇಕು. ವೈದ್ಯಕೀಯ ಶಿಕ್ಷಣ ಇಲಾಖೆಯ ಎಲ್ಲ ಆಸ್ಪತ್ರೆ ನಿರ್ದೇಶಕರೊಂದಿಗೆ ಸಭೆ ನಡೆಸಲಾಗಿದೆ. ಪ್ರಯೋಗಾಲಯಗಳ ವ್ಯವಸ್ಥೆ, ಆಕ್ಸಿಜನ್ ಹಾಸಿಗೆ, ವೆಂಟಿಲೇಟರ್‌ಗಳ ಬಗ್ಗೆ ಮಾಹಿತಿ ನೀಡುವಂತೆ ತಿಳಿಸಲಾಗಿದೆ. ಬೇಸಿಗೆ ರಜೆ ಬಳಿಕ ಶಾಲೆಗಳು ಪ್ರಾರಂಭವಾಗಿವೆ. ವಿದ್ಯಾರ್ಥಿಗಳಿಗೆ ಜ್ವರ, ಶೀತ, ಕೆಮ್ಮು ಇದ್ದರೆ ಪೋಷಕರು ಶಾಲೆಗಳಿಗೆ ಕಳುಹಿಸಿಬಾರದು. ಒಂದು ವೇಳೆ ಶಾಲೆಯಲ್ಲಿ ಶೀತ, ನೆಗಡಿ ಬಂದರೆ ತಕ್ಷಣವೇ ಪೋಷಕರಿಗೆ ಕರೆ ಮಾಡಿ ಕಳುಹಿಸಬೇಕು ಎಂದರು.
